ADVERTISEMENT

ಎಸ್‌ಸಿಎಸ್‌ಪಿ, ಟಿಎಸ್‌‍ಇ ಕ್ರಿಯಾಯೋಜನೆಗೆ ಅನುಮೋದನೆ

​ಪ್ರಜಾವಾಣಿ ವಾರ್ತೆ
Published 2 ಜುಲೈ 2021, 11:14 IST
Last Updated 2 ಜುಲೈ 2021, 11:14 IST

ಬೆಂಗಳೂರು: ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಎಸ್‌ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆ (ಟಿಎಸ್‌ಪಿ) ಅಡಿಯಲ್ಲಿ ಪ್ರಸಕ್ತ ವರ್ಷ ₹ 26,005 ಕೋಟಿ ವೆಚ್ಚ ಮಾಡುವ ಪ್ರಸ್ತಾವಗಳುಳ್ಳ ಕ್ರಿಯಾಯೋಜನೆಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ರಾಜ್ಯ ಅಭಿವೃದ್ಧಿ ಪರಿಷತ್‌ ಶುಕ್ರವಾರ ಅನುಮೋದನೆ ನೀಡಿದೆ.

ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅಡಿಯಲ್ಲಿ 35 ಇಲಾಖೆಗಳಿಗೆ ಅನುದಾನ ಹಂಚಿಕೆ ಮಾಡಲಾಗಿದೆ. ಈ ಅನುದಾನದ ಬಳಕೆಗೆ ಸಂಬಂಧಿಸಿದಂತೆ ಎಲ್ಲ ಇಲಾಖೆಗಳೂ ಕ್ರಿಯಾಯೋಜನೆ ಸಲ್ಲಿಸಿದ್ದವು. ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ನೇತೃತ್ವದಲ್ಲಿ ನೋಡಲ್‌ ಏಜೆನ್ಸಿಗಳ ಸಭೆ ನಡೆಸಿ, ಕ್ರಿಯಾಯೋಜನೆಯಲ್ಲಿ ಕೆಲವು ಬದಲಾವಣೆ ಮಾಡಲಾಗಿತ್ತು. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ವಿಧಾನಸಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ನಡೆದ ರಾಜ್ಯ ಅಭಿವೃದ್ಧಿ ಪರಿಷತ್‌ ಸಭೆಯಲ್ಲಿ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಯಿತು.

ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ, ‘ಪ್ರಸಕ್ತ ವರ್ಷ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅಡಿಯಲ್ಲಿ ₹ 26,005.01 ಕೋಟಿ ವೆಚ್ಚ ಮಾಡಲಾಗುತ್ತಿದೆ. ಎಸ್‌ಸಿಎಸ್‌ಪಿ ಅಡಿಯಲ್ಲಿ ₹ 18,331.54 ಕೋಟಿ ಮತ್ತು ಟಿಎಸ್‌ಪಿ ಅಡಿಯಲ್ಲಿ ₹ 7,673.47 ಕೋಟಿ ವೆಚ್ಚ ಮಾಡುವ ಪ್ರಸ್ತಾವಗಳುಳ್ಳ ಕ್ರಿಯಾಯೋಜನೆಗೆ ರಾಜ್ಯ ಅಭಿವೃದ್ಧಿ ಪರಿಷತ್‌ ಅನುಮೋದನೆ ನೀಡಿದೆ. ತಕ್ಷಣದಲ್ಲೇ ಯೋಜನೆ ಅನುಷ್ಠಾನಕ್ಕೆ ನಿರ್ದೇಶನ ನೀಡಲಾಗಿದೆ’ ಎಂದರು.

ADVERTISEMENT

ಮುಂದುವರಿದ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಮೊದಲ ಕಂತಿನ ಅನುದಾನವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಹೊಸ ಕಾರ್ಯಕ್ರಮಗಳ ಅನುಷ್ಠಾನವನ್ನು ತ್ವರಿತವಾಗಿ ಆರಂಭಿಸಲಾಗುವುದು. ಅಗತ್ಯವಿರುವ ಸರ್ಕಾರಿ ಆದೇಶಗಳನ್ನು ಹೊರಡಿಸಿ, ಯೋಜನೆಗಳನ್ನು ಜಾರಿಗೆ ತರುವಂತೆ ಎಲ್ಲ ಇಲಾಖೆಗಳ ಮುಖ್ಯಸ್ಥರಿಗೂ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.

ಪೂರ್ಣ ಅನುದಾನ ಬಳಕೆ: ‘ಕಳೆದ ಆರ್ಥಿಕ ವರ್ಷದಲ್ಲಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯ ಯಾವುದೇ ಅನುದಾನವನ್ನು ಬಾಕಿ ಉಳಿಸಿಕೊಂಡಿಲ್ಲ ಅಥವಾ ಅನ್ಯ ಉದ್ದೇಶಕ್ಕೆ ವರ್ಗಾವಣೆ ಮಾಡಿಲ್ಲ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ಧಿಗೆ ಸರ್ಕಾರ ಕಟಿಬದ್ಧವಾಗಿದೆ’ ಎಂದು ಯಡಿಯೂರಪ್ಪ ತಿಳಿಸಿದರು.

ಪ್ರಸಕ್ತ ವರ್ಷದ ಪರಿಸ್ಥಿತಿಯನ್ನು ಗಮನದಲ್ಲಿ ಇರಿಸಿಕೊಂಡು ಆರ್ಥಿಕ, ಶಿಕ್ಷಣ, ಆರೋಗ್ಯ ಮತ್ತು ಇತರ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಶೇಕಡ 100ರಷ್ಟು ಗುರಿ ಸಾಧಿಸುವಂತೆ ಎಲ್ಲರಿಗೂ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ಶೇ 95ರಷ್ಟು ಸಾಧನೆ: ಗೋವಿಂದ ಕಾರಜೋಳ ಮಾತನಾಡಿ, ‘ಕಳೆದ ವರ್ಷ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅಡಿಯಲ್ಲಿ ₹ 25,945.90 ಕೋಟಿ ಅನುದಾನ ಮೀಸಲಿಡಲಾಗಿತ್ತು. ₹ 24,646.99 ಕೋಟಿ ವೆಚ್ಚ ಮಾಡಲಾಗಿದೆ. ಯಾವುದೇ ಅನುದಾನದ ವರ್ಗಾವಣೆ ಅಥವಾ ಉಳಿಕೆ ಆಗಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಜಂಟಿ ಖಾತೆಗೆ ತೀರ್ಮಾನ: ವಿವಿಧ ಯೋಜನೆಗಳ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬಗಳಿಗೆ ಜಮೀನು ವಿತರಿಸುವಾಗ ಜಂಟಿ ಖಾತೆಗಳನ್ನೇ ಮಾಡಬೇಕೆಂಬ ತೀರ್ಮಾನವನ್ನು ರಾಜ್ಯ ಅಭಿವೃದ್ಧಿ ಪರಿಷತ್‌ ಸಭೆಯಲ್ಲಿ ಕೈಗೊಳ್ಳಲಾಗಿದೆ.

ಶೌಚಾಲಯ ಅಥವಾ ಸ್ನಾನಗೃಹ ನಿರ್ಮಾಣಕ್ಕೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಟ್ಟಾಗಿ ನೀಡುವ ಸಹಾಯಧನದ ಮೊತ್ತವನ್ನು ₹ 15,000ದಿಂದ ₹ 20,000ಕ್ಕೆ ಹೆಚ್ಚಿಸುವ ನಿರ್ಧಾರ ಮಾಡಲಾಗಿದೆ.

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ, ಶಾಸಕರಾದ ರಾಜುಗೌಡ, ಎನ್‌. ಮಹೇಶ್, ಧುರ್ಯೋಧನ ಐಹೊಳೆ, ಕಲಬುರ್ಗಿ ಸಂಸದ ಡಾ.ಜಿ. ಉಮೇಶ್ ಜಾಧವ್‌, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎನ್‌. ನಾಗಾಂಬಿಕಾ ದೇವಿ ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.