ADVERTISEMENT

ಸಹಕಾರಿ ಬ್ಯಾಂಕ್ ಅಧ್ಯಕ್ಷರ ಅವಧಿ ಮೊಟಕಿಗೆ ರಾಜ್ಯ ಸರ್ಕಾರ ಆಕ್ಷೇಪ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2025, 15:30 IST
Last Updated 15 ಡಿಸೆಂಬರ್ 2025, 15:30 IST
<div class="paragraphs"><p>ವಿಧಾನಸೌಧ</p></div>

ವಿಧಾನಸೌಧ

   

ಬೆಳಗಾವಿ: ಅಪೆಕ್ಸ್‌ ಬ್ಯಾಂಕ್‌, ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್‌ ಮತ್ತು ಪಟ್ಟಣ ಸಹಕಾರ ಬ್ಯಾಂಕ್‌ಗಳ ಅಧ್ಯಕ್ಷರ ಅವಧಿಯನ್ನು 10 ವರ್ಷಕ್ಕೆ ನಿಗದಿಗೊಳಿಸಿ ಕಾಯ್ದೆಗೆ ತಂದಿರುವ ತಿದ್ದುಪಡಿ ಮತ್ತು ಭಾರತೀಯ ರಿಸರ್ವ್‌ ಬ್ಯಾಂಕ್ ಹೊರಡಿಸಿರುವ ಸುತ್ತೋಲೆಗೆ ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ.

ಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆ (ತಿದ್ದುಪಡಿ) 2025, ಸೆಕ್ಷನ್‌ 10 ಎ(2)(ಜಿ)ಗೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದೆ. ಇದರ ಅನ್ವಯ ಸತತವಾಗಿ 10 ವರ್ಷ ಅಧ್ಯಕ್ಷರಾದವರು ಆ ಬಳಿಕ ಅಧ್ಯಕ್ಷರಾಗಿ ಮುಂದುವರಿಯುವುದಕ್ಕೆ ಅವಕಾಶವಿಲ್ಲ. ಒಂದು ವೇಳೆ 10 ವರ್ಷದ ಬಳಿಕ ಮುಂದುವರಿದರೆ ಅಂತಹವರನ್ನು ಅನರ್ಹಗೊಳಿಸಲಾಗುತ್ತದೆ.

ADVERTISEMENT

ಈ ಸಂಬಂಧ ಭಾರತೀಯ ರಿಸರ್ವ್ ಬ್ಯಾಂಕ್ ಎಲ್ಲ ರಾಜ್ಯಗಳಿಗೂ ಸುತ್ತೋಲೆಯನ್ನು ಕಳುಹಿಸಿದೆ. ಸುತ್ತೋಲೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದೂ ಸೂಚಿಸಿದೆ.

‘ಇದನ್ನು ವಿರೋಧಿಸಿ ಪ್ರಧಾನಿಯವರಿಗೆ ಪತ್ರ ಬರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀರ್ಮಾನಿಸಿದ್ದಾರೆ. ಕಾಯ್ದೆ ತಿದ್ದುಪಡಿ ಮತ್ತು ಸುತ್ತೋಲೆಯಿಂದಾಗಿ ಸಹಕಾರಿ ಬ್ಯಾಂಕಿಂಗ್‌ ವಲಯದಲ್ಲಿ ಗಂಭೀರ ಬಿಕ್ಕಟ್ಟು ಸೃಷ್ಟಿಯಾಗುತ್ತಿದೆ. ಆದ್ದರಿಂದ ತಕ್ಷಣವೇ ಮಧ್ಯ ಪ್ರವೇಶಿಸಬೇಕು ಎಂದು ಒತ್ತಾಯಿಸಲು ಮುಂದಾಗಿದ್ದಾರೆ’ ಎಂದು ಮೂಲಗಳು ಹೇಳಿವೆ.

ಕೇಂದ್ರದ ಈ ಕ್ರಮದಿಂದ ಕರ್ನಾಟಕ ಮಾತ್ರವಲ್ಲ, ಇಡೀ ದೇಶದಲ್ಲಿ ಸಹಕಾರಿ ಬ್ಯಾಂಕಿಂಗ್‌ ವಲಯ ಸಂಕಷ್ಟಕ್ಕೆ ಸಿಲುಕುತ್ತದೆ. ಅಧ್ಯಕ್ಷರ ಅವಧಿಯನ್ನು 10 ವರ್ಷಕ್ಕೆ ಸೀಮಿತಗೊಳಿಸಿದ್ದು ಸರಿಯಲ್ಲ. ಎಲ್ಲೆಲ್ಲಿ 10 ವರ್ಷ ಆಗಿದೆಯೊ ಅಲ್ಲಿನ ಅಧ್ಯಕ್ಷರನ್ನು ಅನರ್ಹಗೊಳಿಸುವ ಕಾರ್ಯ ನಡೆದಿದೆ. ಅಧ್ಯಕ್ಷ ಹುದ್ದೆ ತೆರವಾದ ಕಡೆಗಳಲ್ಲಿ ಹೊಸ ಅಧ್ಯಕ್ಷರನ್ನು ನೇಮಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಈ ಸಂಸ್ಥೆಗಳ ಆಡಳಿತದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಸಾರ್ವಜನಿಕರೂ ತೊಂದರೆಗೆ ಒಳಗಾಗುತ್ತಾರೆ ಎಂದು ಪ್ರಸ್ತಾಪಿಸಿ ಪತ್ರ ಬರೆಯಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.