ಡಿ.ಕೆ ಶಿವಕುಮಾರ್
- ಪ್ರಜಾವಾಣಿ ಚಿತ್ರ
ಬೆಂಗಳೂರು: ‘ಸರ್ಕಾರದಿಂದ ಗುತ್ತಿಗೆದಾರರಿಗೆ ಒಟ್ಟು ₹ 32 ಸಾವಿರ ಕೋಟಿ ಬಿಡುಗಡೆಗೆ ಬಾಕಿಯಿದೆ. 2–3 ತಿಂಗಳಲ್ಲಿ ಈ ಹಣವನ್ನು ಬಿಡುಗಡೆ ಮಾಡುವುದಾಗಿ ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ನಾವು ಕಾದು ನೋಡುತ್ತೇವೆ’ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್. ಮಂಜುನಾಥ್ ಹೇಳಿದರು.
ಸಂಘದ ನಿಯೋಗದ ಜೊತೆ ಡಿ.ಕೆ. ಶಿವಕುಮಾರ್ ಅವರನ್ನು ಮಂಗಳವಾರ ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ‘ಗುತ್ತಿಗೆಗೆ ಸಂಬಂಧಿಸಿದಂತೆ ನಮ್ಮದೇ ಆದ ಕೆಲವು ಸಮಸ್ಯೆಗಳಿದ್ದವು. ಅವುಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಎಲ್ಲ ಸಮಸ್ಯೆಗಳನ್ನು ಬಗೆಹರಿಸುವ ಭರವಸೆಯನ್ನೂ ಅವರು ನೀಡಿದ್ದಾರೆ’ ಎಂದರು.
‘ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರ ಹಣ ಬಾಕಿ ಇದೆ. ಹಿರಿತನದ ಮೇಲೆ ಹಣ ಬಿಡುಗಡೆ ಮಾಡಬೇಕೆಂಬ ಬೇಡಿಕೆಯಿದೆ. ಕೆಲವು ಅಧಿಕಾರಿಗಳು ತಮ್ಮ ಇಷ್ಟದಂತೆ ಹಣ ಬಿಡುಗಡೆ ಮಾಡಿದ್ದಾರೆ. ಈ ಬಗ್ಗೆ ಉಪ ಮುಖ್ಯಮಂತ್ರಿಯ ಗಮನಕ್ಕೆ ತಂದಿದ್ದೇವೆ’ ಎಂದರು.
‘ಜಲಸಂಪನ್ಮೂಲ ಇಲಾಖೆಯಲ್ಲಿ ₹ 12 ಸಾವಿರ ಕೋಟಿ ಬಾಕಿ ಇದೆ. ಒಟ್ಟು ಎಂಟು ಇಲಾಖೆಗಳ ಬಾಕಿ ಹಣ ಬಿಡುಗಡೆಯ ಜವಾಬ್ದಾರಿಯನ್ನು ಉಪ ಮುಖ್ಯಮಂತ್ರಿ ತೆಗೆದುಕೊಂಡಿದ್ದಾರೆ’ ಎಂದೂ ಹೇಳಿದರು.
ಸಂಘದ ಪ್ರಧಾನ ಕಾರ್ಯದರ್ಶಿ ರವೀಂದ್ರ, ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ನಂದಕುಮಾರ್ ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.