ADVERTISEMENT

ದ್ವೇಷ ಹರಡಲು ರಾಜ್ಯ ಸರ್ಕಾರದ ಯತ್ನ: ಡಿ.ವಿ.ಸದಾನಂದಗೌಡ

​ಪ್ರಜಾವಾಣಿ ವಾರ್ತೆ
Published 26 ಜನವರಿ 2026, 17:23 IST
Last Updated 26 ಜನವರಿ 2026, 17:23 IST
ಬಿಜೆಪಿ ರಾಜ್ಯ ಘಟಕದ ಕಾರ್ಯಾಲಯದ ಆವರಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಮತ್ತು ಇತರ ನಾಯಕರು ಭಾಗವಹಿಸಿದ್ದರು.
ಬಿಜೆಪಿ ರಾಜ್ಯ ಘಟಕದ ಕಾರ್ಯಾಲಯದ ಆವರಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಮತ್ತು ಇತರ ನಾಯಕರು ಭಾಗವಹಿಸಿದ್ದರು.   

ಬೆಂಗಳೂರು: ದೇಶದ ಆರ್ಥಿಕ ಪ್ರಗತಿ ಅದ್ಭುತ ರೀತಿಯಲ್ಲಿ ವಿಕಸಿತವಾಗಿ ಭಾರತವು ಜಾಗತಿಕ ಶಕ್ತಿಯಾಗಿ ರೂಪುಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಸೂತ್ರಗಳೇ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

‘ಸುಮಾರು 50 ವರ್ಷಗಳಿಗೂ ಹೆಚ್ಚು ಕಾಲ ದೇಶದ ಆಡಳಿತ ನಡೆಸಿದವರು ಸಂವಿಧಾನಕ್ಕೆ ಅಪಚಾರ ಮಾಡಿದ್ದನ್ನು ನಾವು ನೋಡಿದ್ದೇವೆ. ಸಂವಿಧಾನ ಬದ್ಧವಾದ ವೇದಿಕೆಯನ್ನು ರಾಜ್ಯಪಾಲರ ಮೂಲಕ ದುರ್ಬಳಕೆ ಮಾಡುವ ಪ್ರಯತ್ನ ಮಾಡಿದ್ದಾರೆ’ ಎಂದು ತಿಳಿಸಿದರು.

ADVERTISEMENT

‘ರಾಜ್ಯದಲ್ಲಿ ರಾಜ್ಯಪಾಲರ ಭಾಷಣದ ಮೂಲಕ ದ್ವೇಷ ಹರಡುವ ಪ್ರಯತ್ನ ಮಾಡಿದ್ದಾರೆ. ಇದೊಂದು ಕೆಟ್ಟ ಸಂಪ್ರದಾಯವಾಗಿದ್ದು, ಇದನ್ನು ಇಡೀ ರಾಜ್ಯದ ಜನತೆ ಗಟ್ಟಿಧ್ವನಿಯಲ್ಲಿ ಖಂಡಿಸಬೇಕಾಗಿದೆ’ ಎಂದೂ ಹೇಳಿದರು.

ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್‌.ರವಿಕುಮಾರ್‌ ಮಾತನಾಡಿ, ‘ನಮ್ಮದೇ ಆದ ಆರ್ಥಿಕ ನೀತಿ, ರಾಜಕೀಯ ನೀತಿ, ಸಾಮಾಜಿಕ–ಶೈಕ್ಷಣಿಕ, ಧಾರ್ಮಿಕ, ಕೈಗಾರಿಕಾ ನೀತಿಯನ್ನು ನಾವು ಅಳವಡಿಸಿಕೊಂಡಿದ್ದೇವೆಯೇ ಎಂಬುದರ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ. ಸ್ವಾತಂತ್ರ್ಯ ಹೋರಾಟಗಾರರ ಕನಸನ್ನು ನನಸು ಮಾಡುವ ದಿಸೆಯಲ್ಲಿ ಪ್ರಧಾನಿ ಮೋದಿ ಶ್ರಮಿಸುತ್ತಿದ್ದಾರೆ’ ಎಂದರು.

‘ಕರ್ನಾಟಕದಲ್ಲಿ ಆಡಳಿತ ವ್ಯವಸ್ಥೆ, ಕಾನೂನು–ಸುವ್ಯವಸ್ಥೆ ಸಂಪೂರ್ಣವಾಗಿ ಹಳಿ ತಪ್ಪಿದೆ. ಇದನ್ನು ನಾವೆಲ್ಲರೂ ಗಂಭೀರವಾಗಿ ಯೋಚಿಸಬೇಕಿದೆ. ರಾಜ್ಯದಲ್ಲೂ ಬದಲಾವಣೆ ತರುವ ಪ್ರಯತ್ನವನ್ನು ಎಲ್ಲರೂ ಒಗ್ಗಟ್ಟಾಗಿ ಮಾಡಬೇಕಾಗಿದೆ’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‌ ಸದಸ್ಯೆ ಭಾರತಿ ಶೆಟ್ಟಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ಎಸ್‌.ನಂದೀಶ್ ರೆಡ್ಡಿ, ಪಕ್ಷದ ಮುಖಂಡರಾದ ವೈ.ಎ.ನಾರಾಯಣಸ್ವಾಮಿ, ಅಬ್ದುಲ್‌ ಅಜೀಂ, ಡಾ. ಲಕ್ಷ್ಮೀ ಅಶ್ವಿನಿ ಗೌಡ, ಪ್ರಕಾಶ್‌ ಶೇಷರಾಘವಾಚಾರ್‌ ಮತ್ತು ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.