ADVERTISEMENT

ಕಳಸಾ ಬಂಡೂರಿ: ವಿಸ್ತೃತ ಯೋಜನಾ ವರದಿಗೆ ರಾಜ್ಯ ಸರ್ಕಾರ ಅಸ್ತು

​ಪ್ರಜಾವಾಣಿ ವಾರ್ತೆ
Published 28 ಜುಲೈ 2020, 9:49 IST
Last Updated 28 ಜುಲೈ 2020, 9:49 IST
ಮಹದಾಯಿ ನದಿ ತಿರುವು ಯೋಜನೆಯ ಸಂಗ್ರಹ ಚಿತ್ರ
ಮಹದಾಯಿ ನದಿ ತಿರುವು ಯೋಜನೆಯ ಸಂಗ್ರಹ ಚಿತ್ರ   

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ಬಳಿ ಮಹದಾಯಿ‌ ನದಿಗೆ ಅಣೆಕಟ್ಟು ನಿರ್ಮಿಸಿ ಕೂಡು ಕಾಲುವೆ ಮುಖಾಂತರ 1.72 ಟಿಎಂಸಿ ನೀರನ್ನು ಕುಡಿಯುವ ಉದ್ದೇಶಕ್ಕಾಗಿ ಮಲಪ್ರಭಾ ನದಿಗೆ ತಿರುಗಿಸುವ ಕಳಸಾ ನಾಲಾ ತಿರುವು ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.

₹ 885.80 ಕೋಟಿ ಮೊತ್ತದ ಪರಿಷ್ಕೃತ ಯೋಜನಾ ವರದಿಗೆ ತಾತ್ವಿಕ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಅಂತೆಯೇ, ಖಾನಾಪುರ ತಾಲ್ಲೂಕಿನ ನೆರಸೆ ಗ್ರಾಮದ ಬಳಿ ಬಂಡೂರ ಹಳ್ಳಕ್ಕೆ ಅಣೆಕಟ್ಟು ನಿರ್ಮಿಸಿ ಕೂಡು ಕಾಲುವೆ ಮುಖಾಂತರ 2.18 ಟಿಎಂಸಿ ನೀರನ್ನು ಕುಡಿಯುವ ಉದ್ದೇಶಕ್ಕಾಗಿ ಬಳಸಿಕೊಳ್ಳಲು ಮಲಪ್ರಭಾ ನದಿಗೆ ತಿರುಗಿಸುವ ಬಂಡೂರ ನಾಲಾ ತಿರುವು ಯೋಜನೆಗೂ ಆಡಳಿತಾತ್ಮಕ ಅನುಮೋದನೆ‌ ದೊರೆತಿದೆ. ₹ 791.50 ಕೋಟಿ ಮೊತ್ತದ ಯೋಜನೆ ಇದಾಗಿದೆ.

‘ಈ ಎರಡೂ ಯೋಜನೆಗಳ ಕಾಮಗಾರಿಗೆ ಟೆಂಡರ್‌ ಪ್ರಕ್ರಿಯೆ ಕೈಗೊಳ್ಳುವ ಮೊದಲು ಆರ್ಥಿಕ ಇಲಾಖೆಯ ಪೂರ್ವಾನುಮೋದನೆ ಪಡೆಯಬೇಕು’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ADVERTISEMENT

‘ಉತ್ತರ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಈ ಕಳಸಾ ಬಂಡೂರ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕೆ ನಮ್ಮ ಸರ್ಕಾರ ಕಟಿಬದ್ಧವಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ, ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.