ADVERTISEMENT

ಸರ್ಕಾರದಿಂದ ವಾಲ್ಮೀಕಿ ಶ್ರೀಗಳಿಗೆ ಅವಮಾನ: ಎಚ್‌ಡಿಕೆ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2022, 15:45 IST
Last Updated 3 ಆಗಸ್ಟ್ 2022, 15:45 IST
ಎಚ್‌.ಡಿ.ಕುಮಾರಸ್ವಾಮಿ
ಎಚ್‌.ಡಿ.ಕುಮಾರಸ್ವಾಮಿ   

ಬೆಂಗಳೂರು: ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಧರಣಿ ನಡೆಸುತ್ತಿರುವ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರ ಬೇಡಿಕೆಯನ್ನು ಕಡೆಗಣಿಸುವ ಮೂಲಕ ರಾಜ್ಯ ಸರ್ಕಾರ ಅವರಿಗೆ ಅವಮಾನ ಮಾಡುತ್ತಿದೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಆರೋಪಿಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ವಾಲ್ಮೀಕಿ ಸ್ವಾಮೀಜಿ ಧರಣಿ ನಡೆಸುತ್ತಿರುವ ಸ್ಥಳಕ್ಕೆ ಬುಧವಾರ ಭೇಟಿನೀಡಿ ಅವರೊಂದಿಗೆ ಚರ್ಚಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಕುಮಾರಸ್ವಾಮಿ, ‘175 ದಿನಗಳಿಂದ ಸ್ವಾಮೀಜಿ ಧರಣಿ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಅಥವಾ ಯಾವುದೇ ಸಚಿವರು ಈವರೆಗೂ ಅವರನ್ನು ಭೇಟಿಮಾಡಿ ಚರ್ಚಿಸಿಲ್ಲ. ಸರ್ಕಾರವೊಂದು ಸ್ವಾಮೀಜಿ ಒಬ್ಬರನ್ನು ನಡೆಸಿಕೊಳ್ಳುವ ರೀತಿ ಇದೇನಾ’ ಎಂದು ಪ್ರಶ್ನಿಸಿದರು.

‘ಹಿಂದೆ ಬಿಜೆಪಿಯ ಕೆಲವು ನಾಯಕರು ವಾಲ್ಮೀಕಿ ಸ್ವಾಮೀಜಿಯವರನ್ನು ನನ್ನ ನೇತೃತ್ವದ ಸರ್ಕಾರದ ವಿರುದ್ಧ ಎತ್ತಿ ಕಟ್ಟಿದ್ದರು. ಈಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ಶಾಸಕ ಬಿ.ಎಸ್‌. ಯಡಿಯೂರಪ್ಪ ಸೇರಿದಂತೆ ಸರ್ಕಾರದ ಕಡೆಯಿಂದ ಯಾರೂ ಸ್ವಾಮೀಜಿಯವರ ಜತೆ ಚರ್ಚಿಸಿಲ್ಲ. ತಕ್ಷಣವೇ ಸ್ವಾಮೀಜಿ ಜತೆ ಮಾತುಕತೆ ನಡೆಸಿ, ಧರಣಿ ಅಂತ್ಯಗೊಳಿಸಲು ಕ್ರಮ ಕೈಗೊಳ್ಳಬೇಕು’ ಎಂದು ಕುಮಾರಸ್ವಾಮಿ ಒತ್ತಾಯಿಸಿದರು.

ADVERTISEMENT

ಶಾಸಕ ರಾಜಾ ವೆಂಕಟಪ್ಪ ನಾಯಕ, ವಿಧಾನ ಪರಿಷತ್‌ನ ಮಾಜಿ ಸದಸ್ಯ ಎಚ್‌.ಎಂ. ರಮೇಶ್‌ ಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.