ADVERTISEMENT

ಸಮ್ಮಿಶ್ರ ಸರ್ಕಾರ ಶೀಘ್ರವೇ ಪತನ: ಅಂಗಡಿ ಭವಿಷ್ಯ

​ಪ್ರಜಾವಾಣಿ ವಾರ್ತೆ
Published 2 ಜೂನ್ 2019, 18:55 IST
Last Updated 2 ಜೂನ್ 2019, 18:55 IST
ಸುರೇಶ ಅಂಗಡಿ
ಸುರೇಶ ಅಂಗಡಿ   

ಬೆಳಗಾವಿ: ‘ಜೆಡಿಎಸ್–ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ಅಲ್ಲಿನ ನಾಯಕರ ವೈಮನಸ್ಸಿನಿಂದಾಗಿ ಶೀಘ್ರವೇ ಪತನವಾಗಲಿದ್ದು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದು ಖಚಿತ’ ಎಂದು ರೈಲ್ವೆ ಖಾತೆ ಸಚಿವ ಸುರೇಶ ಅಂಗಡಿ ಭವಿಷ್ಯ ನುಡಿದರು.

ಭಾನುವಾರ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

‘ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಜನರು ಬಿಜೆಪಿಯ 25 ಮಂದಿಯನ್ನು ಆಯ್ಕೆ ಮಾಡಿದ್ದಾರೆ. ಈ ಮೂಲಕ ದೋಸ್ತಿ ಸರ್ಕಾರವನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಅವರ ಒಲವು ನಮ್ಮ ಪರವಿರುವ ಸಂದೇಶ ಸಾರಿದ್ದಾರೆ. ಹೀಗಾಗಿ, ಇಲ್ಲೂ ನಮ್ಮ ಸರ್ಕಾರ ಬರಬೇಕು ಎನ್ನುವ ಬಯಕೆ ವ್ಯಕ್ತಪಡಿಸಿದ್ದಾರೆ’ ಎಂದರು.

ADVERTISEMENT

‘ಬಿಜೆಪಿ ಸರ್ಕಾರವಿದ್ದಾಗ ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧ ನಿರ್ಮಿಸಿದ್ದೇವೆ. ನಮ್ಮ ಸರ್ಕಾರ ಸರ್ಕಾರ ಬಂದರೆ ಮಾತ್ರ ಅದಕ್ಕೆ ಶಕ್ತಿ ತುಂಬುವ ಕೆಲಸವಾಗುತ್ತದೆ. ಬೆಳಗಾವಿಯಲ್ಲೇ ಒಂದು ತಿಂಗಳು ವಿಧಾನಮಂಡಲ ಅಧಿವೇಶನ ನಡೆಯುವಂತೆ ನೋಡಿಕೊಳ್ಳುತ್ತೇವೆ. ಆ ದಿನಗಳು ದೂರವಿಲ್ಲ’ ಎಂದು ವಿಶ್ವಾಸ ವ್ಯಕ್ತ‍ಪಡಿಸಿದರು.

‘ವಿಧಾನಸಭೆ ಚುನಾವಣೆಯಲ್ಲಿ ಜನರು ಜೆಡಿಎಸ್‌, ಕಾಂಗ್ರೆಸ್‌ ಪಕ್ಷದವರನ್ನು ತಿರಸ್ಕರಿಸಿದ್ದರು. ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡಬೇಕು, ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ ಆಗಬಾರದು ಎಂಬ ದುರುದ್ದೇಶದಿಂದ ಸಮ್ಮಿಶ್ರ ಸರ್ಕಾರ ರಚಿಸಿದ್ದಾರೆ. ಈ ಸರ್ಕಾರ ಬಹಳ ದಿನ ಇರುವುದಿಲ್ಲ. ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ರಾಜೀನಾಮೆ ಕೊಡುವುದು ಒಳಿತು’ ಎಂದರು.

‘ರಾಜ್ಯ ಒಡೆಯುವ ಅಪಸ್ವರ ಎಲ್ಲಿಯೂ ಕೇಳಿಬರಬಾರದು. ಅನೇಕ ಹಿರಿಯರು ಹೋರಾಟ ಮಾಡಿ ಅಖಂಡ ಕರ್ನಾಟಕವನ್ನು ರಚಿಸಿದ್ದಾರೆ. ಯಾವುದೇ ಕಾರಣಕ್ಕೂ ರಾಜ್ಯವನ್ನು ವಿಭಜಿಸುವುದಕ್ಕೆ ಬಿಡುವುದಿಲ್ಲ. ಇಂತಹ ಕೂಗು ಕೇಳಿಬಾರದಂತೆ ರಾಜ್ಯ ಸರ್ಕಾರ ಈ ಭಾಗಕ್ಕೂ ಸೌಲಭ್ಯಗಳನ್ನು ಒದಗಿಸಬೇಕು’ ಎಂದು ಪ್ರತಿಕ್ರಿಯಿಸಿದರು.

ಜಿಂದಾಲ್‌ಗೆ ಭೂಮಿ: ನಿರ್ಧಾರ ಕೈಬಿಡಿ
ಮಂಗಳೂರು: ಜಿಂದಾಲ್ ಕಂಪನಿಗೆ ಕೋಟ್ಯಂತರ ರೂಪಾಯಿ ಬೆಲೆಬಾಳುವ ಭೂಮಿಯನ್ನು ಪರಭಾರೆ ಮಾಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿರುವುದು ಸರಿಯಲ್ಲ. ಕೂಡಲೇ ಈ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಬಿಡಬೇಕು. ಇಲ್ಲದಿದ್ದರೆ ಮಳೆಗಾಲದ ಅಧಿವೇಶನದಲ್ಲಿ ಸದನದಲ್ಲಿ ಹೋರಾಟ ನಡೆಸಲಾಗುವುದು ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದರು.

ಭಾನುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಂದಾಲ್ ಕಂಪನಿಗೆ 3,666 ಎಕರೆ ಭೂಮಿ ಮಾರಾಟ ಮಾಡಲಾಗಿದೆ. ಪುಡಿಗಾಸಿಗೆ ಭೂಮಿಯನ್ನು ಮಾರಾಟ ಮಾಡುವ ಅಗತ್ಯವಾದರೂ ಏನಿತ್ತು ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಜಿಂದಾಲ್ ಕಂಪನಿ ₹1,500 ಕೋಟಿ ಬಾಕಿ ಇರಿಸಿಕೊಂಡಿದೆ. ₹5ರಿಂದ ₹ 6 ಸಾವಿರ ಕೋಟಿ ಮೌಲ್ಯದ ಭೂಮಿಯನ್ನು ಕೇವಲ ₹35 ಕೋಟಿಗೆ ಮಾರಲಾಗುತ್ತಿದೆ. ಈ ಪ್ರಕರಣದಲ್ಲಿ ಸಚಿವ ಸಂಪುಟದ ಮೇಲೆ ಗಂಭೀರ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ ಎಂದು ವಾಗ್ದಾಳಿ ನಡೆಸಿದರು.

‘ರಾಜ್ಯದಲ್ಲಿ 109 ನಗರಾಡಳಿತ ಸಂಸ್ಥೆಗಳಿಗೆ ಚುನಾವಣೆ ನಡೆದು 8 ತಿಂಗಳು ಕಳೆದಿವೆ. ಇದುವರೆಗೆ ಅಧ್ಯಕ್ಷ–ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸಲು ಸರ್ಕಾರ ಮುಂದಾಗುತ್ತಿಲ್ಲ’ ಎಂದ ಅವರು, ‘ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಇದೇ 5 ರಂದು ಬೆಂಗಳೂರಿನಲ್ಲಿ ನಡೆಯಲಿದ್ದು, ಸರ್ಕಾರದ ವೈಫಲ್ಯಗಳ ಬಗ್ಗೆ ಬಿ.ಎಸ್‌. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಚರ್ಚಿಸಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.