ಹೈಕೋರ್ಟ್
ಬೆಂಗಳೂರು: ಪ್ರಮಾಣ ಪತ್ರ ಸಲ್ಲಿಕೆ ಕಲಬುರಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕ್ಷಮೆ ಕೇಳಿರುವುದಾಗಿ ಆರೋಪಿಯಾದ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್.ರವಿಕುಮಾರ್ ಹೈಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿದ್ದಾರೆ.
‘ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ನನ್ನ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಪಡಿಸಬೇಕು’ ಎಂದು ಕೋರಿ ಬಿಜೆಪಿ ಶಾಸಕ ಎನ್.ರವಿಕುಮಾರ್ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ಹೈಕೋರ್ಟ್ ವಕೀಲ ಎಂ.ವಿನೋದ್ ಕುಮಾರ್ ‘ಈ ಹಿಂದಿನ ವಿಚಾರಣೆಯ ವೇಳೆ ನ್ಯಾಯಪೀಠ ನೀಡಿದ ಸೂಚನೆಯಂತೆ ಅರ್ಜಿದಾರರು ಜಿಲ್ಲಾಧಿಕಾರಿ ಬಳಿ ತೆರಳಿ ಕ್ಷಮೆ ಯಾಚಿಸಿದ್ದಾರೆ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು. ಈ ಮಾತಿಗೆ ಪ್ರಾಸಿಕ್ಯೂಷನ್ ಪರ ಹಾಜರಿದ್ದ ವಕೀಲರು ‘ಅರ್ಜಿದಾರರು ಕ್ಷಮೆ ಕೇಳಲು ತೆರಳುವಾಗ ದೊಡ್ಡ ರ‍್ಯಾಲಿ ನಡೆಸಿದ್ದಾರೆ’ ಎಂದು ಆಕ್ಷೇಪಿಸಿದರು.
ವಿನೋದ್ ಕುಮಾರ್ ಇದನ್ನು ಅಲ್ಲಗಳೆದರಾದರೂ ಜಗದೀಶ್ ‘ಈ ಕುರಿತ ವಿಡಿಯೊ ಇದೆ’ ಎಂದರು. ಇದಕ್ಕೆ ನ್ಯಾಯಪೀಠ ರ‍್ಯಾಲಿ ನಡೆಸುವ ಅವಶ್ಯವೇನಿತ್ತು’ ಎಂದು ಅಸಮಾಧಾನ ವ್ಯಕ್ತಪಡಿಸಿತು. ವಾದ-ಪ್ರತಿವಾದ ಆಲಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ನೀಡಿದ್ದ ಮಧ್ಯಂತರ ಆದೇಶವನ್ನು ವಿಸ್ತರಿಸಿತು. ಅಂತೆಯೇ ದೂರುದಾರರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿತು. ಈ ಪ್ರಕರಣದಲ್ಲಿ ರವಿಕುಮಾರ್ ಅವರಿಗೆ ವಿಚಾರಣಾ ನ್ಯಾಯಾಲಯ ಈಗಾಗಲೇ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.