ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಪಡಿಸಿದ ಮತ್ತು ನಗರದ ಸೌಂದರ್ಯಕ್ಕೆ ಧಕ್ಕೆ ತಂದ ಆರೋಪದಡಿ ವಿಧಾನ ಪರಿಷತ್‌ನಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಛಲವಾದಿ ನಾರಾಯಣ ಸ್ವಾಮಿ, ಮಾಜಿ ಸಚಿವ ಸಿ.ಟಿ.ರವಿ ಮತ್ತಿತರ ಬಿಜೆಪಿ ನಾಯಕರ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ.
‘ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ವಿರುದ್ಧ ಹೈಗ್ರೌಂಡ್ಸ್ ಠಾಣೆ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಮತ್ತು ನಗರದ ಜನಪ್ರತಿನಿಧಿಗಳ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ವಿಚಾರಣೆ ರದ್ದುಪಡಿಸಬೇಕು’ ಎಂದು ಕೋರಲಾದ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ಹೈಕೋರ್ಟ್ ವಕೀಲ ಎಂ.ವಿನೋದ್ ಕುಮಾರ್ ಮಂಡಿಸಿದ ವಾದ ಪುರಸ್ಕರಿಸಿದ ನ್ಯಾಯಪೀಠ ಛಲವಾದಿ ನಾರಾಯಣ ಸ್ವಾಮಿ, ಸಿ.ಟಿ.ರವಿ, ರವಿಕುಮಾರ್ ಮತ್ತು ಉಮೇಶ್ ಶೆಟ್ಟಿ ಸೇರಿದಂತೆ ಒಟ್ಟು 12 ಮಂದಿ ವಿರುದ್ಧದ ಕ್ರಿಮಿನಲ್ ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿ ಆದೇಶಿಸಿತು. ಪ್ರತಿವಾದಿ ಹೈಗ್ರೌಂಡ್ಸ್ ಠಾಣಾ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.