ADVERTISEMENT

ಬೆಂಗಳೂರಿನಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಾಟ: ಕಿಟಕಿಗೆ ಹಾನಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಫೆಬ್ರುವರಿ 2023, 12:12 IST
Last Updated 26 ಫೆಬ್ರುವರಿ 2023, 12:12 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಮೈಸೂರು - ಚೆನ್ನೈ ಮಾರ್ಗದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇದರಿಂದಾಗಿ ಕೋಚ್‌ನ ಎರಡು ಕಿಟಕಿ ಗಾಜುಗಳಿಗೆ ಹಾನಿಯಾಗಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನ ಕೆ.ಆರ್‌ಪುರಂ ಬಳಿ ಶನಿವಾರ ಈ ಘಟನೆ ಸಂಭವಿಸಿದೆ. ಚೆನ್ನೈ- ಬೆಂಗಳೂರು- ಮೈಸೂರು ವಂದೇ ಭಾರತ್‌ ಎಕ್ಸ್‌ಪ್ರೆಸ್ ರೈಲು ಚೆನ್ನೈನಿಂದ ಬೆಂಗಳೂರಿಗೆ ಬರುವ ಮಾರ್ಗದಲ್ಲಿ ದುಷ್ಕರ್ಮಿಗಳು ಕಲ್ಲು ಎಸೆದಿದ್ದಾರೆ. ಬೆಂಗಳೂರಿನಲ್ಲಿ ಇಲ್ಲಿವರೆಗೆ ಸಾಮಾನ್ಯ ರೈಲುಗಳನ್ನು ಗುರಿ ಮಾಡಿಕೊಂಡಿದ್ದ ದುಷ್ಕರ್ಮಿಗಳು ಇದೀಗ ಮೊದಲ ಬಾರಿ ವಂದೇ ಭಾರತ್‌ ರೈಲಿಗೆ ಕಲ್ಲೆಸೆದಿದ್ದಾರೆ.

‘ಘಟನೆ ನಡೆದಿರುವುದು ನಿಜ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಈ ಬಗ್ಗೆ ರೈಲ್ವೆ ಸಂರಕ್ಷಣಾ ಪಡೆ (ಆರ್‌ಪಿಎಫ್‌) ಪ್ರಕರಣ ದಾಖಲಿಸಲಾಗಿದೆ. ಈಗಾಗಲೇ ರಾಜ್ಯ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಕ್ರಮ ಕೈಗೊಳ್ಳುವಂತೆ ಮನವಿ ಕೂಡ ಮಾಡಲಾಗಿದೆ’ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ಕಲ್ಲು ತೂರಾಟದಂತಹ ಘಟನೆಗಳು ಕಂಡುಬಂದಲ್ಲಿ ಟೋಲ್-ಫ್ರೀ ಸಹಾಯವಾಣಿ ಸಂಖ್ಯೆ 139ಕ್ಕೆ ಕರೆ ಮಾಡುವಂತೆ ಸಾರ್ವಜನಿಕರು ಮತ್ತು ಪ್ರಯಾಣಿಕರಿಗೆ ಮನವಿ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.