ADVERTISEMENT

‘ದೌರ್ಜನ್ಯ: ಶಿಕ್ಷೆ ಪ್ರಮಾಣ ಹೆಚ್ಚಳಕ್ಕೆ ಕ್ರಮ’–ಸಿ.ಎಂ

ಎಸ್‌ಸಿ, ಎಸ್‌ಟಿ ದೌರ್ಜನ್ಯ: ದೂರು ಸಲ್ಲಿಕೆಯ ವಿಡಿಯೊ ಚಿತ್ರೀಕರಿಸಿ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2020, 20:44 IST
Last Updated 11 ನವೆಂಬರ್ 2020, 20:44 IST
ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ    

ಬೆಂಗಳೂರು: ‘ರಾಜ್ಯದಲ್ಲಿ ದೌರ್ಜನ್ಯ ತಡೆ ಕಾಯ್ದೆ ಅಡಿಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಕೇವಲ ಶೇ 5ರಿಂದ 6ರಷ್ಟಿವೆ. ಈ ಪ್ರಮಾಣವನ್ನು ಹೆಚ್ಚಿಸಲು ವ್ಯಾಜ್ಯ ಮತ್ತು ಅಭಿಯೋಗ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಮುತುವರ್ಜಿಯಿಂದ ಕೆಲಸ ಮಾಡಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೂಚಿಸಿದರು.

ದೌರ್ಜನ್ಯ ತಡೆ ಕಾಯ್ದೆ ಕುರಿತು ಸಮಾಜ ಕಲ್ಯಾಣ ಇಲಾಖೆ ಬುಧವಾರ ಏರ್ಪಡಿಸಿದ್ದ ರಾಜ್ಯಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ದೂರು ಸಲ್ಲಿಸುವ ಸಂದರ್ಭವನ್ನೂ ವಿಡಿಯೊ ಮಾಡಲು ಕ್ರಮ ವಹಿಸಬೇಕು’ ಎಂದು ಪೊಲೀಸ್ ಇಲಾಖೆಗೆ ಸೂಚಿಸಿದರು.

‘ದೌರ್ಜನ್ಯ ಪ್ರಕರಣಗಳಲ್ಲಿ ಎಫ್ಐಆರ್‌ ದಾಖಲಿಸಿದ 60 ದಿನಗಳ ಒಳಗೆ ತನಿಖೆ ಮುಗಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಬೇಕು. ವಿಚಾರಣೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರ ವಹಿಸಬೇಕು. ಸಾಕ್ಷಿದಾರರು ಮತ್ತು ಸಂತ್ರಸ್ತರಿಗೆ ಸೂಕ್ತ ರಕ್ಷಣೆ ನೀಡಬೇಕು’ ಎಂದರು.

ADVERTISEMENT

‘ಪ್ರಸ್ತುತ ಕಾಯ್ದೆಯ ನಿಯಮದಡಿ ದಾಖಲಾಗುವ ಪ್ರಕರಣಗಳಲ್ಲಿ ಪಂಚನಾಮೆ, ಸಾಕ್ಷಿಗಳ ಹೇಳಿಕೆ ದಾಖಲಿಸುವ ಸಂದರ್ಭದಲ್ಲಿ ವಿಡಿಯೊ ಚಿತ್ರೀಕರಣ ಮಾಡಲಾಗುತ್ತಿದೆ. ದೂರು ಸಲ್ಲಿಸಲು ಬಂದ ಸಂತ್ರಸ್ತರ ಹಾದಿ ತಪ್ಪಿಸುವ ಸಾಧ್ಯತೆಗಳನ್ನು ತಪ್ಪಿಸಲು ದೂರು ನೀಡುವ ಸಂದರ್ಭದಲ್ಲಿಯೂ ವಿಡಿಯೊ ಮಾಡಬೇಕು’ ಎಂದು ಮುಖ್ಯಮಂತ್ರಿ ಹೇಳಿದರು.

‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕಾಲೊನಿಗಳಲ್ಲಿ, ತಾಂಡಾಗಳಲ್ಲಿ ಕನಿಷ್ಠ 100 ಪಡಿತರ ಚೀಟಿದಾರರು ಇದ್ದರೆ ನ್ಯಾಯಬೆಲೆ ಅಂಗಡಿ ತೆರೆಯಲು ಕ್ರಮ ತೆಗೆದುಕೊಳ್ಳಬೇಕು’ ಎಂದರು.

‘ದೌರ್ಜನ್ಯಕ್ಕೊಳಗಾದವರಿಗೆ ಪರಿಹಾರ ನೀಡಲಾಗುತ್ತಿದೆ. ಪ್ರಸ್ತುತ ಸಾಲಿನಲ್ಲಿ ₹ 30 ಕೋಟಿ ಅನುದಾನದಲ್ಲಿ ₹ 15 ಕೋಟಿಯನ್ನು ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲಾಗಿದೆ. ನಿಗದಿತ ಸಮಯದೊಳಗೆ ಪರಿಹಾರ ನೀಡಲು ಜಿಲ್ಲಾಧಿಕಾರಿಗಳು ಕ್ರಮವಹಿಸಬೇಕು’ ಎಂದು ಮುಖ್ಯಮಂತ್ರಿ ತಿಳಿಸಿದರು.

‘ಸಂತ್ರಸ್ತರಿಗೆ ಉದ್ಯೋಗ ನೀಡುವ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಗಳಿಗೆ ಅರ್ಜಿ ತಿರಸ್ಕರಿ‌ಸಬಾರದು. ಜಿಲ್ಲಾ ಮತ್ತು ಉಪ ವಿಭಾಗೀಯ ಮಟ್ಟದಲ್ಲಿ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಗಳನ್ನು ಮೂರು ತಿಂಗಳಿಗೊಮ್ಮೆ ಜಿಲ್ಲಾಧಿಕಾರಿ ಮತ್ತು ಸಹಾಯಕ ಆಯುಕ್ತರು ಕಡ್ಡಾಯವಾಗಿ ನಡೆಸಿ ಸಮಸ್ಯೆಗಳನ್ನು ಬಗೆಹರಿಸಬೇಕು’ ಎಂದೂ ಸೂಚಿಸಿದರು.

ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.