ADVERTISEMENT

ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವ ಸಿಬ್ಬಂದಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಆರಗ

​ಪ್ರಜಾವಾಣಿ ವಾರ್ತೆ
Published 20 ಜನವರಿ 2022, 10:09 IST
Last Updated 20 ಜನವರಿ 2022, 10:09 IST
 ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ   

ಬೆಂಗಳೂರು: ‘ಸಮಾಜ ವಿರೋಧಿ ಶಕ್ತಿಗಳ ಜೊತೆ ಗುರುತಿಸಿಕೊಂಡು ಅಪರಾಧಿ ಕೃತ್ಯಗಳಲ್ಲಿ ಭಾಗವಹಿಸುವ ಯಾವುದೇ ಪೊಲೀಸ್ ಸಿಬ್ಬಂದಿ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುವುದು‘ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದರು.

ಚಾಮರಾಜಪೇಟೆ ವ್ಯಾಪ್ತಿಯಲ್ಲಿ ₹ 7.40 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವ ಸಂಚಾರ ಪೊಲೀಸ್ ಠಾಣೆಯ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು.

‘ಮುಖ್ಯಮಂತ್ರಿ ನಿವಾಸದ ಬಳಿ ಭದ್ರತೆಗೆ ನಿಯೋಜಿತರಾಗಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಗಾಂಜಾ ಮಾರಾಟ ಜಾಲದೊಂದಿಗೆ ಸಂಪರ್ಕ ಹೊಂದಿದ್ದರು ಎನ್ನಲಾದ ವಿಷಯಕ್ಕೆ ಸಂಬಂಧಿಸಿದಂತೆ, ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಇಂಥ ಹೀನ ಕೃತ್ಯಗಳನ್ನು ಸಹಿಸುವುದಿಲ್ಲ. ಇಂಥ ಕೆಲವೇ ಸಿಬ್ಬಂದಿಯಿಂದ ಇಲಾಖೆಯಲ್ಲಿರುವ ಒಂದು ಲಕ್ಷಕ್ಕೂ ಹೆಚ್ಚು ಸಿಬ್ಬಂದಿಗೆ ಕೆಟ್ಟ ಹೆಸರು ಬರುತ್ತದೆ’ ಎಂದರು.

ADVERTISEMENT

‘ಅಪರಾಧ ಕೃತ್ಯಗಳನ್ನು ನಿಯಂತ್ರಿಸಲು ನೇಮಿಸಿದ ಸಿಬ್ಬಂದಿ ಗಾಂಜಾ ಮಾರಾಟದವರ ಜೊತೆ ಶಾಮೀಲಾಗುವುದು ಅಕ್ಷಮ್ಯ ಅಪರಾಧ’ ಎಂದು ಅಭಿಪ್ರಾಯಪಟ್ಟ ಅವರು, ಅಂಥವರನ್ನು ಕೇವಲ ಸೇವೆಯಿಂದ ಅಮಾನತು ಮಾಡಿದರೆ ಸಾಲದು, ಅಂಥವರು, ಇಲಾಖೆಯಲ್ಲಿಯೇ ಇರಬಾರದು. ಈ ವಿಷಯಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವರದಿ ಪಡೆದುಕೊಂಡು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು’ ಎಂದರು.

ಕೆಲವು ಯುವ ಕಾಂಗ್ರೆಸ್ ನಾಯಕರು ಕಳೆದ ರಾತ್ರಿ ಹೊಡೆದಾಡಿಕೊಂಡಿದ್ದಾರೆ ಎನ್ನಲಾದ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ‘ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ದೂರು ದಾಖಲಾದರೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಲಿದ್ದಾರೆ’ ಎಂದರು.

ಲೋಕಸಭಾ ಸದಸ್ಯ ಪಿ.ಸಿ. ಮೋಹನ್, ಶಾಸಕ ಜಮೀರ್ ಅಹ್ಮದ್, ವಿಧಾನ ಪರಿಷತ್‌ ಸದಸ್ಯರಾದ ಯು.ಬಿ. ವೆಂಕಟೇಶ್, ರಮೇಶ್ ಗೌಡ ಮತ್ತು ಲೆಹರ್ ಸಿಂಗ್ ಇದ್ದರು.

ಇವುಗಳನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.