ADVERTISEMENT

ನಾಡಿನ ನೆಮ್ಮದಿ ಕೆಡಿಸುವವರ ವಿರುದ್ಧ ಕ್ರಮ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 8 ಜೂನ್ 2023, 20:16 IST
Last Updated 8 ಜೂನ್ 2023, 20:16 IST
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ   

ಬೆಂಗಳೂರು: ‘ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಭಯದ ವಾತಾವರಣದಲ್ಲಿ ಬದುಕುವ ಸನ್ನಿವೇಶವನ್ನು ಬದಲಿಸಿ, ಸುರಕ್ಷತೆಯ ಭಾವ ಮೂಡಿಸಲು ಸರ್ಕಾರ ಕೆಲಸ ಮಾಡಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.

ತಮ್ಮನ್ನು ಭೇಟಿಯಾದ ‘ಎದ್ದೇಳು ಕರ್ನಾಟಕ’ ಸಂಘಟನೆಯ ಪ್ರತಿನಿಧಿಗಳ ಜೊತೆ ಗುರುವಾರ ಅವರು ಸಂವಾದ ನಡೆಸಿದರು.

‘ನಾಡಿನ ಜನತೆ ಬಿಜೆಪಿ, ಆರ್‌ಎಸ್‌ಎಸ್‌  ಸಿದ್ಧಾಂತವನ್ನು ಚುನಾವಣೆಯಲ್ಲಿ ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ. ಇದಕ್ಕಾಗಿ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಶ್ರಮಿಸಿದವರ ನಿರೀಕ್ಷೆಗೆ ತಕ್ಕಂತೆ ಸರ್ಕಾರ ಕೆಲಸ ಮಾಡುತ್ತದೆ. ಕನ್ನಡ ನಾಡಿನ ನೆಮ್ಮದಿ ಕೆಡಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಇನ್ನು ಮುಂದೆ ಮತೀಯ ಗೂಂಡಾಗಿರಿಗೆ ಅವಕಾಶ ಇಲ್ಲ’  ಎಂದರು.

ADVERTISEMENT

‘ಭೀತಿಯ ವಾತಾವರಣ ಸೃಷ್ಟಿಸುವವರು, ಸಾಮಾಜಿಕ ಜಾಲತಾಣಗಳ ಮೂಲಕ ಸಾಮರಸ್ಯ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಪೊಲೀಸ್‌ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ’ ಎಂದರು.

ನಿಯೋಗದಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಕೆ.ಎಂ. ರಾಮಚಂದ್ರಪ್ಪ, ನೂರ್ ಶ್ರೀಧರ್, ವಿಜಯಮ್ಮ, ಮಲ್ಲಿಗೆ, ಜೆ.ಎಸ್. ಪಾಟೀಲ್, ಯೂಸುಫ್ ಖನ್ನಿ, ತಾರಾರಾವ್ ಸೇರಿದಂತೆ ವಿವಿಧ ಸಂಘಟನೆಗಳ 30ಕ್ಕೂ ಹೆಚ್ಚು ಪ್ರತಿನಿಧಿಗಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.