ADVERTISEMENT

ಕಬ್ಬಿನ ದರ ನಿಗದಿ | ಕೇಂದ್ರದ ಅಧಿಕಾರ, ರಾಜ್ಯ ಹೇಗೆ ಹೊಣೆ: ಸಿದ್ದರಾಮಯ್ಯ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2025, 13:11 IST
Last Updated 7 ನವೆಂಬರ್ 2025, 13:11 IST
<div class="paragraphs"><p>ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

ಬೆಂಗಳೂರು: ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ಸಮಸ್ಯೆ ಬಗೆಹರಿಸಲು ಸಿದ್ದರಿದ್ದೇವೆ. ಕೇಂದ್ರ ಸರ್ಕಾರ ಪರಿಹರಿಸಬೇಕಾದ ಸಮಸ್ಯೆಗೂ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರೆ ಹೇಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರೈತ ಮುಖಂಡರನ್ನು ಪ್ರಶ್ನಿಸಿದರು. 

ವಿಧಾನಸೌಧದಲ್ಲಿ ಶುಕ್ರವಾರ ಕಬ್ಬು ಬೆಳೆಗಾರರ ಸಮಸ್ಯೆ, ಕಬ್ಬಿನ ಖರೀದಿ ದರ ಹೆಚ್ಚಳ ಕುರಿತು ರೈತ ಮುಖಂಡರ ಜತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸಕ್ಕರೆಗೆ ಎಂಎಸ್‌ಪಿ, ಕಬ್ಬಿಗೆ ಎಫ್‌ಆರ್‌ಪಿ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಎಥೆನಾಲ್‌ ಹಂಚಿಕೆ, ಸಕ್ಕರೆ ರಫ್ತು ಮಿತಿ ನಿಗದಿಪಡಿಸುವುದೂ ಕೇಂದ್ರ ಸರ್ಕಾರ. ಅವರಿಂದ ಆಗಿರುವ ಸಮಸ್ಯೆಗೆ ರಾಜ್ಯ ಸರ್ಕಾರದಿಂದ ಪರಿಹಾರ ಕೇಳಿದರೆ ಹೇಗೆ ಎಂದರು.

ADVERTISEMENT

ತೂಕದಲ್ಲಿ ಮೋಸ, ರಿಕವರಿ ಕಡಿಮೆ ತೋರಿಸುವುದು ಸೇರಿದಂತೆ ಸಕ್ಕರೆ ಕಾರ್ಖಾನೆಗಳ ಕುರಿತು ಕಬ್ಬು ಬೆಳೆಗಾರರ ಎಲ್ಲ ಅಹವಾಲುಗಳನ್ನೂ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಎಫ್‌ಆರ್‌ಪಿ ದರ ನಿಗದಿ ಮಾಡುವಾಗ ಕೇಂದ್ರ ಸರ್ಕಾರ ಅವೈಜ್ಞಾನಿಕ ಕ್ರಮ ಅನುಸರಿಸಿದೆ. ಉತ್ಪಾದನಾ ವೆಚ್ಚ ಹಿಂದಿನ ವರ್ಷಗಳಿಗಿಂತ 4 ಸಾವಿರ ಕಡಿಮೆ ತೋರಿಸಿದ್ದಾರೆ. ಇದ್ಯಾವ ಲೆಕ್ಕಾಚಾರ. ಕೇಂದ್ರ ಸರ್ಕಾರ ಕಬ್ಬಿಗೆ ನಿಗದಿಪಡಿಸಿರುವ ಎಫ್‌ಆರ್‌ಪಿ ವೈಜ್ಞಾನಿಕವಾಗಿಲ್ಲ. ಸಕ್ಕರೆ ಕಾರ್ಖಾನೆಗಳು ಇಳುವರಿ ರಿಕವರಿ ಕಡಿಮೆ ತೋರಿಸುತ್ತಿವೆ. ಇದನ್ನು ತಪ್ಪಿಸಲು ಪ್ರತಿ ಕಾರ್ಖಾನೆ ಎದುರು ಸರ್ಕಾರದ ವತಿಯಿಂದ ಪ್ರಯೋಗಾಲಯ ತೆರೆಯಬೇಕು. ಕೆಲವು ಕಾರ್ಖಾನೆಗಳು ಹಳೆಯ ಬಾಕಿಯನ್ನು ಉಳಿಸಿಕೊಂಡಿದ್ದು, ಇದರ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರು ಮುಖ್ಯಮಂತ್ರಿಗೆ ಮನವಿ ಮಾಡಿದರು. 

ಇದಕ್ಕೂ ಮೊದಲು ಸಕ್ಕರೆ ಕಾರ್ಖಾನೆ ಮಾಲೀಕರ ಜತೆ ಸಭೆ ನಡೆಸಿದ ಸಿದ್ದರಾಮಯ್ಯ, ರೈತರ ಬೇಡಿಕೆ ಈಡೇರಿಸುವುದರಲ್ಲಿ ಕೇಂದ್ರ ಸರ್ಕಾರದ ಜತೆಗೆ ಕಾರ್ಖಾನೆಗಳ ಜವಾಬ್ದಾರಿಯೂ ಇದೆ. ರಾಜ್ಯ ಸರ್ಕಾರ ರೈತರ ಪರವಾಗಿ ನಿಲ್ಲಲಿದೆ.  ಕಬ್ಬು ಬೆಳೆಗಾರರಿಗೆ ನೆರವಾಗುವುದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಜವಾಬ್ದಾರಿ. ಎಫ್‌ಆರ್‌ಪಿಯಲ್ಲಿ ಸಾಗಾಟ ಮತ್ತು ಕಟಾವು ವೆಚ್ಚ ಸಹ ಸೇರಿದೆ. ಸಕ್ಕರೆಯ ಎಂಎಸ್‌ಪಿ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಕೇಂದ್ರ ಸರ್ಕಾರ ಸಮಸ್ಯೆ ಹುಟ್ಟು ಹಾಕಿದೆ ಎಂದು ದೂರಿದರು.

ಮಹಾರಾಷ್ಟ್ರದ ಮುಖ್ಯಮಂತ್ರಿ ಫಡ್ನವಿಸ್‌ ಅವರು ಎಂಎಸ್‌ಪಿ ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಬರೆದ ಪತ್ರ ಪ್ರದರ್ಶಿಸಿದ ಮುಖ್ಯಮಂತ್ರಿ, ಈ ಪತ್ರದಂತೆ ಎಂಎಸ್‌ಪಿ ಹೆಚ್ಚಳಕ್ಕೆ ಒತ್ತಾಯಿಸೋಣ. ಸಕ್ಕರೆ ಕಾರ್ಖಾನೆಗಳು ಮಾರಾಟ ಮಾಡುವ ವಿದ್ಯುತ್‌ ಮೇಲೆ ಪ್ರತಿ ಯೂನಿಟ್‌ಗೆ 60 ಪೈಸೆ ತೆರಿಗೆ ನಿಗದಿಪಡಿಸುವ ಪ್ರಸ್ತಾವನೆಯನ್ನು ಮರು ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಭರಸವೆ ನೀಡಿದರು.

ರೈತರ ಬೇಡಿಕೆ ತಕ್ಕಂತೆ ಹೆಚ್ಚುವರಿ ದರ ನೀಡಲು ಕಷ್ಟವಾಗುತ್ತದೆ. ರಾಜ್ಯ ಸರ್ಕಾರವೇ ಹೆಚ್ಚುವರಿ ಹಣವನ್ನು ಪ್ರೋತ್ಸಾಹ ಧನದ ರೂಪದಲ್ಲಿ ನೀಡಬೇಕು ಎಂದು ಕಾರ್ಖಾನೆಗಳ ಮಾಲೀಕರು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.