ಆಸ್ಪತ್ರೆ
(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಜನರಿಗೆ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲು ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ ತಿಳಿಸಿದರು.
ವಿಧಾನಸಭೆಯಲ್ಲಿ ಗುರುವಾರ ಪ್ರಶ್ನೆ ಕೇಳಿದ ಬಿಜೆಪಿಯ ದಿನಕರ ಶೆಟ್ಟಿ ಅವರು, ‘ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಬೇಕು’ ಎಂದು ಆಗ್ರಹಿಸಿದರು.
ಆಗ ಉತ್ತರಿಸಿದ ಸಚಿವರು, ‘ಕುಮಟಾದಲ್ಲಿ ಸ್ವತಂತ್ರವಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಡೆಸಲು ಸಾಧ್ಯವಿಲ್ಲ. ಕಾರವಾರದಲ್ಲಿ ವೈದ್ಯಕೀಯ ಕಾಲೇಜಿನ ಜೊತೆಗೆ 450 ಹಾಸಿಗೆಗಳ ಆಸ್ಪತ್ರೆ ನಿರ್ಮಿಸಲಾಗುತ್ತಿದೆ. ಅಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ. ಅದೇ ಆಸ್ಪತ್ರೆಯಲ್ಲಿ ಸೂಪರ್ ಸ್ಪೆಷಾಲಿಟಿ ಚಿಕಿತ್ಸಾ ಸೌಲಭ್ಯ ಒದಗಿಸುವ ಕುರಿತು ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದರು.
‘ಕುಮಟಾದಲ್ಲಿಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವಂತೆ ನಿರಂತರವಾಗಿ ಮನವಿ ಮಾಡುತ್ತಿದ್ದೇನೆ. ಸರ್ಕಾರ ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ. ಕ್ಷೇತ್ರಕ್ಕೆ ಯಾವುದೇ ಸೌಲಭ್ಯಗಳೂ ಸಿಗುತ್ತಿಲ್ಲ. ನನ್ನ ಕ್ಷೇತ್ರಕ್ಕೆ ಈ ರೀತಿ ಏಕೆ ತಾರತಮ್ಯ ಮಾಡುತ್ತಿದ್ದೀರಿ. ನಾನು ಬಿಜೆಪಿ ಶಾಸಕನಾಗಿ ಆಯ್ಕೆಯಾಗಿರುವುದು ತಪ್ಪೇ. ಉತ್ತರ ಕನ್ನಡ ಜಿಲ್ಲೆಕರ್ನಾಟಕದಲ್ಲಿಇದೆಯೋ, ಇಲ್ಲವೋ ಎಂಬ ಅನುಮಾನ ಮೂಡುತ್ತದೆ’ ಎಂದು ದಿನಕರ ಶೆಟ್ಟಿ ಅಸಮಾಧಾನ ವ್ಯಕ್ತಪಡಿಸಿದರು.
‘ಕುಮಟಾದಿಂದ ಕಾರವಾರ 75 ಕಿ.ಮೀ. ದೂರದಲ್ಲಿದೆ. ನಾವು ಚಿಕಿತ್ಸೆಗಾಗಿ ಮಣಿಪಾಲ, ಮಂಗಳೂರು ಅಥವಾ ಗೋವಾದ ಆಸ್ಪತ್ರೆಗಳಿಗೆ ಹೋಗಬೇಕಾದ ಸ್ಥಿತಿ ಇದೆ. ಅಷ್ಟರಲ್ಲಿ ಹಲವರು ಸಾವಿಗೀಡಾಗುತ್ತಾರೆ. ಉತ್ತರ ಕನ್ನಡ ಜಿಲ್ಲೆಯ ಮಧ್ಯ ಭಾಗದಲ್ಲಿರುವ ಕುಮಟಾದಲ್ಲೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಿ’ ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.