ಸಾಂದರ್ಭಿಕ ಚಿತ್ರ
ಬೆಂಗಳೂರು: ‘ಕಲುಷಿತ ನೀರು ಸೇವನೆಯಿಂದ ತುಮಕೂರು ಮತ್ತು ಕೋಲಾರ ಜಿಲ್ಲೆಯಲ್ಲಿ ಏಳು ಮಂದಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಒದಗಿಸಿ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
‘ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಲುಷಿತ ನೀರು ಪೂರೈಕೆಯಾಗುವುದನ್ನು ತಡೆಯಲು ಕ್ರಮಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ ತುಮಕೂರಿನ ರಮೇಶ್ ಎಲ್.ನಾಯ್ಕ್ ಸಲ್ಲಿಸಿರುವ ಸಾರ್ವಜನಿಕ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ಕೆಲಕಾಲ ವಾದ ಆಲಿಸಿದ ನ್ಯಾಯಪೀಠ, ‘ಕಲುಷಿತ ನೀರು ಸೇವನೆಯಿಂದ ಜನರು ಸಾವನ್ನಪ್ಪಿರುವುದು ಗಂಭೀರ ವಿಚಾರ. ಹಾಗಾಗಿ, ಶುದ್ಧ ಕುಡಿಯುವ ನೀರಿನ ಲಭ್ಯತೆ ಮತ್ತು ಶೇಖರಣಾ ಸೌಲಭ್ಯ ಹಾಗೂ ಜಲಮೂಲಗಳ ಕುರಿತಂತೆ ಸಂಪೂರ್ಣ ಮಾಹಿತಿ ನೀಡಬೇಕು. ಕಲುಷಿತ ನೀರು ಸೇವಿಸಿ ತುಮಕೂರು ಮತ್ತು ಕೋಲಾರ ಜಿಲ್ಲೆಯಲ್ಲಿ ಸಾವನ್ನಪ್ಪಿರುವವರ ಕುಟುಂಬಗಳಿಗೆ ಪರಿಹಾರ ಕಲ್ಪಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರ ಒದಗಿಸಬೇಕು’ ಎಂದು ಸರ್ಕಾರಕ್ಕೆ ಸೂಚಿಸಿ ವಿಚಾರಣೆ ಮುಂದೂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.