ADVERTISEMENT

ಕೊಯ್ಲಿಗೆ ಮುನ್ನ ಬೆಂಬಲ ಬೆಲೆ

​ಪ್ರಜಾವಾಣಿ ವಾರ್ತೆ
Published 6 ಜೂನ್ 2019, 19:45 IST
Last Updated 6 ಜೂನ್ 2019, 19:45 IST
   

ಬೆಂಗಳೂರು: ಕೃಷಿ ಉತ್ಪನ್ನಗಳು ಮಾರುಕಟ್ಟೆ ಪ್ರವೇಶಿಸುವ ಮುನ್ನ ಕನಿಷ್ಠ ಬೆಂಬಲ ಬೆಲೆ ಪ್ರಕಟಿಸುವ ವ್ಯವಸ್ಥೆಯನ್ನು ಈ ವರ್ಷದಿಂದಲೇ ಆರಂಭಿಸಲಾಗುವುದು ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ಇಲ್ಲಿ ಗುರುವಾರ ತಿಳಿಸಿದರು.

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವ ಸಂಬಂಧ ನೇಮಕಗೊಂಡಿರುವ ಸಚಿವ ಸಂಪುಟ ಉಪಸಮಿತಿ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕೃಷಿ ಉತ್ಪನ್ನಗಳು ಮಾರುಕಟ್ಟೆಗೆ ಬಂದ ನಂತರ ಬೆಂಬಲ ಬೆಲೆ ಘೋಷಿಸಿದರೆ ರೈತರು ನಷ್ಟ ಅನುಭವಿಸಬೇಕಾಗುತ್ತದೆ. ಅದಕ್ಕೂ ಮೊದಲೇ ಪ್ರಕಟಿಸಿದರೆ ಮಾರುಕಟ್ಟೆಯಲ್ಲಿ ಬೆಲೆ ಕುಸಿಯುವುದನ್ನು ತಡೆಯಬಹುದು’ ಎಂದರು. ಕಳೆದ ವರ್ಷ ಬೆಂಬಲ ಬೆಲೆಯಲ್ಲಿ 2.80 ಲಕ್ಷ ರೈತರಿಂದ 35.62 ಲಕ್ಷ ಕ್ವಿಂಟಲ್ ವಿವಿಧ ಕೃಷಿ ಉತ್ಪನ್ನಗಳನ್ನು ಖರೀದಿಸಲಾಗಿದೆ. ಈವರೆಗೆ ₹1402 ಕೋಟಿ ಬಿಡುಗಡೆ ಮಾಡಲಾಗಿದ್ದು, ಬಾಕಿ ಇದ್ದ ₹27 ಕೋಟಿಯನ್ನು ತಕ್ಷಣ ಬಿಡುಗಡೆ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ಕೇಂದ್ರ ಘೋಷಿಸಿದ್ದ ಬೆಂಬಲ ಬೆಲೆಯ ಬಾಕಿ ಹಣವನ್ನು ಈವರೆಗೂ ನೀಡಿಲ್ಲ . ಈವರೆಗೆ ₹500 ಕೋಟಿ ಬಿಡುಗಡೆಯಾಗಿದ್ದು, ಇನ್ನೂ ₹900 ಕೋಟಿ ಬರಬೇಕಿದೆ ಎಂದರು.

ADVERTISEMENT

ಶೇ 8ರಷ್ಟು ಬಿತ್ತನೆ

ಪೂರ್ವ ಮುಂಗಾರು ಹಾಗೂ ಮುಂಗಾರು ಹಂಗಾಮಿನಲ್ಲಿ 76.19 ಲಕ್ಷ ಹೆಕ್ಟೇರ್‌ಗಳ ಬಿತ್ತನೆ ಗುರಿ ಇದ್ದು, ಈವರೆಗೆ 5.93 ಲಕ್ಷ ಹೆಕ್ಟೇರ್ ಬಿತ್ತನೆಯಾಗಿದೆ. ಶೇ 8ರಷ್ಟು ಮಾತ್ರ ಗುರಿ ಸಾಧನೆಯಾಗಿದೆ. ಈಗ ಮಳೆ ಬೀಳುತ್ತಿದ್ದು, ಮುಂದಿನ ದಿನಗಳಲ್ಲಿ ಬಿತ್ತನೆ ಪ್ರಮಾಣ ಹೆಚ್ಚಾಗಲಿದೆ ಎಂದು ಕೃಷಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.