ADVERTISEMENT

ಬಗರ್‌ಹುಕುಂ ಅಕ್ರಮ ಆರೋಪ: ಅಶೋಕ ವಿರುದ್ಧದ ಎಫ್‌ಐಆರ್ ರದ್ದು

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2025, 23:38 IST
Last Updated 16 ಡಿಸೆಂಬರ್ 2025, 23:38 IST
<div class="paragraphs"><p>ಆರ್. ಅಶೋಕ</p></div>

ಆರ್. ಅಶೋಕ

   

ನವದೆಹಲಿ: ಬಗರ್‌ಹುಕುಂ ಅಕ್ರಮ ಹಗರಣದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ವಿರುದ್ಧ 2018ರಲ್ಲಿ ದಾಖಲಾಗಿದ್ದ ಎಫ್‌ಐಆರ್ ಅನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಮತ್ತು ವಿಪುಲ್ ಎಂ. ಪಂಚೋಲಿ ಅವರ ಪೀಠವು, ಅಶೋಕ ವಿರುದ್ಧ ವಿಚಾರಣೆಗೆ ಪೂರ್ವಾನುಮತಿ ಪಡೆದಿರಲಿಲ್ಲ ಹಾಗೂ ದುರುದ್ದೇಶದಿಂದ ಪ್ರಕರಣ ದಾಖಲಿಸಲಾಗಿದೆ ಎಂದು ಅಭಿಪ್ರಾಯಪಟ್ಟಿದೆ. 

ADVERTISEMENT

‘ಮೇಲ್ಮನವಿ ಸಲ್ಲಿಸಿದವರ ವಿರುದ್ಧದ ಕ್ರಮಗಳು ಮೇಲ್ನೋಟಕ್ಕೆ ರಾಜಕೀಯ ಪ್ರೇರಿತವಾಗಿವೆ ಮತ್ತು ಆ ಮೂಲಕ ದುರುದ್ದೇಶದಿಂದ ಕೂಡಿದೆ. ವಿಳಂಬವನ್ನು ಬದಿಗಿಟ್ಟರೂ ಮೇಲ್ಮನವಿ ಸಲ್ಲಿಸಿದವರ ವಿರುದ್ಧ  ಕಾನೂನು ಕ್ರಮ ಜರುಗಿಸಲು ಮುಂದುವರಿಯಲು ಸಾಧ್ಯವಿಲ್ಲ ಎಂದೂ ಪೀಠ ಹೇಳಿದೆ. 

ಅಕ್ರಮಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮೂರು ದೂರುಗಳನ್ನು ಸಲ್ಲಿಸಿದ್ದಾರೆ.  ಮೊದಲ ಎರಡು ದೂರುಗಳಲ್ಲಿ ಸಾಕಷ್ಟು ಸಾಕ್ಷ್ಯಗಳ ಕೊರತೆ ಕಂಡುಬಂದಿದೆ ಎಂದು ಪೀಠ ಗಮನಿಸಿದೆ.

ಅಶೋಕ ಅವರ ಮೇಲ್ಮನವಿಯನ್ನು ಅಂಗೀಕರಿಸಿದ ನ್ಯಾಯಪೀಠವು, ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್‌ನ 2018ರ ಸೆಪ್ಟೆಂಬರ್ ತೀರ್ಪನ್ನು ರದ್ದುಗೊಳಿಸಿತು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಬಡ ರೈತರಿಗೆ ಮೀಸಲಿಟ್ಟಿದ್ದ ಜಮೀನನ್ನು ಅಶೋಕ ಅವರು ಬಗರ್‌ಹುಕುಂ ಸಮಿತಿಯ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ  ಮೇಯರ್‌, ಮಾಜಿ ಮೇಯರ್‌ ಹಾಗೂ ಮಾಜಿ ಉಪ ಮೇಯರ್‌ಗಳಿಗೆ ಹಂಚಿಕೆ ಮಾಡಿದ್ದರು ಎಂದು ಕರ್ನಾಟಕ ಸರ್ಕಾರ ದೂರಿತ್ತು. 

‘1998ರಿಂದ 2006ರವರೆಗೆ ಅಶೋಕ ಅವರು ಬೆಂಗಳೂರು ದಕ್ಷಿಣ ತಾಲ್ಲೂಕು ಬಗರ್ ಹುಕುಂ ಭೂ-ಸಕ್ರಮೀಕರಣ ಸಮಿತಿ ಅಧ್ಯಕ್ಷರಾಗಿದ್ದರು. ಈ ವೇಳೆ ಅವರು ಕಾನೂನುಬಾಹಿರವಾಗಿ ಅನರ್ಹ ಫಲಾನುಭವಿಗಳಿಗೆ ಜಮೀನು ಮಂಜೂರು ಮಾಡಿದ್ದಾರೆ’ ಎಂದು ಆರೋಪಿಸಿ ಎ.ಆನಂದ ಎಂಬುವವರು ಎಸಿಬಿಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಎಸಿಬಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

‘ಜಮೀನು ಹಂಚಿಕೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಇದು ನನ್ನ ವಿರುದ್ಧ ರಾಜಕೀಯ ದುರುದ್ದೇಶದಿಂದ ದಾಖಲಿಸಿರುವ ಪ್ರಕರಣ. ಆದ್ದರಿಂದ ರದ್ದುಪಡಿಸಬೇಕು’ ಎಂದು ಕೋರಿ ಅಶೋಕ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ತನಿಖೆ ಮುಂದುವರಿಸಲು ಎಸಿಬಿಗೆ ಹೈಕೋರ್ಟ್ 2018ರಲ್ಲಿ ಹಸಿರು ನಿಶಾನೆ ತೋರಿಸಿತ್ತು. ಇದನ್ನು ಪ್ರಶ್ನಿಸಿ ಅಶೋಕ ಅವರು ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. 

ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಪೀಠವು ಪ್ರಮಾಣಪತ್ರ ಸಲ್ಲಿಸುವಂತೆ ಲೋಕಾಯುಕ್ತ ಹಾಗೂ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.