ನವದೆಹಲಿ: ರೈತನ ಆತ್ಮಹತ್ಯೆ ಕುರಿತು ಸುಳ್ಳು ಸುದ್ದಿ ಹರಿಬಿಟ್ಟ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್ ಆದೇಶದ ವಿರುದ್ಧ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರಿದ್ದ ಪೀಠವು ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತು.
ಪ್ರಕರಣವನ್ನು ರಾಜಕೀಯಗೊಳಿಸಬಾರದು ಎಂದು ತಿಳಿಸಿರುವ ಸಿಜೆಐ ಬಿ. ಆರ್. ಗವಾಯಿ, ಇಂತಹ ಸಮರ ನ್ಯಾಯಾಲಯದ ಹೊರಗೆ ನಡೆಯಲಿ ಎಂದಿದ್ದಾರೆ.
ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದರಾಗಿರುವ ತೇಜಸ್ವಿ ಸೂರ್ಯ ಅವರು, 2024ರ ನವೆಂಬರ್ 7ರಂದು ರೈತನ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದರು. ಅದರಲ್ಲಿ ತಮ್ಮ ಜಮೀಮಿನ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದ್ದರಿಂದ ಮನನೊಂದು ಹಾವೇರಿಯ ಹರನಗಿ ಗ್ರಾಮದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದರು.
ಇಂತಹ ಯಾವುದೇ ಪ್ರಕರಣ ನಡೆದಿಲ್ಲ ಎಂದು ಎಸ್‌ಪಿ ಅವರು ಸ್ಪಷ್ಟನೆ ನೀಡಿದ ಬಳಿಕ ಪೋಸ್ಟ್ ಅನ್ನು ಅಳಿಸಿ ಹಾಕಿದ್ದರು.
ಸುಳ್ಳು ಸುದ್ದಿ ಹರಡಿದ್ದಕ್ಕಾಗಿ ತೇಜಸ್ವಿ ಸೂರ್ಯ ಅವರ ವಿರುದ್ಧ ಹಾವೇರಿಯ ಸೆನ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ–2023ರ (ಬಿಎನ್‌ಎಸ್) ಕಲಂ 353ರ (2) (ವಿವಿಧ ಗುಂಪುಗಳ ನಡುವೆ ದ್ವೇಷ ಬಿತ್ತುವ ಮತ್ತು ದ್ವೇಷಕ್ಕೆ ಪ್ರಚೋದನೆ ನೀಡುವ ಸುಳ್ಳು ಸುದ್ದಿ ಹರಡಿದ ಆರೋಪ) ಅಡಿ ಎಫ್‌ಐಆರ್ ದಾಖಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.