ADVERTISEMENT

ದಕ್ಷಿಣ ಪಿನಾಕಿನಿ ನ್ಯಾಯಮಂಡಳಿ: ಸುಪ್ರೀಂ ಕೋರ್ಟ್‌ ಇಂಗಿತ

ತೀರ್ಪು ಕಾಯ್ದಿರಿಸಿದ ದ್ವಿಸದಸ್ಯ ನ್ಯಾಯಪೀಠ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2025, 14:41 IST
Last Updated 19 ಡಿಸೆಂಬರ್ 2025, 14:41 IST
<div class="paragraphs"><p>ಸುಪ್ರೀಂ ಕೋರ್ಟ್‌</p></div>

ಸುಪ್ರೀಂ ಕೋರ್ಟ್‌

   

ಪಿಟಿಐ ಚಿತ್ರ

ನವದೆಹಲಿ: ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಪೆನ್ನಾರ್ (ದಕ್ಷಿಣ ಪಿನಾಕಿನಿ) ನದಿ ನೀರು ಹಂಚಿಕೆ ವಿವಾದಗಳನ್ನು ಬಗೆಹರಿಸಲು ನ್ಯಾಯಮಂಡಳಿ ರಚಿಸಲು ಸುಪ್ರೀಂ ಕೋರ್ಟ್‌ ಶುಕ್ರವಾರ ಇಂಗಿತ ವ್ಯಕ್ತಪಡಿಸಿದೆ. 

ADVERTISEMENT

ತಮಿಳುನಾಡು ಸರ್ಕಾರ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್‌ನಾಥ್ ಹಾಗೂ ಎನ್‌.ವಿ.ಅಂಜಾರಿಯಾ ಪೀಠವು, ‘ವಿವಾದ ಇತ್ಯರ್ಥಪಡಿಸಲು ನ್ಯಾಯಮಂಡಳಿ ರಚಿಸುವುದು ಸೂಕ್ತ. ಆಗ ಉಭಯ ರಾಜ್ಯಗಳು ತಮ್ಮ ವಾದಗಳನ್ನು ಅಲ್ಲಿ ಮಂಡಿಸುತ್ತವೆ’ ಎಂದು ಅಭಿಪ್ರಾಯಪಟ್ಟಿತು. ಎರಡೂ ರಾಜ್ಯಗಳ ವಾದಗಳನ್ನು ಆಲಿಸಿದ ನ್ಯಾಯಪೀಠವು ತೀರ್ಪನ್ನು ಕಾಯ್ದಿರಿಸಿತು. 

ಜಲವಿವಾದವೇನು: 

ದಕ್ಷಿಣ ಪಿನಾಕಿನಿ ನದಿಯ ಕಣಿವೆಯಲ್ಲಿ ಕರ್ನಾಟಕ ಸರ್ಕಾರವು ಮಾರ್ಕಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟೆ ನಿರ್ಮಿಸಿದೆ. ಬೆಂಗಳೂರಿನ ಎಲೆ ಮಲ್ಲಪ್ಪ ಚೆಟ್ಟಿ ಕೆರೆಯಿಂದ ಹೊಸಕೋಟೆಯವರೆಗೆ ನೀರು ಹರಿಸುವ ಕಾಮಗಾರಿ, ಬ್ಯಾಲಹಳ್ಳಿ ಗ್ರಾಮದ ಹತ್ತಿರ ಪೆನ್ನಾರ್‌ ನದಿಯಿಂದ ನೀರು ಹರಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ. ಈ ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸಿ ಸುಪ್ರೀಂ ಕೋರ್ಟ್‌ಗೆ 2018ರ ಮೇ 18ರಂದು ಅರ್ಜಿ ಸಲ್ಲಿಸಿತ್ತು. ಜಲವಿವಾದ ನ್ಯಾಯಮಂಡಳಿ ಸ್ಥಾಪಿಸುವಂತೆ ಒತ್ತಾಯಿಸಿ ತಮಿಳುನಾಡು ಸರ್ಕಾರವು ಕೇಂದ್ರ ಸರ್ಕಾರಕ್ಕೆ 2019ರ ನವೆಂಬರ್‌ ತಿಂಗಳಲ್ಲಿ ಮನವಿ ಮಾಡಿತ್ತು. 

ಜಲಶಕ್ತಿ ಸಚಿವಾಲಯವು 2020ರಲ್ಲಿ ಸಂಧಾನ ಸಭೆ ನಡೆಸಿತ್ತು. ಆದರೆ, ರಾಜ್ಯ ಸರ್ಕಾರಗಳು ಒಮ್ಮತಕ್ಕೆ ಬಂದಿರಲಿಲ್ಲ. ಹೊಸದಾಗಿ ಸಂಧಾನ ನಡೆಸುವಂತೆ ಕರ್ನಾಟಕ ಸರ್ಕಾರವು ಕೇಂದ್ರವನ್ನು 2024ರ ಜೂನ್‌ನಲ್ಲಿ ಒತ್ತಾಯಿಸಿತ್ತು. 

ಈ ನಡುವೆ, ಸುಪ್ರೀಂ ಕೋರ್ಟ್‌ ನಿರ್ದೇಶನದ ಪ್ರಕಾರ, ಕೇಂದ್ರ ಜಲ ಆಯೋಗದ ಅಧ್ಯಕ್ಷರ ನೇತೃತ್ವದಲ್ಲಿ ಜಲಶಕ್ತಿ ಸಚಿವಾಲಯವು ಹೊಸ ಸಂಧಾನ ಸಮಿತಿ ರಚಿಸಿತ್ತು. ಈ ಸಮಿತಿಯು ಉಭಯ ರಾಜ್ಯಗಳ ನಡುವೆ ಒಂಬತ್ತು ಸಭೆಗಳನ್ನು ನಡೆಸಿತ್ತು ಹಾಗೂ ಯೋಜನಾ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿತ್ತು. 

ಜಲ ವಿವಾದ ಬಗೆಹರಿಸಲು ನ್ಯಾಯಮಂಡಳಿ ರಚಿಸುವ ಕೇಂದ್ರ ಸರ್ಕಾರದ ಪ್ರಸ್ತಾವಕ್ಕೆ ಕರ್ನಾಟಕ ಸರ್ಕಾರ ವಿರೋಧ ವ್ಯಕ್ತಪಡಿಸಿತ್ತು. ಮಾತುಕತೆಯ ಮೂಲಕ ಈ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಸರ್ಕಾರವು ಜಲಶಕ್ತಿ ಸಚಿವಾಲಯಕ್ಕೆ ಪತ್ರ ಬರೆದಿತ್ತು. 

ಕರ್ನಾಟಕದ ಜಲಾನಯನ ಪ್ರದೇಶದಲ್ಲಿ ಒಟ್ಟು 11.77 ಟಿಎಂಸಿ ನೀರಿನಲ್ಲಿ 9.77 ಟಿಎಂಸಿ ನೀರನ್ನು ಬಳಸಲು ಯೋಜಿಸಲಾಗಿದೆ. ಇದರಲ್ಲಿ 2 ಟಿಎಂಸಿ ಮತ್ತು ಹೆಚ್ಚುವರಿ ನೀರು ತಮಿಳುನಾಡಿಗೆ ಉಳಿದಿದೆ. ಇದು ತಮಿಳುನಾಡಿನ ಅವಶ್ಯಕತೆಗಳನ್ನು ಪೂರೈಸಲು ಸಾಕಾಗುತ್ತದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.