ಸುಪ್ರೀಂ ಕೋರ್ಟ್
ನವದೆಹಲಿ: ಮೂರು ಇಲಾಖೆಗಳ ಸಹಾಯಕ ಎಂಜಿನಿಯರ್ ಹಾಗೂ ಜೂನಿಯರ್ ಎಂಜಿನಿಯರ್ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ಸ್ವೀಕರಿಸಲು ಕರ್ನಾಟಕ ಸರ್ಕಾರ ನಿರಾಕರಿಸಿದ್ದಕ್ಕೆ ಆಘಾತ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಮುಂದಿನ ವಿಚಾರಣೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರೇ ಪ್ರಮಾಣಪತ್ರ ಸಲ್ಲಿಸಬೇಕು ಎಂದು ತಾಕೀತು ಮಾಡಿದೆ.
ಹೈಕೋರ್ಟ್ ದ್ವಿಸದಸ್ಯ ಪೀಠದ ಆದೇಶ ಪ್ರಶ್ನಿಸಿ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಸಲ್ಲಿಸಿರುವ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅಹ್ಸಾನುದ್ದೀನ್ ಅಮಾನುಲ್ಲಾ ಹಾಗೂ ಎಸ್.ವಿ.ಎನ್.ಭಟ್ಟಿ ಪೀಠವು, ‘ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಲು ಪೀಠವೇ ನಿರ್ದೇಶನ ನೀಡಿತ್ತು. ರಾಜ್ಯ ಸರ್ಕಾರದ ತಿರಸ್ಕಾರದ ಧೋರಣೆಯನ್ನು ಕಡೆಗಣಿಸಲು ಸಾಧ್ಯವಿಲ್ಲ’ ಎಂದು ಕಟುವಾಗಿ ಹೇಳಿದೆ.
‘ಲೋಕೋಪಯೋಗಿ ಇಲಾಖೆ, ನಗರಾಭಿವೃದ್ಧಿ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಗಳಿಗೆ ನೀಡಿರುವ ನೋಟಿಸ್ ಅನ್ನು ಯಾವ ಕಾರಣಕ್ಕೆ ನಿರಾಕರಿಸಲಾಗಿದೆ ಎಂಬ ಬಗ್ಗೆ ಮುಖ್ಯ ಕಾರ್ಯದರ್ಶಿಯವರು ವೈಯಕ್ತಿಕ ಪ್ರಮಾಣಪತ್ರ ಸಲ್ಲಿಸಬೇಕು ಹಾಗೂ ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಣೆ ನೀಡಬೇಕು’ ಎಂದು ಪೀಠ ನಿರ್ದೇಶನ ನೀಡಿದೆ.
ಜತೆಗೆ, ಈ ಪ್ರಕರಣದ ಬಗ್ಗೆ ರಾಜ್ಯ ಸರ್ಕಾರವು ವಿವರವಾದ ಪ್ರತಿಕ್ರಿಯೆ ಸಲ್ಲಿಸಬೇಕು ಹಾಗೂ ರಾಜ್ಯದ ನಿಲುವನ್ನು ಸ್ಪಷ್ಟಪಡಿಸಬೇಕು ಎಂದೂ ಪೀಠ ಸೂಚಿಸಿದೆ. ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 12ಕ್ಕೆ ಮುಂದೂಡಲಾಗಿದೆ.
ಸಹಾಯಕ ಎಂಜಿನಿಯರ್ ಹಾಗೂ ಜೂನಿಯರ್ ಎಂಜಿನಿಯರ್ ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿ 2016ರ ಜನವರಿಯಲ್ಲಿ ಅರ್ಜಿ ಆಹ್ವಾನಿಸಿತ್ತು. ತನ್ನ ಅರ್ಜಿಯನ್ನು ಕೆಪಿಎಸ್‌ಸಿ ತಿರಸ್ಕರಿಸಿದೆ ಎಂದು ಆರೋಪಿಸಿ ಶಿವಮೊಗ್ಗದ ಸುಬ್ರಹ್ಮಣ್ಯಂ ಆರ್.ಎಂಬವರು ಹೈಕೋರ್ಟ್ ಮೆಟ್ಟಿಲೇರಿದ್ದರು. ‘ಸಿವಿಲ್ ಅಥವಾ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವೀಧರರು ಅರ್ಜಿ ಸಲ್ಲಿಸಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಆದರೆ, ಅರ್ಜಿದಾರರು ಇಂಡಸ್ಟ್ರಿಯಲ್ ಪ್ರೊಡಕ್ಷನ್ ಎಂಜಿನಿಯರಿಂಗ್ ಪದವೀಧರರು. ಹೀಗಾಗಿ, ಅರ್ಜಿ ತಿರಸ್ಕರಿಸಲಾಗಿದೆʼ ಎಂದು ಕೆಪಿಎಸ್‌ಸಿ ತಿಳಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ದ್ವಿಸದಸ್ಯ ಪೀಠವು, ʼಅಂತಿಮ ಆಯ್ಕೆ ಪಟ್ಟಿಯನ್ನು ಅರ್ಜಿದಾರರ ಹೆಸರನ್ನು ಸೇರ್ಪಡೆ ಮಾಡಬೇಕು. ಮೂರು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆ ಮುಗಿಸಬೇಕು’ ಎಂದು ಆದೇಶ ನೀಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.