ADVERTISEMENT

ಅನರ್ಹ ಶಾಸಕರ ಅರ್ಜಿ ವಿಚಾರಣೆ ಮುಂದಕ್ಕೆ

ವಿಚಾರಣೆಯಿಂದ ಹಿಂದೆಸರಿದ ನ್ಯಾಯಮೂರ್ತಿ ಮೋಹನ ಶಾಂತನಗೌಡರ್

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2019, 16:35 IST
Last Updated 17 ಸೆಪ್ಟೆಂಬರ್ 2019, 16:35 IST
   

ನವದೆಹಲಿ: ಕಾಂಗ್ರೆಸ್‌ ಮತ್ತು ಜೆಡಿಎಸ್‌ನ 17 ಜನ ಅನರ್ಹ ಶಾಸಕರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯಿಂದ ಕರ್ನಾಟಕ ಮೂಲದ ನ್ಯಾಯಮೂರ್ತಿ ಮೋಹನ ಶಾಂತನಗೌಡರ್‌ ಹಿಂದೆ ಸರಿದಿದ್ದರಿಂದ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಸೆಪ್ಟೆಂಬರ್‌ 23ಕ್ಕೆ ಮುಂದೂಡಿತು.

ಶಾಸಕ ಸ್ಥಾನದಿಂದ ಅನರ್ಹಗೊಳಿಸಿರುವ ಸ್ಪೀಕರ್‌ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಯ ವಿಚಾರಣೆ ಮಂಗಳವಾರ ಆರಂಭ ಆಗುತ್ತಿದ್ದಂತೆಯೇ ತ್ರಿಸದಸ್ಯ ಪೀಠದಲ್ಲಿದ್ದ ನ್ಯಾಯಮೂರ್ತಿ ಶಾಂತನಗೌಡರ್‌ ಅವರು ಹಿಂದೆ ಸರಿಯುತ್ತೇನೆ ಎಂದು ಪ್ರಕಟಿಸಿದರು.

ಇದರ ಹಿಂದೆಯೇ ನ್ಯಾಯಮೂರ್ತಿ ಎನ್‌.ವಿ. ರಮಣ ಅವರು ಪ್ರಕರಣದ ವಿಚಾರಣೆಯನ್ನು ಮುಂದೂಡಿದರು.

ADVERTISEMENT

ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪರ ವಕೀಲ ಕಪಿಲ್‌ ಸಿಬಲ್‌ ಅವರು ಇದಕ್ಕೆ ಒಪ್ಪಿಗೆ ಸೂಚಿಸಿದರು.

ಪ್ರಕರಣದ ತುರ್ತು ವಿಚಾರಣೆಗಾಗಿ ಅನರ್ಹ ಶಾಸಕರು ಈ ಹಿಂದೆ ಮೂರು ಬಾರಿ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದ್ದ ನ್ಯಾಯಪೀಠವು, ರಿಜಿಸ್ಟ್ರಾರ್ ಕಚೇರಿಯ ಮೂಲಕವೇ ಪ್ರಕರಣವು ವಿಚಾರಣೆಗಾಗಿ ಪಟ್ಟಿಯಾಗಲಿ ಎಂದು ಹೇಳಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.