ADVERTISEMENT

5, 8ನೇ ತರಗತಿ ಮೌಲ್ಯಾಂಕನ ಪರೀಕ್ಷೆ ತಡೆಗೆ ಸುಪ್ರೀಂ ಕೋರ್ಟ್‌ ನಕಾರ

5, 8ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2023, 18:54 IST
Last Updated 20 ಮಾರ್ಚ್ 2023, 18:54 IST
   

ನವದೆಹಲಿ: ರಾಜ್ಯ ಪಠ್ಯಕ್ರಮ ಹೊಂದಿದ ಐದು ಮತ್ತು ಎಂಟನೇ ತರಗತಿಗಳ ಮಕ್ಕಳಿಗೆ ರಾಜ್ಯ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಕರ್ನಾಟಕ ಸರ್ಕಾರಕ್ಕೆ ಅನುಮತಿ ನೀಡಿರುವ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ಸೋಮವಾರ ನಿರಾಕರಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌, ನ್ಯಾಯಮೂರ್ತಿ ಗಳಾದ ಪಿ.ಎಸ್‌.ನರಸಿಂಹ ಹಾಗೂ ಜೆ.ಬಿ.ಪಾರ್ದಿವಾಲ ಅವರನ್ನು ಒಳಗೊಂಡ ಪೀಠವು, ಹೈಕೋರ್ಟ್‌ ಆದೇಶದ ವಿರುದ್ಧ ಅನುದಾನರಹಿತ ಖಾಸಗಿ ಶಾಲೆಗಳ ಸಂಘ ಸಲ್ಲಿಸಿದ ಅರ್ಜಿಯನ್ನು ಮಾರ್ಚ್‌ 27ರಂದು ವಿಚಾರಣೆ ಮಾಡಲು ಒಪ್ಪಿಕೊಂಡಿತು.

ಈ ಪ್ರಕರಣದ ವಿಚಾರಣೆಯನ್ನು ತುರ್ತಾಗಿ ನಡೆಸಬೇಕು ಎಂದು ಸಂಘ ಅರ್ಜಿ ಸಲ್ಲಿಸಿತ್ತು.

ADVERTISEMENT

‘ಹೈಕೋರ್ಟ್‌ ಆದೇಶದ ವಿಚಾರದಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ. ಆ ರಾಜ್ಯಕ್ಕೆ ಯಾವುದು ಉತ್ತಮ ಎಂಬುದು ಹೈಕೋರ್ಟ್‌ಗೆ ಗೊತ್ತಿದೆ’ ಎಂದೂ ಪೀಠ ಸ್ಪಷ್ಟಪಡಿಸಿತು.

ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ 5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನಕ್ಕೆ ಬದಲಾಗಿ ರಾಜ್ಯ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ತೀರ್ಮಾನಿಸಿದ್ದ ಸರ್ಕಾರದ ಆದೇಶ ಪ್ರಶ್ನಿಸಿ, ಕರ್ನಾಟಕ ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ನ್ಯಾಯಮೂರ್ತಿ ಪ್ರದೀಪ್‌ ಸಿಂಗ್ ಯೆರೂರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಇದೇ 10ರಂದು ಪುರಸ್ಕರಿಸಿತ್ತು. ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಜಿ.ನರೇಂದರ್ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿ ಮೌಲ್ಯಾಂಕನ ಪರೀಕ್ಷೆಗೆ ಹಸಿರು ನಿಶಾನೆ ತೋರಿತ್ತು. ಸರ್ಕಾರ ಇದೇ 27ರಿಂದ ಪರೀಕ್ಷೆ ನಡೆಸಬೇಕು ಎಂದೂ ಸೂಚಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.