ADVERTISEMENT

ಗುತ್ತಿಗೆದಾರರಿಗೆ ಬೆದರಿಕೆ ಹಾಕಿದ ಪ್ರಕರಣ: ಮುನಿರತ್ನ ಮೇಲ್ಮನವಿ ವಜಾ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2025, 16:06 IST
Last Updated 18 ಡಿಸೆಂಬರ್ 2025, 16:06 IST
ಮುನಿರತ್ನ 
ಮುನಿರತ್ನ    

ನವದೆಹಲಿ: ಕಸ ಗುತ್ತಿಗೆದಾರರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಕ್ರಿಮಿನಲ್ ಮೊಕದ್ದಮೆ ರದ್ದುಗೊಳಿಸಲು ನಿರಾಕರಿಸಿದ ಹೈಕೋರ್ಟ್‌ ಆದೇಶ ಪ್ರಶ್ನಿಸಿ ರಾಜರಾಜೇಶ್ವರಿನಗರ ಶಾಸಕ ಮುನಿರತ್ನ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಗುರುವಾರ ವಜಾಗೊಳಿಸಿದೆ. 

ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್‌ ನಾಥ್‌ ಹಾಗೂ ಸಂದೀಪ್‌ ಮೆಹ್ತಾ ಅವರ ಪೀಠವು, ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ. 

‘ಘನತ್ಯಾಜ್ಯ ಸಂಗ್ರಹ ಮತ್ತು ವಿಲೇವಾರಿ ನಿರ್ವಹಣೆ ಕೆಲಸಕ್ಕೆ ಸಂಬಂಧಿಸಿದಂತೆ ಲಂಚ ನೀಡಬೇಕು ಎಂದು ನನಗೆ ತೊಂದರೆಯೊಡ್ಡಿದ್ದಾರೆ’ ಎಂದು ಆರೋಪಿಸಿ ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ಅವರು ಮುನಿರತ್ನ ವಿರುದ್ಧ ದೂರು ನೀಡಿದ್ದರು. ‘ಮುನಿರತ್ನ ಮತ್ತು ಅವರ ಆಪ್ತ ವಸಂತ್‌ ಕುಮಾರ್‌ ಅವರು ₹30 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು, ಕಿರುಕುಳ ನೀಡುತ್ತಿದ್ದಾರೆ. ಹಣ ಕೊಡದಿದ್ದರೆ ನಿನ್ನನ್ನು ರೇಣುಕಸ್ವಾಮಿ ರೀತಿಯಲ್ಲಿ ಕೊಲೆ ಮಾಡುತ್ತೇವೆಂದು ಜೀವ ಬೆದರಿಕೆ ಹಾಕಿದ್ದಾರೆ’ ಎಂದು ದೂರಿದ್ದರು. 

ADVERTISEMENT

ಮುನಿರತ್ನ ಮತ್ತು ಅವರ ಬೆಂಬಲಿಗರು ಲಂಚಕ್ಕೆ ಬೇಡಿಕೆ ಇಟ್ಟಿರುವುದು ಹಾಗೂ ಪರಿಶಿಷ್ಟ ಜಾತಿಯ ಮುಖಂಡರೊಬ್ಬರ ಹೆಸರು ಪ್ರಸ್ತಾಪಿಸಿ ಜಾತಿನಿಂದನೆಯ ರೀತಿ ಮಾತನಾಡಿದ್ದಾರೆ ಎನ್ನಲಾಗಿರುವ ಆಡಿಯೊ ತುಣುಕುಗಳನ್ನು ಚೆಲುವರಾಜು ಬಿಡುಗಡೆ ಮಾಡಿದ್ದರು. 

‘ರಾಜರಾಜೇಶ್ವರಿನಗರ ವಿಧಾನಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್‌ ಸಂಖ್ಯೆ 42ರಲ್ಲಿ (ಲಕ್ಷ್ಮಿದೇವಿ ವಾರ್ಡ್‌) ಗಂಗಾ ಎಂಟರ್‌ಪ್ರೈಸಸ್‌ ಎಂಬ ಹೆಸರಿನಲ್ಲಿ ಘನತ್ಯಾಜ್ಯ ವಿಲೇವಾರಿ ಗುತ್ತಿಗೆ ಪಡೆದಿದ್ದೆ. ಡಿ. ದೇವರಾಜು ಅರಸು ಟ್ರಕ್‌ ಟರ್ಮಿನಲ್‌ ಪ್ರದೇಶದ ಘನ ತ್ಯಾಜ್ಯ ಸಂಗ್ರಹಣೆ ಮತ್ತು ವಿಲೇವಾರಿ ನಿರ್ವಹಣೆಯ ಕೆಲಸಗಳನ್ನೂ ನಾನು ಮಾಡುತ್ತಿದ್ದೇನೆ. ₹30 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿರುವ ಶಾಸಕರು, ಹಣ ಕೊಡಲಿಲ್ಲ ಎಂಬ ದ್ವೇಷದಿಂದ ಗುತ್ತಿಗೆ ರದ್ದುಗೊಳಿಸುವ ಬೆದರಿಕೆ ಒಡ್ಡುತ್ತಿದ್ದಾರೆ’ ಎಂದು ದೂರಿನಲ್ಲಿ ತಿಳಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.