ADVERTISEMENT

ಧರ್ಮಸ್ಥಳ ಪ್ರಕರಣ: ಗ್ಯಾಗ್‌ ಆದೇಶ ತೆರವಿಗೆ ಸುಪ್ರೀಂ ಕೋರ್ಟ್‌ ನಕಾರ

ಪಿಟಿಐ
Published 23 ಜುಲೈ 2025, 8:31 IST
Last Updated 23 ಜುಲೈ 2025, 8:31 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಸಹೋದರನ ಕುರಿತಾಗಿ ವರದಿ ಮಾಡಲು ಮಾಧ್ಯಮಗಳಿಗೆ ವಿಧಿಸಿರುವ ನಿರ್ಬಂಧ (ಗ್ಯಾಗ್) ಆದೇಶವನ್ನು ತೆರವುಗೊಳಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಮಾನ್ಯ ಮಾಡಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿತು. ಮೊದಲು ಹೈಕೋರ್ಟ್‌ಗೆ ಹೋಗಿ ಎಂದು ನಿರ್ದೇಶನ ನೀಡಿತು.

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದ ಮಹಿಳೆಯರ ಕೊಲೆ ಸಂಬಂಧ ವರದಿ ಮಾಡುವುದಕ್ಕೆ ನಿರ್ಬಂಧ ವಿಧಿಸಿ ಆದೇಶ ಮಾಡಲಾಗಿತ್ತು.

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವು ಪ್ರಕರಣಗಳ ಸಂಬಂಧ ಪ್ರಕಟವಾಗಿರುವ ಸುಮಾರು 9 ಸಾವಿರ ಲಿಂಕ್‌ಗಳನ್ನು ಅಳಿಸಿಹಾಕಬೇಕು ಎಂದು ಸುಮಾರು 390 ಮಾಧ್ಯಮ ಸಂಸ್ಥೆಗಳಿಗೆ ಸ್ಥಳೀಯ ಕೋರ್ಟ್ ನೀಡಿದ ನಿರ್ದೇಶನದ ಕಾನೂನು ಮಾನ್ಯತೆಯನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು.

ADVERTISEMENT

ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ಬಿ.ಆರ್. ಗವಾಯಿ, ನ್ಯಾಯಮೂರ್ತಿಗಳಾದ ಕೆ. ವಿನೋದ್ ಚಂದ್ರನ್ ಹಾಗೂ ಜಾಯ್‌ಮಲ್ಯ ಬಾಗ್ಚಿ ಅವರಿದ್ದ ಪೀಠ, ಹೈ ಕೋರ್ಟ್‌ನಲ್ಲಿ ಯಾಕೆ ಅರ್ಜಿ ಸಲ್ಲಿಸಿಲ್ಲ ಎಂದು ಅರ್ಜಿದಾರರನ್ನು ಪ್ರಶ್ನಿಸಿತು.

‘ಮೊದಲು ಹೈಕೋರ್ಟ್‌ಗೆ ಹೋಗಿ’ ಎಂದು ಸಿಜೆಐ ಹೇಳಿದರು.

ಶ್ರೀ ಮಂಜುನಾಥ ಸ್ವಾಮಿ ದೇಗುಲ ಸಂಸ್ಥೆಗಳ ಕಾರ್ಯದರ್ಶಿ ಹರ್ಷೇಂದ್ರ ಕುಮಾರ್ ಅವರು ಸಲ್ಲಿಸಿದ ಮಾನಹಾನಿ ಪ್ರಕರಣದಲ್ಲಿ ಈ ಗ್ಯಾಗ್ ಆದೇಶವನ್ನು ಹೊರಡಿಸಲಾಗಿತ್ತು.

ಯಾವುದೇ ಎಫ್‌ಐಆರ್‌ನಲ್ಲಿ ತಮ್ಮ ವಿರುದ್ಧ ಅಥವಾ ದೇವಾಲಯದ ಅಧಿಕಾರಿಗಳ ವಿರುದ್ಧ ಯಾವುದೇ ನಿರ್ದಿಷ್ಟ ಆರೋಪಗಳಿಲ್ಲದಿದ್ದರೂ, ಆನ್‌ಲೈನ್‌ನಲ್ಲಿ ಸುಳ್ಳು ಮತ್ತು ಮಾನಹಾನಿಕರ ವಿಷಯವನ್ನು ಹರಡಲಾಗುತ್ತಿದೆ ಎಂದು ಅವರು ಅರ್ಜಿಯಲ್ಲಿ ಹೇಳಿದ್ದರು.

ಬೆಂಗಳೂರಿನ ಧರ್ಡ್ ಐ ಯೂಟ್ಯೂಬ್ ಚಾನಲ್ ಗ್ಯಾಗ್ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.