ಕುಮಾರಸ್ವಾಮಿ
ನವದೆಹಲಿ: ಬಿಡದಿ ಬಳಿ ಕೇತಗಾನಹಳ್ಳಿಯಲ್ಲಿ ಒತ್ತುವರಿಗೆ ಸಂಬಂಧಿಸಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ.
ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಕುಮಾರಸ್ವಾಮಿ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಂಕಜ್ ಮಿತ್ತಲ್ ಹಾಗೂ ಪ್ರಸನ್ನ ಬಿ. ವರಾಳೆ ಅವರಿದ್ದ ನ್ಯಾಯಪೀಠವು ಮುಂದಿನ ಆದೇಶದವರೆಗೂ ಪ್ರಕರಣದ ವಿಚಾರಣೆಗೆ ತಡೆ ನೀಡಿದೆ. ಪೀಠವು ಸಮಾಜ ಪರಿವರ್ತನ ಸಮುದಾಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದೆ.
ಲೋಕಾಯುಕ್ತ ತನಿಖೆ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ, ನ್ಯಾಯಾಂಗ ನಿಂದನೆ ವಿಚಾರಣೆ ಮುಂದುವರಿಸುವುದರ ಹಿಂದಿನ ತಾರ್ಕಿಕತೆಯನ್ನು ನ್ಯಾಯಪೀಠ ಮೌಖಿಕವಾಗಿ ಪ್ರಶ್ನಿಸಿದೆ.
‘ಎಚ್.ಡಿ.ಕುಮಾರಸ್ವಾಮಿ ಮತ್ತು ಅವರ ಸಂಬಂಧಿಕರು ಕೇತಗಾನಹಳ್ಳಿಯ ಸರ್ವೇ ನಂಬರ್ 8, 9, 10, 16, 17 ಮತ್ತು 79ರಲ್ಲಿ 14 ಎಕರೆ ಸರ್ಕಾರಿ ಜಮೀನು ಒತ್ತುವರಿ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವರದಿಯ ಅನುಸಾರ ಕ್ರಮ ಕೈಗೊಳ್ಳಬೇಕು ಎಂದು 2020ರಲ್ಲಿ ಹೈಕೋರ್ಟ್ ಆದೇಶಿಸಿತ್ತು. ಆದರೆ, ಇದನ್ನು ಜಾರಿಗೊಳಿಸಿಲ್ಲ’ ಎಂದು ಸಮಾಜ ಪರಿವರ್ತನಾ ಸಮುದಾಯ, ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್‌ನಲ್ಲಿ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು.
ಈ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಅರ್ಜಿ ವಿಚಾರಣೆಯಲ್ಲಿ ಭಾಗಿಯಾಗಲು ಕುಮಾರಸ್ವಾಮಿ ಅವರಿಗೆ ಅನುಮತಿ ನೀಡಿತ್ತು. ಇದೇ ವೇಳೆ, ಹೈಕೋರ್ಟ್ʼನ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ಆದೇಶ ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದರು.
ನ್ಯಾಯಾಂಗ ನಿಂದನೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ ಬಾಕಿ ಇರುವುದರಿಂದ ತಮ್ಮ ವಿರುದ್ಧದ ಕಾನೂನು ಪ್ರಕ್ರಿಯೆಗೆ ತಡೆ ನೀಡುವಂತೆ ಕುಮಾರಸ್ವಾಮಿ ಅವರು ಹೈಕೋರ್ಟ್‌ಗೆ ಮನವಿ ಮಾಡಿದ್ದರು.
ಮಾರ್ಚ್ 27ರವರೆಗೂ ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಆದೇಶಿಸಿತ್ತು.
ಕೇತಗಾನಗಳ್ಳಿಯ ವಿವಿಧ ಸರ್ವೇ ನಂಬರ್‌ಗಳನ್ನು ಒಳಗೊಂಡ 14 ಎಕರೆ ಜಮೀನಿನ ಮಾಲೀಕತ್ವದ ಕುರಿತಂತೆ ವಿಚಾರಣೆ ನಡೆಸಲು ಐಎಎಸ್ ಅಧಿಕಾರಿ ಆಮ್ಲಾನ್ ಆದಿತ್ಯ ಬಿಸ್ವಾಸ್ ನೇತೃತ್ವದಲ್ಲಿ 2025ರ ಜನವರಿ 28ರಂದು ಎಸ್‌ಐಟಿ ರಚಿಸಿ ಆದೇಶಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.