ನವದೆಹಲಿ: ಬಾಗೇಪಲ್ಲಿಯ ಎನ್.ಎಸ್ ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ.
ಎದುರಾಳಿ, ಚುನಾವಣಾ ಆಯೋಗ ಮತ್ತು ಸಂಬಂಧಪಟ್ಟ ವ್ಯಕ್ತಿಗಳಿಗೆ ಅಫಿಡವಿಟ್, ಕೌಂಟರ್ ಅಫಿಡವಿಟ್ ಸಲ್ಲಿಸಲು ಸುಪ್ರೀಂ ಕೋರ್ಟ್ 6 ವಾರಗಳ ಕಾಲಾವಕಾಶ ನೀಡಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ (ಭಾಗ್ಯನಗರ) ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಕಾಂಗ್ರೆಸ್‌ನ ಎಸ್.ಎನ್. ಸುಬ್ಬಾರೆಡ್ಡಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಸುಬ್ಬಾ ರೆಡ್ಡಿ ಮೇಲ್ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಜಾಯ್‌ಮಲ್ಯ ಬಾಗ್ಚಿ ಪೀಠವು ನಡೆಸಿತು.
‘ಸುಬ್ಬಾರೆಡ್ಡಿ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಮತ್ತು ನನ್ನನ್ನೇ ವಿಜೇತ ಅಭ್ಯರ್ಥಿ ಎಂದು ಘೋಷಿಸಬೇಕು’ ಎಂದು ಕೋರಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಸಿ.ಮುನಿರಾಜು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಭಾಗಶಃ ಪುರಸ್ಕರಿಸಿ ಫೆಬ್ರುವರಿ 16ರಂದು ಆದೇಶ ಹೊರಡಿಸಿತ್ತು.
2023ರ ವಿಧಾನಸಭಾ ಚುನಾವಣೆಯಲ್ಲಿ ಬಾಗೇಪಲ್ಲಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಎಸ್.ಎನ್.ಸುಬ್ಬಾರೆಡ್ಡಿ 82,128 ಮತಗಳನ್ನು ಪಡೆದು ಜಯಗಳಿಸಿದ್ದರು. ಸಿ.ಮುನಿರಾಜು 62,949 ಮತ ಪಡೆದು ಸೋಲುಂಡಿದ್ದರು. ಸುಬ್ಬಾರೆಡ್ಡಿ ಆಯ್ಕೆ ಪ್ರಶ್ನಿಸಿ ಸಿ.ಮುನಿರಾಜು 2023ರ ಜೂನ್ 24ರಂದು ಹೈಕೋರ್ಟ್ ಮೆಟ್ಟಿಲೇರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.