ಎಸ್. ಸುರೇಶ್ ಕುಮಾರ್
ಬೆಂಗಳೂರು: ಸರ್ಕಾರಿ ಶಾಲೆಗಳ ಸ್ಥಿತಿಗತಿ, ಅವುಗಳ ಅಭಿವೃದ್ಧಿ ಮತ್ತು ಕಾಯಕಲ್ಪ ಕುರಿತು ಆ.11ರಿಂದ ಆರಂಭವಾಗುವ ಅಧಿವೇಶನದಲ್ಲಿ ಒಂದು ದಿನದ ವಿಶೇಷ ಚರ್ಚೆಗೆ ಅವಕಾಶ ಕಲ್ಪಿಸಬೇಕು ಎಂದು ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಸಭಾಧ್ಯಕ್ಷರಿಗೆ ಮನವಿ ಮಾಡಿದ್ದಾರೆ.
ಈ ಕುರಿತು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಪತ್ರ ಬರೆದಿರುವ ಅವರು, ‘ಶಿಕ್ಷಣ ಇಲಾಖೆಯ ಆಡಳಿತ ವ್ಯವಸ್ಥೆ ವಿದ್ಯಾರ್ಥಿ ಕೇಂದ್ರೀಕೃತವಾಗಿರುವ ಶಾಲಾ ಶಿಕ್ಷಣ ವ್ಯವಸ್ಥೆಯನ್ನು ಸಂಪೂರ್ಣ ವಿರೂಪಗೊಳಿಸಿದೆ. ಮೂಲ ಉದ್ದೇಶವನ್ನೇ ಮಸುಕಾಗಿಸಿದೆ. ನೂರಾರು ಸಮಸ್ಯೆಗಳ ನಡುವೆ ಶಿಕ್ಷಣ ಎನ್ನುವುದು ಇಲಾಖೆಯ ಆದ್ಯತೆಯೇ ಆಗಿಲ್ಲ. ಸಕಾರಾತ್ಮಕ ಆಶಯದಿಂದ ಆರಂಭಿಸಿರುವ ಯೋಜನೆಗಳು ಮಾರಕವಾಗಿವೆ’ ಎಂದಿದ್ದಾರೆ.
ರಾಜ್ಯ ಸರ್ಕಾರ ಸಿದ್ಧಪಡಿಸುತ್ತಿರುವ ರಾಜ್ಯ ಶಿಕ್ಷಣ ನೀತಿ ಸರ್ಕಾರಿ ಶಾಲೆಗಳ ಕಾಯಕಲ್ಪಕ್ಕೆ ವರವಾಗಬೇಕಿದೆ. ಇಲ್ಲದಿದ್ದರೆ ಪ್ರತಿ ವರ್ಷವೂ ಮಕ್ಕಳ ಸಂಖ್ಯೆ ಕಡಿಮೆಯಾಗಿ ಬಾಗಿಲು ಮುಚ್ಚುವ ಶಾಲೆಗಳ ಸಂಖ್ಯೆ ಹೆಚ್ಚಾಗಲಿದೆ. ಈ ಎಲ್ಲ ಅಂಶಗಳ ಕುರಿತು ಸದನದಲ್ಲಿ ಸಮಗ್ರ ಚರ್ಚೆ ನಡೆಸುವ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.