ADVERTISEMENT

ಕಡ್ಡಾಯ ವರ್ಗಾವಣೆ ಪ್ರಕ್ರಿಯೆಯನ್ನು ಸದ್ಯಕ್ಕೆ ತಡೆಹಿಡಿಯಲಾಗಿದೆ: ಸುರೇಶ್ ಕುಮಾರ್

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2019, 7:15 IST
Last Updated 2 ಸೆಪ್ಟೆಂಬರ್ 2019, 7:15 IST
   

ಬೆಂಗಳೂರು:ಕಡ್ಡಾಯ ವರ್ಗಾವಣೆ ಪ್ರಕ್ರಿಯೆಯನ್ನು ಸದ್ಯಕ್ಕೆ ತಡೆಹಿಡಿಯಲಾಗಿದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಎಸ್‌.ಸುರೇಶ್ ಕುಮಾರ್ ತಿಳಿಸಿದರು.

ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನಿವಾಸದಲ್ಲಿ ಮಾತನಾಡಿದ ಅವರು,ಸಾಕಷ್ಟು ಜನ ಶಿಕ್ಷಕರು ನನ್ನ ಬಳಿ ಬಂದು ಮಾತನಾಡಿದ್ದಾರೆ. ಈಗಾಗಲೇ ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ನಾಳೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಕೊಡಗು ಪ್ರವಾಹ ಪೀಡಿತ ಪ್ರದೇಶದ ಜವಾಬ್ದಾರಿಯನ್ನು ನನಗೆ ವಹಿಸಲಾಗಿದೆ. ಕೊಡಗಿನಲ್ಲಿ ಉತ್ತರಿ ಮತ್ತು ಕೈಲು ಹಬ್ಬಗಳನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ಕೈಲ್‌ ಮುಹೂರ್ತದ ಹಬ್ಬದ ಪ್ರಯುಕ್ತ ಅಲ್ಲಿನ ಶಾಲೆ–ಕಾಲೇಜುಗಳಿಗೆ ನಾಳೆ ರಜೆ ನೀಡಲು ನಿರ್ಧರಿಸಿದ್ದೇವೆ. ಈ ಸಂಬಂಧ ಶಾಸಕ ಅಪ್ಪಚ್ಚು ರಂಜನ್‌ ಅವರೂ ಮನವಿ ಮಾಡಿದ್ದರು. ರಜೆ ವಿಚಾರವನ್ನುಮುಖ್ಯಮಂತ್ರಿ ಅವರು ಇಂದು ಮಧ್ಯಾಹ್ನ ಅಧಿಕೃತವಾಗಿ ಘೋಷಿಸಲಿದ್ದಾರೆ ಎಂದು ಹೇಳಿದರು.

ADVERTISEMENT

ಹಿಂದಿನ ಸರ್ಕಾರದ ‘ಇಂಗ್ಲಿಷ್‌ ಮಾಧ್ಯಮ ಶಾಲೆ’ ವಿಚಾರಕ್ಕೆ ಸಂಬಂಧಿಸಿದಂತೆ, ಸದ್ಯ ನಮ್ಮ ಮುಂದೆಶಿಕ್ಷಕರ ಕಡ್ಡಾಯ ವರ್ಗಾವಣೆ ವಿಚಾರ ಇದೆ. ಅದನ್ನು ಬಗೆಹರಿಸಿ ನಂತರ ಪಬ್ಲಿಕ್ ಸ್ಕೂಲ್, ಇಂಗ್ಲೀಷ್ ಮಾಧ್ಯಮ ಕಲಿಕೆ ವಿಚಾರಗಳತ್ತ ಗಮನ ಕೊಡುತ್ತೇವೆ. ಈ ಸಂಬಂಧ ಅಧಿಕಾರಿಗಳ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ. ಅಲ್ಲಿಯವರೆಗೂ ಈ ವಿಚಾರಗಳುಯಥಾಸ್ಥಿತಿಯಲ್ಲಿರುತ್ತವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.