ADVERTISEMENT

ಫಲಾನುಭವಿಗಳ ಆಯ್ಕೆಗೆ ಸುವಿಧಾ ತಂತ್ರಾಂಶ ಬಳಕೆ ಕಡ್ಡಾಯ: ಕೋಟ ಶ್ರೀನಿವಾಸ ಪೂಜಾರಿ

​ಪ್ರಜಾವಾಣಿ ವಾರ್ತೆ
Published 26 ಜುಲೈ 2022, 19:30 IST
Last Updated 26 ಜುಲೈ 2022, 19:30 IST
ಕೋಟ ಶ್ರೀನಿವಾಸ ಪೂಜಾರಿ
ಕೋಟ ಶ್ರೀನಿವಾಸ ಪೂಜಾರಿ   

ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದ ವಿವಿಧ ನಿಗಮಗಳ ಮೂಲಕ ಅನುಷ್ಠಾನಗೊಳಿಸುವ ಯೋಜನೆಗಳ ಫಲಾನುಭವಿಗಳ ಆಯ್ಕೆಯನ್ನು ಕಡ್ಡಾಯವಾಗಿ ಸುವಿಧಾ ತಂತ್ರಾಂಶದ ಮೂಲಕವೇ ನಡೆಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇಲಾಖೆಯ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲ ನಿಗಮಗಳೂ ಸುವಿಧಾ ತಂತ್ರಾಂಶದಲ್ಲೇ ಅರ್ಜಿಗಳನ್ನು ಆಹ್ವಾನಿಸಬೇಕು. ನೇರ ನಗದು ವರ್ಗಾವಣೆ ಮೂಲಕ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುವುದು ಕಡ್ಡಾಯ. ಯೋಜನೆಗಳನ್ನು ಅತ್ಯಂತ ಪಾರದರ್ಶಕವಾಗಿ ಅನುಷ್ಠಾನಕ್ಕೆ ತರಬೇಕು’ ಎಂದು ಸೂಚಿಸಿದರು.

ಇಲಾಖೆಯ ವ್ಯಾಪ್ತಿಯ ವಿವಿಧ ನಿಗಮಗಳ ಮೂಲಕ ಗಂಗಾ ಕಲ್ಯಾಣ ಯೋಜನೆಯಡಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ 11,000 ಕೊಳವೆ ಬಾವಿಗಳನ್ನು ಕೊರೆಸುವ ಗುರಿ ಹೊಂದಲಾಗಿದೆ. ಪ್ರತಿ ಜಿಲ್ಲೆಗೆ ಕನಿಷ್ಠ 61, ಶಾಸಕರ ವಿವೇಚನಾ ಕೋಟಾದಡಿ ತಲಾ 41 ಕೊಳವೆ ಬಾವಿಗಳನ್ನು ಕೊರೆಸುವ ಗುರಿ ನಿಗದಿ‍ಪಡಿಸಲಾಗುವುದು. ಎಲ್ಲ ಯೋಜನೆಗಳಲ್ಲೂ ಶೇಕಡ 100ರಷ್ಟು ಗುರಿ ಸಾಧನೆಗೆ ಪೂರಕವಾಗಿ ಕೆಲಸ ಮಾಡಬೇಕು ಎಂದರು.

ADVERTISEMENT

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ತುಳಸಿ ಮದ್ದಿನೇನಿ, ಆಯುಕ್ತ ಕೆ.ಎ. ದಯಾನಂದ ಹಾಗೂ ವಿವಿಧ ಅಭಿವೃದ್ಧಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.