ADVERTISEMENT

ತಲಕಾಡು, ಕೈವಾರಕ್ಕೆ ಪಟ್ಟಣ ಪಂಚಾಯಿತಿ: ನಗರಸಭೆಗಳಾಗಿ ಭಟ್ಕಳ, ಇಂಡಿ ಮೇಲ್ದರ್ಜೆಗೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2025, 23:30 IST
Last Updated 7 ಆಗಸ್ಟ್ 2025, 23:30 IST
ಎಚ್‌.ಕೆ.ಪಾಟೀಲ
ಎಚ್‌.ಕೆ.ಪಾಟೀಲ   

ಬೆಂಗಳೂರು: ತಲಕಾಡು, ಕೈವಾರ ಪಟ್ಟಣ ಪಂಚಾಯಿತಿ, ಭಟ್ಕಳ ಹಾಗೂ ಇಂಡಿಗಳನ್ನು ನಗರಸಭೆಗಳಾಗಿ ಮೇಲ್ದರ್ಜೆಗೇರಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ಗುರುವಾರ ನಡೆದ ಸಂಪುಟ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ತೀರ್ಮಾನಗಳನ್ನು ಕಾನೂನು ಸಚಿವ ಎಚ್‌.ಕೆ.ಪಾಟೀಲ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಉತ್ತರಕನ್ನಡ ಜಿಲ್ಲೆ ಭಟ್ಕಳ ಪುರಸಭೆ ವ್ಯಾಪ್ತಿಯ ಜಾಲಿ ಪಟ್ಟಣ ಪಂಚಾಯಿತಿ ಮತ್ತು ಹೆಬಳೆ ಗ್ರಾಮ ಪಂಚಾಯಿತಿಯನ್ನು ಸೇರಿಸಿ ಭಟ್ಕಳ ನಗರಸಭೆ ಎಂದು ಘೋಷಿಸಲು ತೀರ್ಮಾನಿಸಲಾಗಿದೆ.

ADVERTISEMENT

ವಿಜಯಪುರ ಜಿಲ್ಲೆಯ ಇಂಡಿ ಪುರಸಭೆಯನ್ನು ಮೇಲ್ದರ್ಜೆಗೇರಿಸಿ ಇಂಡಿ ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಒಪ್ಪಿಗೆ ನೀಡಲಾಗಿದೆ.

ಪ್ರಮುಖ ತೀರ್ಮಾನಗಳು

  • ಬೆಳಗಾವಿ ಜಿಲ್ಲೆ ಕಿತ್ತೂರಿನಲ್ಲಿ 100 ಹಾಸಿಗೆಗಳ ತಾಲ್ಲೂಕು ಮಟ್ಟದ ಆಸ್ಪತ್ರೆಯನ್ನು ₹33.78 ಕೋಟಿ ವೆಚ್ಚದಲ್ಲಿ ನಿರ್ಮಾಣ

  • ಹಾವೇರಿ ಜಿಲ್ಲೆ ಹಾನಗಲ್‌ ತಾಲ್ಲೂಕಿನ ವರದಾ ನದಿಯಿಂದ ನರೇಗಲ್ ಮತ್ತು ಕುಸನೂರ ಏತ ನೀರಾವರಿ ಮೂಲಕ 111 ಕೆರೆಗಳನ್ನು ತುಂಬಿಸುವ ಯೋಜನೆಗೆ ₹220 ಕೋಟಿ

  • ರಾಜ್ಯದ 15 ಜಿಲ್ಲೆಗಳಲ್ಲಿ ಅಲ್ಪಸಂಖ್ಯಾತರ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ 15 ಮಹಿಳಾ ಕಾಲೇಜು ಕಟ್ಟಡಗಳ ನಿರ್ಮಾಣಕ್ಕಾಗಿ ₹87.60 ಕೋಟಿ ಪರಿಷ್ಕೃತ ಅಂದಾಜಿಗೆ ಒಪ್ಪಿಗೆ

ಹಿಂದುಳಿದ ಹಾಸ್ಟೆಲ್‌ಗಳಿಗೆ ಹಾಸಿಗೆ– ಮಂಚ ಖರೀದಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ 150 ಮೆಟ್ರಿಕ್‌ ನಂತರದ ವಿದ್ಯಾರ್ಥಿ ನಿಲಯಗಳು ಮತ್ತು ಹೊಸದಾಗಿ ಮಂಜೂರಾಗಿರುವ 62 ಹೊಸ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿಗೆ  ₹40 ಕೋಟಿ ವೆಚ್ಚದಲ್ಲಿ 15 ಸಾವಿರ ಟೂ–ಟಯರ್‌ ಮಂಚಗಳು ₹10 ಕೋಟಿ ವೆಚ್ಚದಲ್ಲಿ 15 ಸಾವಿರ ಹಾಸಿಗೆಗಳನ್ನು ಖರೀದಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಸಚಿವ ಎಚ್‌.ಕೆ.ಪಾಟೀಲ ತಿಳಿಸಿದರು.

* ಹಿಂದುಳಿದ ವರ್ಗಗಳ ನಿರುದ್ಯೋಗಿಗಳಿಗೆ ಆಹಾರ ಕಿಯೋಸ್ಕ್‌ ಆರಂಭಿಸುವುದಕ್ಕಾಗಿ ವಿದ್ಯುತ್ ಚಾಲಿತ ನಾಲ್ಕು ಚಕ್ರಗಳ ವಾಹನ ಖರೀದಿಸಲು ಗರಿಷ್ಠ ₹3 ಲಕ್ಷ ಸಹಾಯಧನ ನೀಡಲಾಗುವುದು. ಇದಕ್ಕಾಗಿ  ಒಂದೇ ಮಾದರಿಯ 1103 ವಾಹನಗಳನ್ನು ಅಂದಾಜು ₹33.09 ಕೋಟಿಯಲ್ಲಿ ಖರೀದಿಸಲು ಅನುಮೋದನೆ.

ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ: ನಿಯಮ ಬದಲು

ಮುಸ್ಲಿಮೇತರ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ಆಯಾ ಅಲ್ಪಸಂಖ್ಯಾತರ ವರ್ಗದ ವಿದ್ಯಾರ್ಥಿಗಳ ಸಂಖ್ಯೆ ಶೇ 50 ರಷ್ಟು ಕಡ್ಡಾಯವಾಗಿ ಹೊಂದಿರಬೇಕು ಎಂಬ ನಿಯಮ ತೆಗೆದುಹಾಕಲು ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಎಚ್‌.ಕೆ.ಪಾಟೀಲ ತಿಳಿಸಿದರು.

ಇದಕ್ಕಾಗಿ ಕರ್ನಾಟಕ ಶಿಕ್ಷಣ ಸಂಸ್ಥೆಗಳು (ಅಲ್ಪ ಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ನೀಡಲು ನಿಬಂಧನೆ ಮತ್ತು ಷರತ್ತುಗಳು)(ಕಾಲೇಜು ಶಿಕ್ಷಣ)(ತಿದ್ದುಪಡಿ) ನಿಯಮಗಳಿಗೆ ತಿದ್ದುಪಡಿಗೆ ಅನುಮೋದನೆ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.