ADVERTISEMENT

ರಾಯಭಾರಿಯಾಗಿ ತಮನ್ನಾ: ಅವಿವೇಕದ, ಅಸಂಬದ್ಧತೆಯ, ಅನೈತಿಕತನದ ತೀರ್ಮಾನ ಎಂದ ಕರವೇ

ಮೈಸೂರು ಸ್ಯಾಂಡಲ್ ಸೋಪ್ಸ್‌ ಪ್ರಚಾರ ರಾಯಭಾರಿಯಾಗಿ ತಮನ್ನಾ ಭಾಟಿಯಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಮೇ 2025, 2:55 IST
Last Updated 23 ಮೇ 2025, 2:55 IST
<div class="paragraphs"><p>ತಮನ್ನಾ&nbsp;ಭಾಟಿಯಾ</p></div>

ತಮನ್ನಾ ಭಾಟಿಯಾ

   

ಬೆಂಗಳೂರು: ಮೈಸೂರು ಸ್ಯಾಂಡಲ್ ಸೋಪ್ಸ್‌ ಪ್ರಚಾರ ರಾಯಭಾರಿಯಾಗಿ ದುಬಾರಿ ಮೊತ್ತ ತೆತ್ತು ನಟಿ ತಮನ್ನಾ ಭಾಟಿಯಾ ಅವರನ್ನು ರಾಜ್ಯ ಸರ್ಕಾರ ನೇಮಿಸಿರುವುದಕ್ಕೆ ಕನ್ನಡಿಗರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಏತನ್ಮಧ್ಯೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ಎಕ್ಸ್‌ನಲ್ಲಿ ಸುದೀರ್ಘ ಪೋಸ್ಟ್ ಒಂದನ್ನು ಹಂಚಿಕೊಂಡು ‘ರಾಜ್ಯ ಸರ್ಕಾರದ ನಿರ್ಧಾರ ಅವಿವೇಕದ, ಅಸಂಬದ್ಧತೆಯ, ಅನೈತಿಕತನದ, ಬೇಜವಾಬ್ದಾರಿಯುತ ತೀರ್ಮಾನವಾಗಿದೆ’ ಎಂದು ಕಿಡಿಕಾರಿದ್ದಾರೆ.

ADVERTISEMENT

ಮೈಸೂರು ಸೋಪ್ಸ್ ಸಂಸ್ಥೆ ಕರ್ನಾಟಕ ಸರ್ಕಾರದ ಸ್ವಾಮ್ಯದ ಕಂಪನಿ. 1916ರಲ್ಲಿ ಮೈಸೂರು ಸಂಸ್ಥಾನದ ಮಹಾರಾಜ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದರು. ಈ ಕಂಪನಿಯು ಕರ್ನಾಟಕದಲ್ಲಿ ಅತ್ಯಂತ ಜನಪ್ರಿಯ ಬ್ರಾಂಡ್‌ಗಳಲ್ಲಿ ಒಂದಾಗಿದೆ ಮತ್ತು ಇದರ ಪ್ರಾಥಮಿಕ ಗ್ರಾಹಕರು ಕನ್ನಡಿಗರಾಗಿದ್ದಾರೆ ಎನ್ನುವ ಕನಿಷ್ಠ ತಿಳಿವಳಿಕೆ ಈ ನೇಮಕ ಮಾಡುವಾಗ ಇರಲಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಐತಿಹಾಸಿಕ ಮತ್ತು ಸಾಂಸ್ಕೃತಿಕ ಮೌಲ್ಯವುಳ್ಳ ಕಂಪನಿಯ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರೇ ಬೇಕಿತ್ತೆ? ಈ ನೇಮಕಕ್ಕಾಗಿ ಕರ್ನಾಟಕ ಸರ್ಕಾರವು ₹6.20 ಕೋಟಿ ಭಾರೀ ಮೊತ್ತವನ್ನು ವ್ಯಯಿಸಿರುವುದು ಇನ್ನಷ್ಟು ಆಕ್ಷೇಪಾರ್ಹವಾಗಿದೆ ಎಂದು ಕಿಡಿಕಾರಿದ್ದಾರೆ.

ಈ ನಿರ್ಧಾರದ ವಿರುದ್ಧ ನಮ್ಮ ತೀವ್ರ ವಿರೋಧವನ್ನು ಈ ಮೂಲಕ ದಾಖಲಿಸುತ್ತೇವೆ. ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ಕರ್ನಾಟಕ ಸರ್ಕಾರದ ಸ್ವಾಮ್ಯದ ಕಂಪನಿಯಾಗಿದೆ ಎಂದಿದ್ದಾರೆ.

ಈ ಹಣವನ್ನು ಕರ್ನಾಟಕದ ಜನರ ಒಳಿತಿಗಾಗಿ, ಉದಾಹರಣೆಗೆ ಶಿಕ್ಷಣ, ಆರೋಗ್ಯ, ಅಥವಾ ಉದ್ಯೋಗ ಸೃಷ್ಟಿಗೆ ಬಳಸಬಹುದಾಗಿತ್ತು. ಸರ್ಕಾರವು ಜನರ ತೆರಿಗೆ ಹಣವನ್ನು ಈ ರೀತಿ ವ್ಯರ್ಥವಾಗಿ ಖರ್ಚು ಮಾಡಿರುವುದು ಖಂಡನೀಯವಾಗಿದೆ. ಕರ್ನಾಟಕದಲ್ಲಿ ಅನೇಕ ಪ್ರತಿಭಾವಂತ ಮತ್ತು ಜನಪ್ರಿಯ ಕನ್ನಡ ನಟಿಯರು ಇದ್ದಾರೆ. ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿದರೆ, ಕನ್ನಡಿಗರ ಮನಸ್ಸಿಗೆ ಹತ್ತಿರವಾಗುವುದರ ಜೊತೆಗೆ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡಬಹುದಾಗಿತ್ತು ಎಂದಿದ್ದಾರೆ.

‌ತಮನ್ನಾ ಭಾಟಿಯಾ ಅವರ ನೇಮಕವು ಕರ್ನಾಟಕದ ಜನರ ಭಾವನೆಗಳಿಗೆ ಧಕ್ಕೆ ತರುವಂತಿದ್ದು, ಈ ನಿರ್ಧಾರವನ್ನು ತಕ್ಷಣವೇ ಹಿಂಪಡೆಯದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆಯು ತೀವ್ರ ಪ್ರತಿಭಟನೆಯನ್ನು ಆಯೋಜಿಸಲಿದೆ. ಕರ್ನಾಟಕ ಸರ್ಕಾರ ಮತ್ತು ಮೈಸೂರು ಸೋಪ್ಸ್ ಕಂಪನಿಯು ಕನ್ನಡಿಗರ ಭಾವನೆಗಳಿಗೆ ಮನ್ನಣೆ ನೀಡಿ, ಸ್ಥಳೀಯ ಪ್ರತಿಭೆಗಳಿಗೆ ಆದ್ಯತೆ ನೀಡುವಂತೆ ಒತ್ತಾಯಿಸುತ್ತೇವೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.