ADVERTISEMENT

15 ಲಕ್ಷ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕದ ಗುರಿ: ಮುಖ್ಯಮಂತ್ರಿ ಯಡಿಯೂರಪ್ಪ

ಜಲ ಜೀವನ್ ಮಿಷನ್ ಯೋಜನೆ

​ಪ್ರಜಾವಾಣಿ ವಾರ್ತೆ
Published 20 ಮೇ 2020, 11:42 IST
Last Updated 20 ಮೇ 2020, 11:42 IST
ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಡಿಯೊ ಸಂವಾದ ನಡೆಸಿದರು.
ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಡಿಯೊ ಸಂವಾದ ನಡೆಸಿದರು.   
""

ಬೆಂಗಳೂರು:ಭಾರತ ಸರ್ಕಾರದ ಜಲ ಜೀವನ್ಮಿಷನ್ ಯೋಜನೆಯ ಅನುಷ್ಠಾನದ ಕುರಿತಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಅವರು ಬುಧವಾರ ವಿಡಿಯೊ ಸಂವಾದ ಮೂಲಕ ಚರ್ಚೆ ನಡೆಸಿದರು.

ಜಲ ಜೀವನ್ ಮಿಷನ್ ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ತಲಾ ಶೇ 50ರ ಅನುದಾನದೊಂದಿಗೆ ಜಾರಿಗೊಳಿಸಲಾಗುತ್ತಿದ್ದು, ರಾಜ್ಯಕ್ಕೆ ₹ 1,150 ಕೋಟಿ ಅನುದಾನ ಮಂಜೂರಾಗಿದೆ.

ರಾಜ್ಯದಲ್ಲಿ 15 ಲಕ್ಷ ಕುಟುಂಬಗಳಿಗೆ ನಲ್ಲಿ ನೀರು ಸಂಪರ್ಕ ಜೋಡಿಸುವ ಗುರಿ ನಿಗದಿ ಪಡಿಸಲಾಗಿದ್ದು, ಮುಂದಿನ ಮೂರು ವರ್ಷದಲ್ಲಿ ಈ ಗುರಿ ಸಾಧಿಸಲಾಗುವುದು ಎಂದು ಮುಖ್ಯಮಂತ್ರಿಯವರು ಮಾಹಿತಿ ನೀಡಿದರು.

ADVERTISEMENT

ಗಜೇಂದ್ರ ಸಿಂಗ್ ಶೇಖಾವತ್ ಅವರು ಮಾತನಾಡಿ, ಜಲ ಶಕ್ತಿ ಮಿಷನ್ ಯೋಜನೆಗೆ ಅನುದಾನದ ಕೊರತೆ ಇಲ್ಲ. ಉದ್ಯೋಗ ಖಾತರಿ ಯೋಜನೆ ಮತ್ತು 15ನೇ ಹಣಕಾಸು ಆಯೋಗದ ಅನುದಾನವನ್ನೂ ಸಂಯೋಜಿಸಿ, 2022-23 ರೊಳಗೆ ರಾಜ್ಯದಾದ್ಯಂತ ಈ ಯೋಜನೆಯನ್ನು ಜಾರಿಗೊಳಿಸುವಂತೆ ಸಲಹೆ ನೀಡಿದರು.

ಪ್ರಾರಂಭದಲ್ಲಿ ಈಗಾಗಲೇ ಜಲ ಮೂಲ ಲಭ್ಯವಿರುವ, ಗ್ರಾಮಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸುವ ಕುರಿತು ತೀರ್ಮಾನಿಸಲಾಯಿತು.

ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.