ಬೆಂಗಳೂರು: ವೃಂದ ಮತ್ತು ನೇಮಕಾತಿಯ ಹೊಸ ನಿಯಮಗಳನ್ನು 2017ರ ನಂತರ ನೇಮಕವಾದ ಶಿಕ್ಷಕರಿಗೆ ಅನ್ವಯಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸೆ. 3ರಂದು ಹಮ್ಮಿಕೊಂಡಿದ್ದ ‘ಫ್ರೀಡಂ ಪಾರ್ಕ್’ ಚಲೋ ಹೋರಾಟವನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮುಂದೂಡಿದೆ.
ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಜತೆ ಶುಕ್ರವಾರ ನಡೆದ ಮಾತುಕತೆಯ ನಂತರ ಈ ಕುರಿತು ಸಂಘದ ಅಧ್ಯಕ್ಷ ಚಂದ್ರಶೇಖರ ನುಗ್ಗಲಿ ಮಾಹಿತಿ ನೀಡಿದರು.
‘ವೃಂದ ಮತ್ತು ನೇಮಕಾತಿಯ ಹೊಸ ನಿಯಮದ ಗೊಂದಲ ನಿವಾರಣೆ, ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವುದು ಸೇರಿದಂತೆ ಶಿಕ್ಷಕರ ಬೇಡಿಕೆಗಳನ್ನು ಸೆ. 4ರಂದು ನಡೆಯುವ ಸಚಿವ ಸಂಪುಟ ಸಭೆಗೆ ತರುವ ಪ್ರಯತ್ನ ಮಾಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ. ಹಾಗಾಗಿ, ಹೋರಾಟವನ್ನು ತಾತ್ಕಾಲಿಕವಾಗಿ ಮುಂದೂಡುತ್ತಿದ್ದೇವೆ’ ಎಂದರು.
‘ಇಲಾಖೆಯು ಶಿಕ್ಷಕರ ಜತೆಗಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ. ಎಲ್ಲ ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳ ಸಮ್ಮುಖದಲ್ಲಿ ನಿರ್ಧಾರ ತೆಗೆದುಕೊಳ್ಳಲಾಯಿತು. ಭರವಸೆ ನೀಡಿದ ಅವಧಿಯ ಒಳಗೆ ಬೇಡಿಕೆ ಈಡೇರಿಸದಿದ್ದರೆ ಹೋರಾಟದ ದಿನವನ್ನು ಮರುನಿಗದಿ ಮಾಡಲಾಗುವುದು’ ಎಂದು ಹೇಳಿದರು.
ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಆಯುಕ್ತ ಕೆ.ವಿ.ತ್ರಿಲೋಕ್ ಚಂದ್ರ, ನಿರ್ದೇಶಕಿ ಅನಿತಾ ನಜಾರಿಯಾ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.