ಸಂಸದ ತೇಜಸ್ವಿ ಸೂರ್ಯ
ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್ ಆದೇಶದ ವಿರುದ್ಧ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.
‘ಜಮೀನಿನ ಪಹಣಿಯಲ್ಲಿ ವಕ್ಫ್ ಎಂದು ತೋರಿಸಿದ ಪರಿಣಾಮ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಹರನಗಿರಿ ರೈತ ಚನ್ನಪ್ಪ ಸಿ.ಬಾಳಿಕಾಯಿ (24) ಉರುಫ್ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂಬ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಬಿತ್ತರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತೇಜಸ್ವಿ ಸೂರ್ಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.
‘ಇದೇನು? ಈ ವಿಷಯವನ್ನು ರಾಜಕೀಯಗೊಳಿಸಬೇಡಿ. ಮತದಾರರ ಮುಂದೆ ನಿಮ್ಮ ಹೋರಾಟಗಳನ್ನು ಮಾಡಿ’ ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ಕೆ. ವಿನೋದ್ ಚಂದ್ರನ್
ಅವರನ್ನೊಳಗೊಂಡ ಪೀಠ ಹೇಳಿತು.
ರಾಜ್ಯ ಸರ್ಕಾರದ ಮೇಲ್ಮನವಿಯನ್ನು ಪೀಠ ವಜಾಗೊಳಿಸಿತು ಮತ್ತು ಕಾನೂನು ಕ್ರಮಗಳನ್ನು
ರಾಜಕೀಯಗೊಳಿಸದಂತೆ ಎಚ್ಚರಿಕೆ ನೀಡಿತು.
ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಸುದ್ದಿಯನ್ನು ತೇಜಸ್ವಿಸೂರ್ಯ ‘ಎಕ್ಸ್’ನಲ್ಲಿ ಟ್ಯಾಗ್ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯ ಸೆನ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ–2023ರ (ಬಿಎನ್‌ಎಸ್) ಕಲಂ 353ರ (2) (ವಿವಿಧ ಗುಂಪುಗಳ ನಡುವೆ ದ್ವೇಷ ಬಿತ್ತುವ ಮತ್ತು ದ್ವೇಷಕ್ಕೆ ಪ್ರಚೋದನೆ ನೀಡುವ ಸುಳ್ಳು ಸುದ್ದಿ ಹರಡಿದ ಆರೋಪ) ಅಡಿ ಎಫ್‌ಐಆರ್ ದಾಖಲಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.