ADVERTISEMENT

ಮುಜರಾಯಿ ಸುಪರ್ದಿಗೆ ಬೆಂಗಳೂರಿನ ಗಾಳಿ ಆಂಜನೇಯ ದೇಗುಲ

ಸರ್ಕಾರದ ಆದೇಶ ತಡೆಗೆ ಹೈಕೋರ್ಟ್ ನಕಾರ

​ಪ್ರಜಾವಾಣಿ ವಾರ್ತೆ
Published 17 ಜುಲೈ 2025, 0:00 IST
Last Updated 17 ಜುಲೈ 2025, 0:00 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ನಗರದ ಪ್ರಸಿದ್ಧ ಗಾಳಿ ಆಂಜನೇಯ ಸ್ವಾಮಿ ದೇವಾಲಯವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಒಪ್ಪಿಸಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ತಡೆ ನೀಡಲು ಹೈಕೋರ್ಟ್‌ ನಿರಾಕರಿಸಿದೆ.

ಈ ಸಂಬಂಧ ‘ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಾಲಯ ಟ್ರಸ್ಟ್‌’ನ ಟ್ರಸ್ಟಿ ಮತ್ತು ಸಂಚಾಲಕರೂ ಆದ ಬಿ.ಪಿ.ನಾಗರಾಜು ಅಲಿಯಾಸ್‌ ಅಶೋಕ್‌ ಮತ್ತಿತರರು ಸಲ್ಲಿಸಿರುವ ರಿಟ್‌ ಅರ್ಜಿ ವಿಚಾರಣೆ ಆಲಿಸಿ ಕಾಯ್ದಿರಿಸಿದ್ದ ಮಧ್ಯಂತರ ಆದೇಶವನ್ನು ನ್ಯಾಯಮೂರ್ತಿ ಎಸ್‌.ಸುನಿಲ್ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಪ್ರಕಟಿಸಿತು.

‘ದೇಗುಲದಲ್ಲಿನ ಹುಂಡಿ ಹಣ ಎಣಿಕೆ ಮಾಡುವಾಗ ಹಣ ಕದ್ದಿರುವ ಬಗ್ಗೆ ವಿಡಿಯೊ ದಾಖಲೆಗಳಿವೆ. ಈ ದಾಖಲೆಗಳನ್ನು ಪರಿಶೀಲಿಸಿದಾಗ ಆಡಳಿತ ಮಂಡಳಿ ಹಣದ ವ್ಯವಹಾರಗಳಲ್ಲಿ ನಡೆಸಿರುವ ಹೇರಾಫೇರಿ ಮೇಲ್ನೋಟಕ್ಕೇ ಮನದಟ್ಟಾಗುತ್ತದೆ. ದೇಗುಲದ ಅವ್ಯವಹಾರಗಳ ಬಗ್ಗೆ ಜಿಲ್ಲಾಧಿಕಾರಿ ವಿಚಾರಣೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಈ ವರದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ತಿಳಿಸಲಾಗಿದೆ. ಅಂತೆಯೇ, ಟ್ರಸ್ಟ್‌ ಸದಸ್ಯರ ಮಧ್ಯೆ ಸಿವಿಲ್‌ ವ್ಯಾಜ್ಯ ಇದೆ ಎಂಬುದನ್ನೂ ಜಿಲ್ಲಾಧಿಕಾರಿ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ, ಈ ಎಲ್ಲಾ ಅಂಶಗಳ ಆಧಾರದಲ್ಲಿ ಸರ್ಕಾರದ ಆದೇಶಕ್ಕೆ ತಡೆ ನೀಡಲು ಆಗದು’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ADVERTISEMENT

ಪ್ರಕರಣವೇನು?:

‘ಗಾಳಿ ಆಂಜನೇಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿಯ ಪದಾಧಿಕಾರಿಗಳಲ್ಲಿ ಹೊಂದಾಣಿಕೆ ಇಲ್ಲ. ದೇವಾಲಯಕ್ಕೆ ಲಕ್ಷಾಂತರ ರೂಪಾಯಿ ಆದಾಯ ಬರುತ್ತಿದ್ದರೂ ಪ್ರತಿ ವರ್ಷ ಉಳಿತಾಯವಿಲ್ಲದೇ ವೆಚ್ಚ ಮಾಡಲಾಗುತ್ತಿದೆ. ದೇವಸ್ಥಾನದ ಹಣ ದುರುಪಯೋಗವಾಗುತ್ತಿದೆ. ಆದಾಯ ಹಾಗೂ ವೆಚ್ಚಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ಯಾವುದೇ ದಾಖಲೆ ಇಡದೆ, ಸಹಾಯಕ ಆಯುಕ್ತರು ಮತ್ತು ಮುಜರಾಯಿ ಇಲಾಖೆ ನೋಟಿಸ್ ನೀಡಿದ ಬಳಿಕ ದಾಖಲೆ ಸೃಷ್ಟಿಸಿರುವುದು ಕಂಡು ಬಂದಿದೆ’ ಎಂಬ ಅಭಿಪ್ರಾಯದೊಂದಿಗೆ ಮುಜರಾಯಿ ಇಲಾಖೆ, ದೇವಾಲಯವನ್ನು ತನ್ನ ಸುಪರ್ದಿಗೆ ಪಡೆದಿದೆ. ಅರ್ಜಿದಾರರು ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.