ADVERTISEMENT

ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಅನುಷ್ಠಾನಕ್ಕೆ ₹10,000 ಕೋಟಿ: ಬಿಎಸ್‌ವೈ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2020, 18:00 IST
Last Updated 6 ಮಾರ್ಚ್ 2020, 18:00 IST
ಬಿ ಎಸ್ ಯಡಿಯೂರಪ್ಪ
ಬಿ ಎಸ್ ಯಡಿಯೂರಪ್ಪ   

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಅನುಷ್ಠಾನಕ್ಕೆ ₹10,000 ಕೋಟಿ ನಿಗದಿಪಡಿಸಿ, ಕ್ರಿಯಾ ಯೋಜನೆ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.

ವಿಧಾನಸಭೆಯಲ್ಲಿ ಈ ಘೋಷಣೆ ಮಾಡಿರುವ ಅವರು, ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಕಾಮಗಾರಿಗೆ ಹಾಗೂ ಬಾಧಿತ 27 ಹಳ್ಳಿಗಳ ಪುನರ್ ವಸತಿ ಮತ್ತು ಪುನರ್ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಮೂರು ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುತ್ತದೆ. ನಿನ್ನೆ ಹಣಕಾಸು ಇಲಾಖೆಯ ಅಧಿಕಾರಿಗಳ ಜತೆ ಚರ್ಚಿಸಿ ಈ ನಿರ್ಧಾರ ಮಾಡಿದ್ದೇವೆ. ಇಂದು ದೆಹಲಿಗೆ ಹೋಗುತ್ತಿದ್ದೇನೆ. ಕೇಂದ್ರ ಸರ್ಕಾರದ ಪ್ರಮುಖರ ಜೊತೆ ಮಾತುಕತೆ ನಡೆಸಿ, ಹೆಚ್ಚುವರಿ ಅನುದಾನ ತರುವ ಪ್ರಯತ್ನ ಮಾಡುತ್ತೇವೆ. ಇದನ್ನು ನಿನ್ನೆ ಬಜೆಟ್‌ನಲ್ಲಿ ಪ್ರಕಟಿಸಿರಲಿಲ್ಲ ಎಂದು ಹೇಳಿದರು.

ADVERTISEMENT

ಮತ್ತೊಂದೆಡೆ ಟ್ವೀಟ್ ಮಾಡಿರುವ ಅವರು, ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಕೇಂದ್ರ ಕಚೇರಿಯ ನೂತನ ಕಟ್ಟಡ ಮತ್ತು ಯೂಟ್ಯೂಬ್ ಚಾನಲ್ ಉದ್ಘಾಟಿಸಿ ಮಾತನಾಡಿ, ಆಯವ್ಯಯದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ₹ 29 ಸಾವಿರ ಕೋಟಿಗಳಿಗೂ ಹೆಚ್ಚು ಅನುದಾನ ನಿಗದಿ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ಕಾಲೇಜನ್ನು ಐಐಟಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲು 10 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಹೇಳಿದರು.

ಪಾಲಿಟೆಕ್ನಿಕ್ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಹೆಚ್ಚಿಸಲು ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಡಿ ಜಿಯೋಸ್ಪೇಶಿಯಲ್ ತಂತ್ರಜ್ಞಾನ ಕೇಂದ್ರ ಸ್ಥಾಪನೆ ಮಾಡಲಾಗುವುದು. ಏಷ್ಯಾ ಖಂಡದ ದೇಶಗಳ ಶಿಕ್ಷಣ ಸಚಿವರ ಶೈಕ್ಷಣಿಕ ಸಮಾವೇಶ ಮತ್ತು ಬೃಹತ್ ವಸ್ತು ಪ್ರದರ್ಶನವನ್ನು ಖಾಸಗಿ ಸಹಭಾಗಿತ್ವದಲ್ಲಿ ಬೆಂಗಳೂರಿನಲ್ಲಿ ಏರ್ಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

‘ವಿಜಯೀಭವ’ ಯೂಟ್ಯೂಬ್ ಚಾನೆಲ್ ಪ್ರಾರಂಭಿಸಿ, ಈ ಮೂಲಕ ಯುವಜನರಿಗೆ ಸೂಕ್ತ ಮಾರ್ಗದರ್ಶನ ಹಾಗೂ ಸ್ಫೂರ್ತಿ ನೀಡಲು ಉತ್ತಮ ವೇದಿಕೆ ಸೃಷ್ಟಿಸಲಾಗಿದೆ ಎಂದು ಹೇಳಿದರು.

ಸಿದ್ದರಾಮಯ್ಯ ಪ್ರಶ್ನೆ
ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ‘ಕೃಷ್ಣಾ ಮೇಲ್ಡಂಡೆ ಯೋಜನೆಯ ಬಗ್ಗೆ ಬಜೆಟ್‌ನಲ್ಲಿ ಉಲ್ಲೇಖವೇ ಇಲ್ಲ. ಈಗ ಹಣ ಎಲ್ಲಿಂದ ತರುತ್ತೀರಿ’ ಎಂದು ಪ್ರಶ್ನಿಸಿದರು.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ‘ಜಗದೀಶ ಶೆಟ್ಟರ್‌ ಮುಖ್ಯಮಂತ್ರಿಯಾಗಿದ್ದಾಗ ₹17,207 ಕೋಟಿ ಅನುದಾನ ನೀಡಿದ್ದರು.ಕೃಷ್ಣಾ ಜಲ ವಿವಾದ ನ್ಯಾಯಮಂಡಳಿ ರಾಜ್ಯಕ್ಕೆ 173 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿ ಏಳು ವರ್ಷವಾಗಿವೆ. ಯೋಜನೆಗೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸರ್ಕಾರಗಳು ನಯಾಪೈಸೆ ಬಿಡುಗಡೆ ಮಾಡಿರಲಿಲ್ಲ’ ಎಂದರು.

ಸಿದ್ದರಾಮಯ್ಯ, ‘ನಮ್ಮ ಸರ್ಕಾರ ನೀರಾವರಿ ಯೋಜನೆಗಳಿಗೆ ₹50ಸಾವಿರ ಕೋಟಿ ವೆಚ್ಚ ಮಾಡಿತ್ತು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.