ADVERTISEMENT

ಪಠ್ಯ ಹಿಂಪಡೆಯದಿದ್ದರೆ ಹೋರಾಟ: ಗಾಂಧೀಜಿ ಪ್ರತಿಮೆ ಬಳಿ ಕಾಂಗ್ರೆಸ್‌ ಧರಣಿ

​ಪ್ರಜಾವಾಣಿ ವಾರ್ತೆ
Published 9 ಜೂನ್ 2022, 19:45 IST
Last Updated 9 ಜೂನ್ 2022, 19:45 IST
ಪರಿಷ್ಕೃತ ಪಠ್ಯ ಹಿಂಪಡೆಯಲು ಒತ್ತಾಯಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಶಾಸಕರು, ಮುಖಂಡರು ವಿಧಾನಸೌಧದ ಆವರಣದಲ್ಲಿರುವ ಗಾಂಧೀಜಿ ಪ್ರತಿಮೆ ಎದುರು ಗುರುವಾರ ಪ್ರತಿಭಟನೆ ನಡೆಸಿದರು      ----–ಪ್ರಜಾವಾಣಿ ಚಿತ್ರ
ಪರಿಷ್ಕೃತ ಪಠ್ಯ ಹಿಂಪಡೆಯಲು ಒತ್ತಾಯಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಶಾಸಕರು, ಮುಖಂಡರು ವಿಧಾನಸೌಧದ ಆವರಣದಲ್ಲಿರುವ ಗಾಂಧೀಜಿ ಪ್ರತಿಮೆ ಎದುರು ಗುರುವಾರ ಪ್ರತಿಭಟನೆ ನಡೆಸಿದರು      ----–ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ರೋಹಿತ್‌ ಚಕ್ರತೀರ್ಥ ಸಮಿತಿ ಪರಿಷ್ಕರಿಸಿರುವ ಪಠ್ಯವನ್ನು ವಾಪಸು ಪಡೆದು, ಬರಗೂರು ರಾಮಚಂದ್ರಪ್ಪ ಸಮಿತಿ ಪರಿಷ್ಕರಿಸಿದ್ದ ಪಠ್ಯವನ್ನೇ ಮುಂದುವರಿಸಬೇಕು. ಇಲ್ಲದಿದ್ದರೆ ಮುಂದಿನ ಹೋರಾಟದ ರೂಪುರೇಷೆಯನ್ನು ಶೀಘ್ರದಲ್ಲಿ ತೀರ್ಮಾನಿಸುತ್ತೇವೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

‘ನಾಡಿನ ದಾರ್ಶನಿಕರು, ಮಹಾನ್ ಚೇತನಗಳಿಗೆ ಅಪಮಾನ ಮಾಡಿ, ಇತಿಹಾಸ ತಿರುಚಿರುವ ಪಠ್ಯಪುಸ್ತಕ ಪರಿಷ್ಕರಣೆ ರದ್ದುಗೊಳಿಸಿ ಹಿಂದಿನ ಪಠ್ಯಕ್ರಮ ಮುಂದುವರಿಸಬೇಕು’ ಎಂದು ಸಿದ್ದರಾಮಯ್ಯ ಆಗ್ರಹಿಸಿದರು. ವಿಧಾನಸೌಧ ಆವರಣದಲ್ಲಿರುವ ಮಹಾತ್ಮ
ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್‌ ಗುರುವಾರ ಹಮ್ಮಿಕೊಂಡಿದ್ದ ಧರಣಿ ಸಂದರ್ಭದಲ್ಲಿ ಅವರು ಮಾತನಾಡಿದರು.

‘ಚಕ್ರತೀರ್ಥ ಸಮಿತಿಯನ್ನು ವಿಸರ್ಜಿಸಿದರೂ, ಆ ಸಮಿತಿ ಶಿಫಾರಸು ಮಾಡಿದ ಪಠ್ಯವನ್ನು ಇಟ್ಟುಕೊಂಡಿದೆ. ಸಮಿತಿ ವಜಾ ಆಗಿರುವುದರಿಂದ ಆ ಸಮಿತಿ ಪರಿಷ್ಕರಣೆ ಮಾಡಿದ ಪಠ್ಯವನ್ನು ಮಕ್ಕಳಿಗೆ ಬೋಧನೆ ಮಾಡಬಾರದು. ಪರಿಷ್ಕರಣೆಗೊಂಡ ಪಠ್ಯದಲ್ಲಿ ಇತಿಹಾಸ ತಿರುಚುವ ಕೆಲಸ ಆಗಿದೆ. ಶಿಕ್ಷಣ ಸಚಿವ ನಾಗೇಶ್‌ ಅವರು ಮೊದಲು ಪರಿಷ್ಕರಣೆಗೊಂಡ ಪಠ್ಯವನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡುವುದಿಲ್ಲ ಎಂದಿದ್ದರು. ಇದಕ್ಕೆ ಪ್ರತಿರೋಧ ವ್ಯಕ್ತವಾದ ಮೇಲೆ ಕೆಲವು ವಿಚಾರಗಳನ್ನು ಪುನರ್‌ ಪರಿಶೀಲನೆ ಮಾಡುತ್ತೇವೆ ಎಂದಿದ್ದಾರೆ. ಇದರರ್ಥ ತಾವು ಚರಿತ್ರೆ ತಿರುಚಿರುವುದು ಸತ್ಯ, ಆರ್‌ಎಸ್‌ಎಸ್‌ ನಿರ್ದೇಶನದಂತೆ ಪಠ್ಯ ರಚನೆ ಮಾಡಿದ್ದಾರೆ ಎಂದು ಒಪ್ಪಿಕೊಂಡಂತೆ’ ಎಂದೂ ಹೇಳಿದರು.

ADVERTISEMENT

‘ಕೇಸರಿಕರಣಗೊಂಡಿರುವ ಪಠ್ಯವನ್ನು ಮಕ್ಕಳಿಗೆ ತಿಳಿಸಬಾರದು. ಆರ್‌ಎಸ್‌ಎಸ್‌ ಭಾಷಣವನ್ನು ಮಕ್ಕಳಿಗೆ ತಿಳಿಸಿ, ಅವರ ಮನಸ್ಸನ್ನು ಹಾಳು ಮಾಡುವ ಕೆಲಸ ಮಾಡಬಾರದು ಎಂಬುದು ನಮ್ಮ ನಿಲುವು. ನಾವು ಆರ್‌ಎಸ್‌ಎಸ್‌ ಮತ್ತು ಕೇಸರಿಕರಣವನ್ನು ವಿರೋಧಿಸುತ್ತೇವೆ. ಬಿಜೆಪಿಯವರು ಮಕ್ಕಳ ಮನಸ್ಸನ್ನು ಹಾಳು ಮಾಡುವ, ಮಕ್ಕಳಿಗೆ ವಿಷ ಉಣಿಸುವ ಕೆಲಸದ ವಿರುದ್ಧ ನಮ್ಮ ಹೋರಾಟ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು:ಡಿಕೆಶಿ
ಬೆಂಗಳೂರು:
‘ಪಠ್ಯ ಪುಸ್ತಕ ಪರಿಷ್ಕರಣೆ ನೆಪದಲ್ಲಿ ಸಮಾಜದ ಶಾಂತಿ ಕೆಡಿಸಿ, ದೇಶ, ವಿದೇಶಗಳಲ್ಲಿ ಕರ್ನಾಟಕದ ಗೌರವ ಹರಾಜು ಹಾಕುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಕ್ಷಣ ರಾಜೀನಾಮೆ ನೀಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದರು.

‘ಬಸವಣ್ಣನವರಿಂದ ಹಿಡಿದು ಅಂಬೇಡ್ಕರ್‌ವರೆಗೂ, ನಾರಾಯಣ ಗುರುಗಳಿಂದ ಶಿವಕುಮಾರ ಸ್ವಾಮೀಜಿ, ಬಾಲಗಂಗಾಧರ ಸ್ವಾಮಿ, ಮುರುಘಾ ಮಠದ ಸ್ವಾಮಿಗಳು, ಭಗತ್ ಸಿಂಗ್‌ವರೆಗೂ ಯಾರೊಬ್ಬರನ್ನೂ ಬಿಡದೆ ಈ ಸರ್ಕಾರ ಅಪಮಾನಿಸಿದೆ. ಹೊಸ ಪುಸ್ತಕವನ್ನು ಕಸದ ಬುಟ್ಟಿಗೆ ಎಸೆದು, ಹಳೆ ಪುಸ್ತಕವನ್ನು ಮುಂದುವರಿಸಬೇಕು’ ಎಂದರು.

‘ಈ ಸಂಬಂಧ ಪ್ರತಿ ಹಳ್ಳಿಯಲ್ಲೂ ಹೋರಾಟ ಮಾಡುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.