ಬೆಂಗಳೂರು: ‘ಮೈಸೂರಿನ ಗನ್‌ಹೌಸ್ ಸರ್ಕಲ್‌ನಲ್ಲಿ ಇದೇ 4ರಂದು ನಡೆಯಲಿರುವ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ರಾಜೇಂದ್ರ ಸ್ವಾಮೀಜಿ ಪುತ್ಥಳಿಯ ಅನಾವರಣ ಕಾರ್ಯಕ್ರಮಕ್ಕೆ ತಡೆ ನೀಡಬೇಕು’ ಎಂಬ ಮಧ್ಯಂತರ ಕೋರಿಕೆಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ಈ ಕುರಿತಂತೆ ಮೈಸೂರಿನ ಗಿರಿಯಾಭೋವಿ ಪಾಳ್ಯ ನಿವಾಸಿ ಸುಬ್ರಹ್ಮಣ್ಯ ಮತ್ತು ಕುರುಬರಹಳ್ಳಿ ನಿವಾಸಿ ಎನ್.ಶೀಲಾವತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಮೈಸೂರು ಜಿಲ್ಲಾಧಿಕಾರಿ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ, ‘ಸಕ್ಷಮ ಪ್ರಾಧಿಕಾರಗಳಿಂದ ಅಗತ್ಯ ಮಾಹಿತಿ ಪಡೆದು ಎರಡು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಿ’ ಎಂದು ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಅವರಿಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.
‘ಪುತ್ಥಳಿಯನ್ನು ಅನಧಿಕೃತವಾಗಿ ಸ್ಥಾಪಿಸಲಾಗಿದ್ದು ಅದನ್ನು ತೆರವುಗೊಳಿಸಲು ನಿರ್ದೇಶಿಸಬೇಕು’ ಎಂಬುದು ಅರ್ಜಿದಾರರ ಕೋರಿಕೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.