ಸಿದ್ದರಾಮಯ್ಯ , ಮುಖ್ಯಮಂತ್ರಿ
ಬೆಂಗಳೂರು: ‘ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳ ಕಲಿಕೆ ಕಡ್ಡಾಯಗೊಳಿಸುವ ಅಲ್ಲಿನ ಸರ್ಕಾರದ ಪ್ರಸ್ತಾಪಿತ ‘ಮಲಯಾಳಿ ಭಾಷಾ ಮಸೂದೆ-2025’ ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಈ ಕುರಿತು ‘ಎಕ್ಸ್’ ಮಾಡಿರುವ ಅವರು, ‘ಕೇರಳ ವಿಧಾನಸಭೆ ಅಂಗೀಕರಿಸಿರುವ ಈ ಮಸೂದೆಯನ್ನು ತಕ್ಷಣ ಹಿಂದೆಗೆದುಕೊಳ್ಳಬೇಕು’ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಆಗ್ರಹಿಸಿದ್ದಾರೆ.
‘ಈ ಮಸೂದೆಯನ್ನು ಕೇರಳ ಸರ್ಕಾರ ಜಾರಿಗೊಳಿಸಲು ಹೊರಟರೆ ಕನ್ನಡಿಗರು ಒಕ್ಕೊರಲಿನಿಂದ ವಿರೋಧಿಸಲಿದ್ದಾರೆ. ಕಾಸರಗೋಡಿನ ಕನ್ನಡಿಗರ ಜೊತೆ ನಿಂತು ಅವರ ಭಾಷಾ ಸ್ವಾತಂತ್ರ್ಯದ ರಕ್ಷಣೆಗೆ ಬೆಂಬಲ ನೀಡಲಿದ್ದಾರೆ’ ಎಂದಿದ್ದಾರೆ.
‘ಇಂತಹದ್ದೊಂದು ಕಾನೂನು ಜಾರಿಗೆ ಬಂದರೆ ಕೇರಳದ ಗಡಿಜಿಲ್ಲೆಗಳಲ್ಲಿ ಮುಖ್ಯವಾಗಿ ಕಾಸರಗೋಡಿನಲ್ಲಿ ವಾಸಿಸುತ್ತಿರುವ ಕನ್ನಡಿಗರು ಮಾತೃಭಾಷೆಯನ್ನು ಕಲಿಯುವ ಅವಕಾಶದಿಂದ ವಂಚಿತರಾಗಲಿದ್ದಾರೆ. ಭಾಷಾ ಅಲ್ಪಸಂಖ್ಯಾತರ ಮೂಲಭೂತ ಹಕ್ಕನ್ನು ದಮನ ಮಾಡುವ ಇಂತಹ ನಡೆಯನ್ನು ಕೇರಳದ ಕಮ್ಯುನಿಸ್ಟ್ ಸರ್ಕಾರದಿಂದ ನಿರೀಕ್ಷಿಸಿರಲಿಲ್ಲ’ ಎಂದಿದ್ದಾರೆ.
‘ಕಾಸರಗೋಡು ಆಡಳಿತಾತ್ಮಕವಾಗಿ ಕೇರಳಕ್ಕೆ ಸೇರಿದ್ದರೂ ಭಾವನಾತ್ಮಕವಾಗಿ ಕರ್ನಾಟಕ ರಾಜ್ಯಕ್ಕೆ ಸೇರಿದೆ. ಅಲ್ಲಿನ ಜನ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯದ ಜೊತೆ ಮಿಳಿತವಾಗಿದ್ದಾರೆ. ಅವರು ಕರ್ನಾಟಕದ ಕನ್ನಡಿಗರಿಗಿಂತ ಕಡಿಮೆ ಕನ್ನಡಿಗರೇನಲ್ಲ. ಅವರ ಹಿತ ರಕ್ಷಿಸುವುದು ನಮ್ಮ ಸರ್ಕಾರದ ಕರ್ತವ್ಯ. ವೈವಿಧ್ಯತೆಯಲ್ಲಿ ಏಕತೆ ಕಾಣುವ ಭಾರತದ ಪ್ರತಿಯೊಬ್ಬ ಪ್ರಜೆಗೂ ಅವರ ಮಾತೃಭಾಷೆಯಲ್ಲಿ ಕಲಿಯುವ ಸ್ವಾತಂತ್ರ್ಯ ಇದೆ’ ಎಂದೂ ಹೇಳಿದ್ದಾರೆ.
‘ಭಾಷಾ ಅಲ್ಪಸಂಖ್ಯಾತರಿಗೆ ಮಾತೃಭಾಷೆ ಎನ್ನುವುದು ಕೇವಲ ಭಾಷೆಯಲ್ಲ. ಅದು ಘನತೆಯ ಬದುಕು ನೀಡುವ ಅಸ್ಮಿತೆ. ಮಾತೃಭಾಷೆಯಲ್ಲಿ ಕಲಿಯುವ ಮಕ್ಕಳು ಸುಲಭದಲ್ಲಿ ವಿಷಯಗಳನ್ನು ಗ್ರಹಿಸುತ್ತಾರೆ ಎನ್ನುವುದು ವೈಜ್ಞಾನಿಕವಾಗಿ ಸಾಬೀತಾಗಿದೆ. ಅವರ ಮೇಲೆ ಅನ್ಯಭಾಷೆ ಹೇರುವುದರಿಂದ ಕಲಿಕಾ ಸಾಮರ್ಥ್ಯವನ್ನು ಕುಂದಿಸುವುದು ಮಾತ್ರವಲ್ಲ, ಒಂದು ಸ್ವತಂತ್ರ ಭಾಷೆಯ ಅವಸಾನಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.
‘ಕಾಸರಗೋಡು ಜಿಲ್ಲೆಯ ಶೇ 70ರಷ್ಟು ವಿದ್ಯಾರ್ಥಿಗಳು ಕನ್ನಡ ಭಾಷೆ ಮತ್ತು ಕನ್ನಡ ಮಾಧ್ಯಮದಲ್ಲಿಯೇ ಕಲಿಯಲು ಬಯಸುತ್ತಾರೆ ಎಂಬುದು ಅಲ್ಲಿನ ಕನ್ನಡಿಗರ ಒಕ್ಕೊರಲ ಅಭಿಪ್ರಾಯ. ಯಾವುದೇ ಒಂದು ಭಾಷೆ ಮತ್ತೊಂದು ಭಾಷೆಯ ವಿರುದ್ಧವಾಗಿ ಇರುವುದಿಲ್ಲ. ಭಾರತ ಬಹುಭಾಷೆ, ಬಹುಸಂಸ್ಕೃತಿ ಮತ್ತು ಬಹುಧರ್ಮದ ತೊಟ್ಟಿಲು. ಈ ಬಹುತ್ವದ ವಾತಾವರಣಕ್ಕೆ ಧಕ್ಕೆ ಉಂಟು ಮಾಡುವ ಪ್ರಯತ್ನ ಅಪಾಯಕಾರಿ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.