ADVERTISEMENT

ನಂಜನಗೂಡಲ್ಲಿ ವಿಜಯೇಂದ್ರ ಪೂಜೆ: ರಾಜಕಾರಣಿಗಳ ಕಣ್ತೆರೆಸುವ ಅಗತ್ಯವಿದೆ– ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 18 ಜೂನ್ 2021, 22:42 IST
Last Updated 18 ಜೂನ್ 2021, 22:42 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರ‍ಪ್ಪ ಅವರ ಮಗ ಬಿ.ವೈ. ವಿಜಯೇಂದ್ರ ಅವರು ಕೋವಿಡ್‌ ಮಾರ್ಗಸೂಚಿ ಉಲ್ಲಂಘಿಸಿ ನಂಜನಗೂಡಿನ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಪ್ರಕರಣದಲ್ಲಿ ಅಧಿಕಾರಿಗಳು ಮತ್ತು ರಾಜಕಾರಣಿಗಳ ಕಣ್ತೆರೆಸುವ ಅಗತ್ಯವಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಮೈಸೂರು ಜಿಲ್ಲಾಧಿಕಾರಿ ಸಲ್ಲಿಸಿದ್ದ ವರದಿ ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ದೇವಸ್ಥಾನಕ್ಕೆ ಪ್ರವೇಶ ನಿಷೇಧ ನಿಯಮಗಳನ್ನು ಉಲ್ಲಂಘಿಸದಂತೆ ಮುಜರಾಯಿ ಇಲಾಖೆಗೆ ಸೂಚನೆ ನೀಡಬೇಕು’ ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು.

ನಿಷೇಧ ಇದ್ದರೂ ದೇವಾಲಯಕ್ಕೆ ವಿಜಯೇಂದ್ರ ಪ್ರವೇಶಿಸಿದ್ದಾರೆ ಎಂಬುದನ್ನು ಜಿಲ್ಲಾಧಿಕಾರಿ ವರದಿಯಲ್ಲಿ ಒಪ್ಪಿಕೊಳ್ಳಲಾಗಿದೆ. ವಿಜಯೇಂದ್ರ ಅವರಿಗೆ ವಿಶೇಷ ದರ್ಶನದ ವ್ಯವಸ್ಥೆ ಮಾಡಿರಲಿಲ್ಲ ಎಂದು ದೇಗುಲದ ಕಾರ್ಯನಿರ್ವಹಣಾ ಅಧಿಕಾರಿ ಹೇಳಿಕೆ ನೀಡಿರುವ ಅಂಶವನ್ನೂ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ADVERTISEMENT

‘ನಿಯಮ ಉಲ್ಲಂಘಿಸಿದ ವ್ಯಕ್ತಿ ನ್ಯಾಯಾಲಯದಲ್ಲಿ ಇಲ್ಲ. ಆದರೂ ಅವರು ಜಿಲ್ಲಾಧಿಕಾರಿ ವರದಿಯಲ್ಲಿ ನೀಡಿರುವ ಹೇಳಿಕೆ ಗಮನಿಸಬೇಕಾಗಿದೆ’ ಎಂದು ಪೀಠ ಹೇಳಿತು.

‘ವಿಪತ್ತು ನಿರ್ವಹಣಾ ಕಾಯ್ದೆಯಡಿ ರಾಜ್ಯ ಮಟ್ಟದ ಕಾರ್ಯಕಾರಿ ಸಮಿತಿ ಹೊರಡಿಸುವ ಆದೇಶಗಳನ್ನು ಎಲ್ಲರೂ ಪಾಲಿಸಬೇಕು. ದೇಗುಲಗಳನ್ನು ಮುಚ್ಚಬೇಕು ಎಂಬ ಆದೇಶ ಪಾಲನೆಯಲ್ಲಿ ಯಾರಿಗೂ ವಿನಾಯಿತಿ ಇರಬಾರದು. ಆದೇಶ ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆಯೇ ಎಂಬುದನ್ನು ಖಚಿತಪಡಿಸಬೇಕು ಎಂಬ ನಿರ್ದೇಶನವನ್ನು ಮುಜರಾಯಿ ಇಲಾಖೆಗೆ ನೀಡಬೇಕು’ ಎಂದು ಪೀಠ ಸರ್ಕಾರಕ್ಕೆ ಆದೇಶಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.