ಬೆಂಗಳೂರು: ಕರ್ನಾಟಕ ರಾಜ್ಯ ವಕೀಲರ ಪರಿಷತ್ ವತಿಯಿಂದ ಮೈಸೂರಿನಲ್ಲಿ ಇದೇ 12ರಂದು ನಡೆಯಲಿರುವ ವಕೀಲರ ರಾಜ್ಯ ಮಟ್ಟದ ಹತ್ತನೇ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ಆಹ್ವಾನ ಪತ್ರಿಕೆಯಿಂದ ಕೈಬಿಡಲಾಗಿದೆ.
ಉಳಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ. ಎಸ್. ಬೋಪಣ್ಣ, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಸೇರಿದಂತೆ ಇತರ ಗಣ್ಯರ ಹೆಸರುಗಳನ್ನು ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಲಾಗಿದೆ.
ಈ ಮೊದಲು ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ‘ಮುಖ್ಯ ಅತಿಥಿ‘ ಎಂದು ಆಹ್ವಾನ ಪತ್ರಿಕೆಯಲ್ಲಿ ಉಲ್ಲೇಖಿಸಲಾಗಿತ್ತು. ಆದರೆ, ಅವರು ಹಲವು ಗಂಭೀರ ಕ್ರಿಮಿನಲ್ ಪ್ರಕರಣಗಳ ಆರೋಪಿಯಾಗಿದ್ದು, ಮತ್ತೆ ಕೆಲವು ಗುರುತರ ಕ್ರಿಮಿನಲ್ ಪ್ರಕರಣಗಳಲ್ಲಿ ಜಾಮೀನಿನ ಮೇಲೆ ಹೊರಗಿದ್ದಾರೆ. ಏತನ್ಮಧ್ಯೆ, ಅವರನ್ನು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಜೊತೆಗೆ ವೇದಿಕೆ ಹಂಚಿಕೊಳ್ಳಲು ಅನುವು ಮಾಡಿಕೊಟ್ಟಿದ್ದನ್ನು ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಬಲವಾಗಿ ಆಕ್ಷೇಪಿಸಿದ್ದರು.
ಈ ಕುರಿತಂತೆ ಅವರು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಪತ್ರಮುಖೇನ ತಮ್ಮ ಆಕ್ಷೇಪಣೆಯನ್ನು ದಾಖಲಿಸುತ್ತಿದ್ದಂತೆಯೇ, ಇದು ವಿವಾದದ ಸ್ವರೂಪ ಪಡೆಯುತ್ತಿರುವುದನ್ನು ಗಮನಿಸಿದ ರಾಜ್ಯ ವಕೀಲರ ಪರಿಷತ್ ಹೊಸ ಆಹ್ವಾನ ಪತ್ರಿಕೆಯನ್ನು ಮುದ್ರಿಸಿದ್ದು ಅದರಲ್ಲಿ ಶಿವಕುಮಾರ್ ಹೆಸರನ್ನು ಕೈಬಿಟ್ಟಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.