ಮುಖ್ಯಮಂತ್ರಿ ಸಿದ್ದರಾಮಯ್ಯ
ಹುಬ್ಬಳ್ಳಿ: 'ರಾಜ್ಯದಲ್ಲಿ ಯಾವುದೇ ರೀತಿಯ ಆರ್ಥಿಕ ಸಂಕಷ್ಟವಿಲ್ಲ. ಪ್ರತಿಪಕ್ಷ ಬಿಜೆಪಿ ಸುಳ್ಳು ಹೇಳುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಭಾನುವಾರ ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, 'ಈವರೆಗೆ ಸರ್ಕಾರ ಘೋಷಿಸಿರುವ ಯಾವುದೇ ಯೋಜನೆಗಳು ನಿಂತಿಲ್ಲ. ಎಲ್ಲವೂ ಸುಸೂತ್ರವಾಗಿ ನಡೆಯುತ್ತಿವೆ. ಒಂದೆಡೆ ಬಿಜೆಪಿ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದರೆ, ಇನ್ನೊಂದೆಡೆ ಬೇರೆ ರಾಜ್ಯಗಳಲ್ಲಿ ತಾವೇ ಗ್ಯಾರಂಟಿ ಯೋಜನೆಗಳನ್ನು ಘೋಷಿಸುತ್ತಿದೆ' ಎಂದು ಲೇವಡಿ ಮಾಡಿದರು.
ಬಳ್ಳಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 'ಔಷಧಿ ಖರೀದಿಯಲ್ಲಿ ಯಾವುದೇ ರೀತಿಯ ಹಗರಣ ನಡೆದಿಲ್ಲ' ಎಂದ ಸಿಎಂ, 'ಕೋವಿಡ್ ಹಗರಣದಲ್ಲಿ ಅಂದಿನ ಬಿಜೆಪಿ ಸರ್ಕಾರ ಔಷಧಿಗಳನ್ನು ಒಂದಕ್ಕೆ ಹತ್ತುಪಟ್ಟು ಹೆಚ್ಚು ಹಣ ನೀಡಿ ಖರೀದಿಸಿತ್ತು. ಬಳ್ಳಾರಿ ಘಟನೆಗೆ ಸಂಬಂಧಿಸಿ ನಾವು ಈಗಾಗಲೇ ಪರಿಶೀಲನಾ ತಂಡ ರಚಿಸಿದ್ದೇವೆ. ಅದು ವರದಿ ನೀಡಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಮೃತ ಬಾಣಂತಿಯರಿಗೆ ತಲಾ ₹5 ಲಕ್ಷ ಪರಿಹಾರ ನೀಡುವಂತೆಯೂ ಅದೇಶಿಸಲಾಗಿದೆ' ಎಂದರು.
'ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನ ಆರಂಭವಾಗಲಿದೆ. ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತಂತೆ ಚರ್ಚಿಸಲಾಗುವುದು. ಹಾಗೆಯೇ, ಸರ್ಕಾರ ಅಧಿವೇಶನದಲ್ಲಿ ಪ್ರತಿಪಕ್ಷವನ್ನು ಎದುರಿಸಲು ಸರ್ವಸನ್ನದ್ಧವಾಗಿದೆ' ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.