ADVERTISEMENT

ಜಯಮೃತ್ಯುಂಜಯ ಸ್ವಾಮೀಜಿಗೆ ಕರೆ ಮಾಡಿ ಅಗೌರವ: ಸಿ.ಸಿ.ಪಾಟೀಲ ಆರೋಪ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2023, 17:08 IST
Last Updated 3 ಏಪ್ರಿಲ್ 2023, 17:08 IST
   

ಬೆಂಗಳೂರು: ರಾಜ್ಯ ಸರ್ಕಾರ ಪ್ರಕಟಿಸಿದ ಮೀಸಲಾತಿಯನ್ನು ಒಪ್ಪಿ ಹೋರಾಟ ನಿಲ್ಲಿಸಿದ ಕಾರಣ ಕೂಡಲ ಸಂಗಮಪೀಠದ ಜಯಮೃತ್ಯುಂಜಯ ಸ್ವಾಮೀಜಿ ಅವರಿಗೆ ಕಾಂಗ್ರೆಸ್‌ನ ಕೆಲವು ನಾಯಕರು ದೂರವಾಣಿ ಕರೆ ಮಾಡಿ ಅಗೌರವ ತೋರುತ್ತಿದ್ದಾರೆ ಎಂದು ಸಚಿವ ಸಿ.ಸಿ.ಪಾಟೀಲ ಮತ್ತು ಶಾಸಕ ಅರವಿಂದ ಬೆಲ್ಲದ ಅವರು ಆರೋಪಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಈ ಸಂಬಂಧ ದೂರು ನೀಡಿದ್ದಾರೆ. ಸ್ವಾಮೀಜಿಯವರಿಗೆ ಸೂಕ್ತ ಭದ್ರತಾ ವ್ಯವಸ್ಥೆ ಮಾಡುವುದಾಗಿ ಬೊಮ್ಮಾಯಿ ಭರವಸೆ ನೀಡಿದರು.

‘ಸ್ವಾಮೀಜಿಯವರು 2 ಎ ಮೀಸಲಾತಿಗಾಗಿ ಹೋರಾಟ ಮಾಡಿದ್ದರು. ಸರ್ಕಾರ ಮೀಸಲಾತಿ ಪ್ರಕಟಿಸಿ, ಆದೇಶ ಪತ್ರವನ್ನು ಸ್ವಾಮೀಜಿಯವರಿಗೆ ನೀಡಿದ ನಂತರ ಹೋರಾಟವನ್ನು ಹಿಂದಕ್ಕೆ ಪಡೆದಿದ್ದರು. ಇದರಿಂದ ಅಸಮಾಧಾನಗೊಂಡಿರುವ ಕಾಂಗ್ರೆಸ್‌ನ ಕೆಲವು ನಾಯಕರು ಮದ್ಯಪಾನ ಮಾಡಿ, ಸ್ವಾಮೀಜಿಯವರೊಂದಿಗೆ ಅಗೌರವದಿಂದ ಮಾತನಾಡಿದ್ದಾರೆ. ಈ ಮೂಲಕ ಪಂಚಮಸಾಲಿ ಸಮುದಾಯಕ್ಕೆ ಅಗೌರವವುಂಟು ಮಾಡಿದ್ದಾರೆ’ ಎಂದು ಪಾಟೀಲ ಹೇಳಿದರು.

ADVERTISEMENT

ಮೀಸಲಾತಿ ವಿಚಾರವನ್ನು ಚುನಾವಣಾ ರಾಜಕೀಯಕ್ಕೆ ಬಳಸಿಕೊಳ್ಳಲು ಉದ್ದೇಶಿಸಿತ್ತು. ಮುಖ್ಯಮಂತ್ರಿಯವರ ದಿಟ್ಟ ನಿರ್ಧಾರದಿಂದ ಕಾಂಗ್ರೆಸ್‌ ಹತಾಶೆಗೊಂಡಿದೆ. ಹೀಗಾಗಿ ಸ್ವಾಮೀಜಿಯವರ ಮೇಲೆ ಮುಗಿಬಿದ್ದಿದ್ದಾರೆ. ಪಂಚಮಸಾಲಿ ಸಮುದಾಯ ಎಲ್ಲ ವರ್ಗವನ್ನೂ ಒಟ್ಟಿಗೆ ಕರೆದುಕೊಂಡು ಹೋಗಿದೆ. ಈ ಹೋರಾಟದಿಂದ ಅನೇಕ ಸಮುದಾಯಗಳಿಗೆ ಅನುಕೂಲವಾಗಿದೆ ಎಂದರು.

ಸ್ವಾಮೀಜಿಯವರಿಗೆ ಕರೆ ಮಾಡಿ ಅಗೌರವದಿಂದ ಮಾತನಾಡುತ್ತಿರುವ ಕಾಂಗ್ರೆಸ್‌ ನಾಯಕರು ಹೆಸರು ಹೇಳಿ ಎಂದು ಸುದ್ದಿಗಾರರು ಒತ್ತಾಯಿಸಿದಾಗ, ಹೆಸರು ಹೇಳುವುದಿಲ್ಲ. ಹೋರಾಟದಲ್ಲಿ ಇದ್ದವರೇ ಆ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.