
ಹಾವೇರಿ: ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷ ಆಡಳಿತ ಪೂರೈಸಿರುವ ಬೆನ್ನಲ್ಲೇ ಅಧಿಕಾರ ಹಂಚಿಕೆ ವಿಚಾರವಾಗಿ ಪಕ್ಷದಲ್ಲಿ ಬೆಳವಣಿಗೆ ಆಗುತ್ತಿರುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇದರ ನಡುವೆಯೇ ಹಾವೇರಿಯ ಕೆಲ ಶಾಸಕರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಶುಕ್ರವಾರ ರಾತ್ರಿ ದಿಢೀರ್ ಭೇಟಿಯಾಗಿ ಮಾತುಕತೆ ನಡೆಸಿದರು.
ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಮನೆಗೆ ಶಿಗ್ಗಾವಿ ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ, ಹಾನಗಲ್ ಶಾಸಕ ಶ್ರೀನಿವಾಸ್ ಮಾನೆ, ರಾಣೆಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ ಅವರು ಶುಕ್ರವಾರ ರಾತ್ರಿ ಭೇಟಿ ನೀಡಿದರು. ಅವರ ಜೊತೆಯಲ್ಲಿ ಹಾವೇರಿ–ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಆನಂದ್ ಗಡ್ಡದೇವರಮಠ ಸಹ ಹಾಜರಿದ್ದರು.
‘ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಸಿಗುತ್ತಿದ್ದಂತೆ, ಮುಖ್ಯಮಂತ್ರಿ ಸ್ಥಾನದ ಅಧಿಕಾರ ಹಂಚಿಕೆ ಸಂಬಂಧ ಮಾತುಕತೆ ನಡೆದಿತ್ತು’ ಎಂಬ ಮಾತುಗಳು ಹರಿದಾಡುತ್ತಿವೆ. ಇದಕ್ಕೆ ಪ್ರತಿಯಾಗಿ, ಹಲವು ಶಾಸಕರು ದೆಹಲಿಗೂ ಹೋಗಿ ವರಿಷ್ಠರನ್ನು ಭೇಟಿಯಾದ ಬಗ್ಗೆ ಮಾಹಿತಿಯಿದೆ. ಇದರ ನಡುವೆಯೇ ಹಾವೇರಿಯ ಕೆಲ ಶಾಸಕರು ಸಹ ಡಿ.ಕೆ.ಶಿವಕುಮಾರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಮತದಾರರಲ್ಲಿ ಕುತೂಹಲ ಸೃಷ್ಟಿಸಿದೆ.
ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಇಬ್ಬರೂ ಅಬ್ಬರದ ಪ್ರಚಾರ ನಡೆಸಿದ್ದರು. ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿತ್ತು. ಈಗ ಅದೇ ಕ್ಷೇತ್ರದ ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ ಅವರು ಇತರೆ ಶಾಸಕರ ಜೊತೆಗೆ ಡಿ.ಕೆ. ಶಿವಕುಮಾರ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಕ್ಷೇತ್ರದ ಜನರ ಕುತೂಹಲಕ್ಕೆ ಕಾರಣವಾಗಿದೆ.
‘1968ರಿಂದ ನಮ್ಮ ಕುಟುಂಬ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದೆ. ನಮ್ಮದು ಆ ಬಣ, ಈ ಬನ್ಣ ಇಲ್ಲ. ನಮ್ಮದೇನಿದ್ದರೂ ಕಾಂಗ್ರೆಸ್ ಬಣ’ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಪ್ರಕಟಿಸಿದ್ದ ಶಾಸಕ ಪ್ರಕಾಶ ಕೋಳಿವಾಡ ಅವರು ಡಿ.ಕೆ. ಶಿವಕುಮಾರ್ ಅವರನ್ನು ಶುಕ್ರವಾರ ರಾತ್ರಿ ದಿಢೀರ್ ಭೇಟಿಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ. ಇವರ ನಡೆ ಬಗ್ಗೆ ಮತದಾರರು ಪರಸ್ಪರ ಚರ್ಚೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.