ADVERTISEMENT

ಮಲೆ ಮಹದೇಶ್ವರ ವನ್ಯಧಾಮದಲ್ಲಿ ಹುಲಿಯ ಅರ್ಧ ಕಳೇಬರ ಪತ್ತೆ, ತನಿಖೆಗೆ ಖಂಡ್ರೆ ಆದೇಶ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2025, 5:36 IST
Last Updated 3 ಅಕ್ಟೋಬರ್ 2025, 5:36 IST
   

ಹನೂರು (ಚಾಮರಾಜನಗರ ಜಿಲ್ಲೆ): ಮಲೆ ಮಹದೇಶ್ವರ ವನ್ಯಧಾಮದ ಹನೂರು ಬಫರ್ ವಲಯ ವ್ಯಾಪ್ತಿಯಲ್ಲಿ ಹೆಣ್ಣು ಹುಲಿಯ ಅರ್ಧ ಭಾಗ ಕಳೆಬರ ಪತ್ತೆಯಾಗಿದೆ. ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ಪಿಸಿಸಿಎಫ್ ನೇತೃತ್ವದ ತಂಡದಿಂದ ತನಿಖೆಗೆ ಆದೇಶ ನೀಡಿದ್ದಾರೆ.

ಹನೂರು ಗಸ್ತಿನಲ್ಲಿರುವ ಪಚ್ಚೆದೊಡ್ಡಿ ಗ್ರಾಮದ ಬಳಿ ಗುರುವಾರ ಸಂಜೆ ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ತಿರುಗುವಾಗ ಹುಲಿಯ ಅರ್ಧ ಕಳೇಬರವನ್ನು ಮಣ್ಣಿನಲ್ಲಿ ಹುದುಗಿಸಿಟ್ಟಿದ್ದು ಪತ್ತೆಯಾಗಿದೆ.

ಹುಲಿಯ ತಲೆ, ಭುಜ ಮುಂದಿನ ಕಾಲುಗಳು ಪತ್ತೆಯಾಗಿದ್ದು, ಉಳಿದ ಭಾಗಗಳು ಪತ್ತೆಯಾಗಿಲ್ಲ. ಸಿಕ್ಕಿರುವ ಕಳೇಬರದಲ್ಲಿ ಉಗುರು ಮತ್ತು ಹಲ್ಲುಗಳು ಇವೆ. ಕಳೇಬರದ ಇನ್ನುಳಿದ ಭಾಗವನ್ನು ಹುಡುಕಲು ಕೂಂಬಿಂಗ್ ನಡೆಸಲಾಗುತ್ತಿದೆ. ಕಳ್ಳ ಬೇಟೆ ಪ್ರಕರಣ ಎಂದು ಪ್ರಕರಣ ದಾಖಲಿಸಿ ತನಿಖೆ ಮಾಡಲಾಗುತ್ತಿದೆ. ಶ್ವಾನದಳದ ನೆರವು ಪಡೆಯಲಾಗಿದ್ದು ಶೀಘ್ರ ಆರೋಪಿಗಳನ್ನು ಪತ್ತೆ ಹಚ್ಚಲಾಗುವುದು ಎಂದು ಮಲೆ ಮಹದೇಶ್ವರ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್ ತಿಳಿಸಿದ್ದಾರೆ.

ADVERTISEMENT

ಪ್ರಕಟಣ ಸಂಬಂಧ ತನಿಖೆಗೆ ಲಿಖಿತ ಆದೇಶ ನೀಡಿರುವ ಖಂಡ್ರೆ, ಪಿಸಿಸಿಎಫ್ ಸ್ಮಿತಾ ಬಿಜ್ಜೂರು ಅವರ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಲು ಸೂಚಿಸಿದ್ದಾರೆ.

ಈ ಕಾನನದಲ್ಲಿ ಕಳೆದ 3 ವರ್ಷದಲ್ಲಿ ದಾಖಲಾಗಿರುವ ಕಳ್ಳಬೇಟೆ ಪ್ರಕರಣಗಳ ಬಗ್ಗೆಯೂ ಗಮನ ಹರಿಸಿ, ಹಿಂದಿನ ತನಿಖಾ ವರದಿಗಳನ್ನೂ ಪರಾಮರ್ಶಿಸಿ ಮುಂದೆ ಈ ಭಾಗದಲ್ಲಿ ಇಂತಹ ಘಟನೆ ಮರುಕಳಿಸದಂತೆ ಕ್ರಮವಹಿಸಲು, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಹಾಗೂ ಕಳ್ಳಬೇಟೆಗಾರರ ವಿರುದ್ಧ ಸೂಕ್ತ ಕ್ರಮದ ಶಿಫಾರಸಿನೊಂದಿಗೆ 8 ದಿನಗಳಲ್ಲಿ ವರದಿ ಸಲ್ಲಿಸಲು ಮತ್ತು ಹುಲಿ ಹಂತಕರನ್ನು ಪತ್ತೆಮಾಡಿ ಅವರಿಗೆ ಕಾನೂನಿನಡಿ ದಂಡನೆ ಕೊಡಿಸಲು ತುರ್ತು ಕ್ರಮ ವಹಿಸಿಎ ಎಂದು ಖಂಡ್ರೆ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.