ಮಹೇಶ್ ಶೆಟ್ಟಿ ತಿಮರೋಡಿ
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ಮಾನ್ವಿ ತಾಲ್ಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಿತು.
ಅರ್ಜಿಯನ್ನು ಭಾಗಶಃ ಪುರಸ್ಕರಿಸಿರುವ ನ್ಯಾಯಪೀಠ ‘ಪ್ರಕರಣವನ್ನು ಹೊಸದಾಗಿ ಪರಿಗಣಿಸಿ ಸೂಕ್ತ ಆದೇಶ ಹೊರಡಿಸಿ’ ಎಂದು ಪುತ್ತೂರು ಉಪವಿಭಾಗಾಧಿಕಾರಿಗೆ ನಿರ್ದೇಶಿಸಿದೆ.
ಈ ಹಿಂದಿನ ವಿಚಾರಣೆಯಲ್ಲಿ ಗಡಿಪಾರು ಆದೇಶವನ್ನು ಸಮರ್ಥಿಸಿಕೊಂಡಿದ್ದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ ‘ಸ್ಥಳೀಯ ನಿವಾಸಿಯಾಗಿರುವ ಮಹೇಶ್ ಶೆಟ್ಟಿ ತಿಮರೋಡಿ ಸೌಜನ್ಯ ಚಳವಳಿ ಹೆಸರಲ್ಲಿ ಏನು ಮಾಡುತ್ತಿದ್ದಾರೆ ಎಂಬುದು ಸಾರ್ವಜನಿಕರಿಗೆ ಗೊತ್ತಿದೆ’ ಎಂದು ನ್ಯಾಯಪೀಠಕ್ಕೆ ಅರುಹಿದ್ದರು.
ಇದನ್ನು ಅಲ್ಲಗಳೆದಿದ್ದ ತಿಮರೋಡಿ ಪರ ಪದಾಂಕಿತ ಹಿರಿಯ ವಕೀಲ ತಾರಾನಾಥ ಪೂಜಾರಿ ‘ರಾಜ್ಯ ಸರ್ಕಾರ ತಿಮರೋಡಿ ವಿರುದ್ಧದ ಭಾವನೆ ಹೊಂದಿದೆ. ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ ಎಂಬುದರ ಕುರಿತಾದ ಯಾವುದೇ ವಿವರಗಳನ್ನು ಸಮರ್ಪಕವಾಗಿ ಒದಗಿಸಿಲ್ಲ’ ಎಂದು ಪ್ರತಿಪಾದಿಸಿದ್ದರು. ತಿಮರೋಡಿ ವಿರುದ್ಧ ಹೈಕೋರ್ಟ್ ವಕೀಲ ಎಂ.ಆರ್.ಬಾಲಕೃಷ್ಣ ವಕಾಲತ್ತು ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.