ಮಹೇಶ್ ಶೆಟ್ಟಿ ತಿಮರೋಡಿ
ಬೆಂಗಳೂರು: ‘ನನ್ನನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಗೆ ಒಂಬತ್ತು ತಿಂಗಳ ಕಾಲ ಗಡಿಪಾರು ಮಾಡಿರುವ ಸರ್ಕಾರದ ಕ್ರಮವನ್ನು ರದ್ದುಪಡಿಸಬೇಕು’ ಎಂದು ಕೋರಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದ್ದು, ಗೃಹ ಇಲಾಖೆ ಕಾರ್ಯದರ್ಶಿ, ಪುತ್ತೂರು ಉಪ ವಿಭಾಗಾಧಿಕಾರಿ, ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ, ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್‌ಸ್ಪೆಪೆಕ್ಟರ್ ಅವರನ್ನು ಪ್ರತಿವಾದಿಗಳನ್ನಾಗಿ ಕಾಣಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ ಆರೋಪದಡಿ ತಿಮರೋಡಿ ಅವರನ್ನು 2025ರ ಸೆಪ್ಟೆಂಬರ್ 18ರಂದು ಗಡಿಪಾರು ಮಾಡಿ ಆದೇಶಿಸಲಾಗಿತ್ತು. ಆ ಆದೇಶವನ್ನು ಹೈಕೋರ್ಟ್ 2025ರ ನವೆಂಬರ್ 17ರಂದು ರದ್ದುಪಡಿಸಿತ್ತು. ಅಂತೆಯೇ, ಪ್ರಕರಣವನ್ನು ಪುತ್ತೂರು ಉಪ ವಿಭಾಗಾಧಿಕಾರಿಗೆ ಹಿಂದಿರುಗಿಸಿದ್ದ ನ್ಯಾಯಪೀಠ, ‘ತಿಮರೋಡಿ ವಿವರಣೆ ಪಡೆದು ನಂತರ ಹೊಸದಾಗಿ ಆದೇಶ ಮಾಡಬೇಕು’ ಎಂದು ಉಪ ವಿಭಾಗಾಧಿಕಾರಿಗೆ ಆದೇಶಿಸಿತ್ತು.
ತಿಮರೋಡಿ ಅಹವಾಲು ಆಲಿಸಿದ ಉಪ ವಿಭಾಗಾಧಿಕಾರಿ, ತಿಮರೋಡಿ ಅವರನ್ನು 2025ರ ಡಿಸೆಂಬರ್ 16ರಿಂದ 2026ರ ಸೆಪ್ಟೆಂಬರ್ 16ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣೆ ಸರಹದ್ದಿಗೆ ಒಳಪಟ್ಟಂತೆ ಗಡಿಪಾರು ಮಾಡಿ ಡಿಸೆಂಬರ್ 16ರಂದು ಆದೇಶಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.