ADVERTISEMENT

‘ಕೆಎಸ್‌ಆರ್‌ಟಿಸಿ’ ಕರ್ನಾಟಕದ್ದೇ, ಕೇರಳದ ಪಾಲೆಂಬುದು ಸತ್ಯಕ್ಕೆ ದೂರ: ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 4 ಜೂನ್ 2021, 15:20 IST
Last Updated 4 ಜೂನ್ 2021, 15:20 IST
ಕೆಎಸ್‌ಆರ್‌ಟಿಸಿ (ಸಾಂದರ್ಭಿಕ ಚಿತ್ರ)
ಕೆಎಸ್‌ಆರ್‌ಟಿಸಿ (ಸಾಂದರ್ಭಿಕ ಚಿತ್ರ)   

ಬೆಂಗಳೂರು: ‘ಕೆಎಸ್‌ಆರ್‌ಟಿಸಿ’ ಟ್ರೇಡ್ ಮಾರ್ಕ್‌ ಕರ್ನಾಟಕದ್ದಾಗಿದೆ. ಕೇರಳದ ಪಾಲೆಂಬುದು ಸತ್ಯಕ್ಕೆ ದೂರವಾದ ವಿಚಾರ’ ಎಂದು ಕರ್ನಾಟಕ ರಸ್ತೆ ಸಾರಿಗೆ ನಿಗಮ ಸ್ಪಷ್ಟಪಡಿಸಿದೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಸಂಸ್ಥೆ, ‘ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಇನ್ನು ಮುಂದೆ ‘ಕೆಎಸ್‌ಆರ್‌ಟಿಸಿ’ ಎಂದು ಬಳಸುವಂತಿಲ್ಲವೆಂದು ಕೇಂದ್ರದ ಟ್ರೇಡ್ ಮಾರ್ಕ್ ರಿಜಿಸ್ಟರಿ ಅವರು ಬುಧವಾರ ತನ್ನ ಅಂತಿಮ ತೀರ್ಪನ್ನು ಪ್ರಕಟಿಸಿದ್ದು, ಎರಡು ರಾಜ್ಯಗಳ ನಡುವಿನ ಒಂದು ದಶಕದ ಕಾನೂನಾತ್ಮಕ ಹೋರಾಟವು ಅಂತ್ಯಗೊಂಡಂತಿದೆ ಎಂಬ ಮಾಧ್ಯಮಗಳ ವರದಿಯನ್ನು ನೋಡಿ ಆಶ್ಚರ್ಯವಾಗಿದೆ’ ಎಂದು ತಿಳಿಸಿದೆ.

‘ಇದು ವಾಸ್ತವ ಸತ್ಯಕ್ಕೆ ದೂರವಾದ ವರದಿಯಾಗಿದೆ. ಯಾಕೆಂದರೆ ಸಂಸ್ಥೆಯು ಕೇಂದ್ರ ಟ್ರೇಡ್ ಮಾರ್ಕ್ ರಿಜಿಸ್ಟರಿ ಅವರಿಂದ ಇಂತಹ ಯಾವುದೇ ಸೂಚನೆ ಅಥವಾ ಆದೇಶವನ್ನು ಇಂದಿನವರೆಗೂ ಸ್ವೀಕರಿಸಿರುವುದಿಲ್ಲ‌’ ಎಂದು ಕೆಎಸ್‌ಆರ್‌ಟಿಸಿ ಹೇಳಿದೆ.
‘ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಕೆಎಸ್‌ಆರ್‌ಟಿಸಿಗೆ ನೀಡಲಾದ ಟ್ರೇಡ್ ಮಾರ್ಕ್ ಪ್ರಮಾಣಪತ್ರದ ವಿರುದ್ಧ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿ (ಐಪಿಎಬಿ)ಯ ಮುಂದೆ ಸಲ್ಲಿಸಿದ ಮೇಲ್ಮನವಿಗಳಲ್ಲಿ ಯಾವುದೇ ಅಂತಿಮ ಆದೇಶಗಳನ್ನು ಸಹ ಹೊರಡಿಸಲಾಗಿಲ್ಲ’ ಎಂದಿದೆ.

ಏತನ್ಮಧ್ಯೆ, ಸದರಿ ಮಂಡಳಿಯನ್ನು ದಿ.04.04.2021 ರ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯ ಮೂಲಕ ರದ್ದುಪಡಿಸಲಾಗಿದೆ ಮತ್ತು ಇಲ್ಲಿ ಬಾಕಿ ಇರುವ ಅರ್ಜಿಗಳನ್ನು ಹೈಕೋರ್ಟ್‌ಗೆ ವರ್ಗಾಯಿಸಲಾಗುತ್ತದೆ. ಆದ್ದರಿಂದ, ಕೆಎಸ್‌ಆರ್‌ಟಿಸಿಯ ಟ್ರೇಡ್ ಮಾರ್ಕ್ ನೋಂದಣಿಯು ಪ್ರಸ್ತುತ ಜಾರಿಯಲ್ಲಿದೆ ಮತ್ತು ಕೆಎಸ್‌ಆರ್‌ಟಿಸಿಯು ತನಗೆ ನೀಡಲಾಗಿರುವ ಟ್ರೇಡ್‌ಮಾರ್ಕ್‌ಗಳನ್ನು ಬಳಸಲಾಗುವುದಿಲ್ಲ ಎಂಬ ಸುದ್ದಿ-ವರದಿಗಳು ಸತ್ಯಕ್ಕೆ ದೂರವಾಗಿದೆ ಮತ್ತು ಇದನ್ನು ಕಾನೂನಾತ್ಮಕವಾಗಿ ಒಪ್ಪಲಾಗದು’ ಎಂದು ಹೇಳಿದೆ.

ಆದ್ದರಿಂದ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ‘ಕೆಎಸ್‌ಆರ್‌ಟಿಸಿ’ ಟ್ರೇಡ್‌ಮಾರ್ಕ್ ಬಳಕೆ ಮಾಡುವ ವಿರುದ್ಧವಾಗಿ ಯಾವುದೇ ಆದೇಶ ಮತ್ತು ನಿಷೇಧವಿರುವುದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.