ADVERTISEMENT

ವಿದೇಶ ಪ್ರಯಾಣ: 28 ದಿನಕ್ಕೆ ಎರಡನೆ ಡೋಸ್

​ಪ್ರಜಾವಾಣಿ ವಾರ್ತೆ
Published 15 ಜೂನ್ 2021, 17:05 IST
Last Updated 15 ಜೂನ್ 2021, 17:05 IST
ಕೋವಿಡ್‌ ಲಸಿಕೆ (ಸಾಂದರ್ಭಿಕ ಚಿತ್ರ)
ಕೋವಿಡ್‌ ಲಸಿಕೆ (ಸಾಂದರ್ಭಿಕ ಚಿತ್ರ)   

ಬೆಂಗಳೂರು: ವಿದ್ಯಾಭ್ಯಾಸ ಹಾಗೂ ಉದ್ಯೋಗ ಸಂಬಂಧ ವಿದೇಶಕ್ಕೆ ತೆರಳುವ ಅಭ್ಯರ್ಥಿಗಳಿಗೆ 28 ದಿನಗಳ ಬಳಿಕ ‘ಕೋವಿಶೀಲ್ಡ್‌’ ಲಸಿಕೆಯ ಎರಡನೇ ಡೋಸ್ ವಿತರಣೆ ಮಾಡಲಾಗುತ್ತದೆ.

ಈ ಬಗ್ಗೆ ಕ್ರಮಕೈಗೊಳ್ಳುವಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಚಂದ್ರಶೇಖರ್ ಅವರು ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಸದ್ಯ ವಿದೇಶಕ್ಕೆ ತೆರಳುವವರಿಗೆ ಕೂಡ 12ರಿಂದ 16 ವಾರಗಳ ಅಂತರದಲ್ಲಿ ‘ಕೋವಿಶೀಲ್ಡ್’ ಲಸಿಕೆಯ ಎರಡನೇ ಡೋಸ್ ವಿತರಣೆ ಮಾಡಲಾಗುತ್ತಿತ್ತು. ಇದರಿಂದ ವಿದೇಶಕ್ಕೆ ತೆರಳುವವರಿಗೆ ಸಮಸ್ಯೆಯಾಗಿತ್ತು.

‘ಕೇಂದ್ರ ಆರೋಗ್ಯ ಸಚಿವಾಲಯದ ನಿರ್ದೇಶನದಂತೆ ವಿದೇಶಕ್ಕೆ ತೆರಳುವ ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ಅಂತರರಾಷ್ಟ್ರೀಯ ಮಟ್ಟದ ಒಲಿಂಪಿಕ್ಸ್‌ಗಾಗಿ ಟೋಕಿಯೊಗೆ ತೆರಳುವ ಕ್ರೀಡಾಪಟುಗಳಿಗೆ 28 ದಿನಗಳ ಬಳಿಕ ಲಸಿಕೆ ಒದಗಿಸಬೇಕು. ಅರ್ಹ ಫಲಾನುಭವಿಗಳಿಗೆ ನಿಗದಿಪಡಿಸಲಾದ ದಿನಗಳ ಬಳಿಕ ಎರಡನೇ ಡೋಸ್ ಲಸಿಕೆ ಪಡೆಯಲು ಅವಕಾಶ ನೀಡಬಹುದಾಗಿದೆ. ಮಾದರಿ ಸ್ವಯಂ ಘೋಷಣಾ ಪ್ರಮಾಣ ಪತ್ರದಲ್ಲಿ ಅಭ್ಯರ್ಥಿಯು ನೀಡುವ ಮಾಹಿತಿಯನ್ನು ಪಡೆದು, ದಾಖಲೆಗಳನ್ನು ಪರಿಶೀಲಿಸಿ, ದೃಢೀಕರಣ ಪತ್ರವನ್ನು ನೀಡಬೇಕು. ಈ ಪತ್ರವನ್ನು ಕೋವಿನ್ ಪೋರ್ಟಲ್‌ನಲ್ಲಿ ಅಪ್‌ಡೇಟ್ ಮಾಡಬೇಕು’ ಎಂದು ತಿಳಿಸಿದ್ದಾರೆ.

ADVERTISEMENT

‘ಮೊದಲ ಡೋಸ್ ಲಸಿಕೆ ಪಡೆಯುವಾಗ ನೋಂದಣಿಗಾಗಿ ಪಾಸ್‌ಪೋರ್ಟ್‌ ನಂಬರ್ ನೀಡದಿದ್ದ ಫಲಾನುಭವಿಗಳು ಎರಡನೇ ಡೋಸ್ ಪಡೆಯಲು ಲಸಿಕೆ ಪ್ರಮಾಣಪತ್ರವನ್ನು ಒದಗಿಸಬೇಕು’ ಎಂದು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.